Friday, July 4, 2025
Homeರಾಜ್ಯಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ

ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ

Heavy rain warning in coastal, Malnad areas

ಬೆಂಗಳೂರು, ಜು.3-ನೈರುತ್ಯ ಮುಂಗಾರು ಚೇತರಿಕೆಯಾಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ.ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಗಳಿವೆ. ಅಲ್ಲದೆ, ಪಶ್ಚಿಮ ದಿಕ್ಕಿನಿಂದ ಪೂರ್ವಾಭಿಮುಖವಾಗಿ ತಂಪಾದ ಮೇಲೆ ಗಾಳಿ ಬೀಸಲಿದೆ. ಗಂಟೆಗೆ 40ರಿಂದ 50 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ. ಬೆಟ್ಟಗುಡ್ಡಗಳ ಪ್ರದೇಶದಲ್ಲಿ ಗಾಳಿಯ ವೇಗ 50ರಿಂದ 60 ಕಿ.ಮೀ.ವರೆಗೆ ಇರಲಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಿದೆ. ಬೆಳಗಾವಿ, ರಾಯಚೂರು, ಹಾವೇರಿ, ಧಾರವಾಡ, ಚಿತ್ರದುರ್ಗ, ಮೈಸೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.

ಉಳಿದಂತೆ ಕೆಲವು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಸುಳಗೋಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 209.5 ಮಿ.ಮೀ.ನಷ್ಟು ಭಾರಿ ಮಳೆಯಾಗಿದೆ. ಜುಲೈನಲ್ಲೂ ದಕ್ಷಿಣ ಒಳನಾಡಿನಲ್ಲಿ ಮಳೆ ಕೊರತೆ ಮುಂದುವರೆದಿದೆ. ಆದರೆ, ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಭಾಗದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ.

ಹವಾಮಾನ ಮುನ್ಸೂಚನೆ ಪ್ರಕಾರ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗಲಿದ್ದು, ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ.

RELATED ARTICLES

Latest News