ಬೆಂಗಳೂರು,ಜು.3- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿಂದು ಹಿರಿಯ ಸಚಿವರು, ಅಧಿಕಾರಿಗಳೊಂದಿಗೆ ಮಹತ್ವದ ಸಮಾಲೋಚನೆ ನಡೆಸಲಿದ್ದು, ಕೈಗಾರಿಕೆಯ ಉದ್ದೇಶದ ಭೂಸ್ವಾಧೀನ ಹಾಗೂ ಇತರ ವಿಚಾರಗಳ ಕುರಿತು ಮಹತ್ವದ ಚರ್ಚೆ ನಡೆಸಲಿದ್ದಾರೆ.
ಸಂಜೆ ಗೃಹಕಚೇರಿ ಕಾವೇರಿಯಲ್ಲಿ ನಡೆಯುವ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ, ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕ ಸಚಿವ ಎಂ.ಬಿ. ಪಾಟೀಲ್, ಇಂಧನ ಸಚಿವ ಕೆ.ಜೆ. ಜಾರ್ಜ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ ಖರ್ಗೆ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಕೆಐಎಡಿಬಿಯಿಂದ ದೇವನಹಳ್ಳಿ ತಾಲ್ಲೂಕಿನ 13 ಹಳ್ಳಿಗಳಲ್ಲಿ ಕೈಗಾರಿಕೆ ಉದ್ದೇಶಕ್ಕಾಗಿ 1,700 ಎಕರೆ ಭೂಮಿ ಸ್ವಾಧೀನಗೊಂಡಿದ್ದು, ಅದನ್ನು ವಿರೋಧಿಸಿ ರೈತರು ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರು ಪ್ರತ್ಯೇಕ ಸಭೆ ಕರೆದು ಚರ್ಚಿಸುವ ಮೂಲಕ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ಭೂ ಸ್ವಾಧೀನದಿಂದ ಭೂಮಿಯನ್ನು ಕೈ ಬಿಟ್ಟರೆ ಬೇರೆ ಬೇರೆ ಪ್ರದೇಶಗಳಲ್ಲಿ ಇದೇ ರೀತಿಯ ಚಳುವಳಿಗಳು ಆರಂಭವಾಗುವ ಸಾಧ್ಯತೆಯಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಸರ್ಕಾರದ ಕ್ವೀನ್‌ಸಿಟಿ ಯೋಜನೆ ಚಿಂತನೆಯಲ್ಲಿದೆ. ಅದಕ್ಕೆ ವಿರೋಧ ವ್ಯಕ್ತವಾದರೆ, ಸಾವಿರಾರು ಕೋಟಿ ರೂ.ಗಳ ಬಂಡವಾಳ ಹೂಡಿಕೆಗೆ ಹಿನ್ನಡೆಯಾಗಲಿದೆ. ಈ ನಿಟ್ಟಿನಲ್ಲಿ ರೈತರಿಗೂ ಸಮಧಾನವಾಗುವಂತೆ ಭೂ ಸ್ವಾಧೀನಕ್ಕೂ ಧಕ್ಕೆಯಾಗದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಿದ್ದರಾಮಯ್ಯರವರು ಚರ್ಚೆ ನಡೆಸಲಿದ್ದಾರೆ.
ಅಭಿವೃದ್ಧಿ ಪಡಿಸಿದ ಭೂಮಿಯಲ್ಲಿ ಹೆಚ್ಚಿನ ಪಾಲು ನೀಡಿ ರೈತರ ಮನವೊಲಿಸುವ ಸಲಹೆಗಳು ಕೇಳಿಬಂದಿವೆ. ಭೂಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸುವವರೊಂದಿಗೆ ಮತ್ತೊಮೆ ಚರ್ಚಿಸಿ, ಅಗತ್ಯ ಕ್ರಮಕೈಗೊಳ್ಳಲು ಮುಖ್ಯಮಂತ್ರಿಯವರು ಸಚಿವರ ಮಟ್ಟದ ಸಮಿತಿ ರಚಿಸುವ ಸಾಧ್ಯತೆಗಳಿವೆ. ಸಭೆಗೆ ಪೂರ್ವಭಾವಿಯಾಗಿ ಇಂದು ಬೆಳಗ್ಗೆ ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್ ಪ್ರತ್ಯೇಕ ಚರ್ಚೆ ನಡೆಸಿದ್ದಾರೆ.