ಬೆಂಗಳೂರು,ಜು.18- ನೈರುತ್ಯ ಮುಂಗಾರು ಚೇತರಿಕೆ ಕಂಡಿದ್ದು, ರಾಜ್ಯದ ಹಲವೆಡೆ ಮಳೆಯಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಿದ್ದರೆ, ಒಳನಾಡಿನಲ್ಲಿ ಚದುರಿದಂತೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ.
ಉತ್ತರಕನ್ನಡ, ಕೋಲಾರ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಿದ್ದರೆ ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದ ಮಳೆಯಾಗಿದೆ.ಬೆಳಗಾವಿ, ಬಾಗಲಕೋಟೆ, ಕಲಬುರಗಿ, ಗದಗ, ಕೊಪ್ಪಳ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಮೈಸೂರು, ಧಾರವಾಡ ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಕೆಲವೆಡೆ ಚದುರಿದಂತೆ ಮಳೆಯಾಗಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಒಣಹವೆ ಕಂಡುಬಂದಿದ್ದು, ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ರೋಣಿಹಾಳ್ ಗ್ರಾಮಪಂಚಾಯಿತಿಯಲ್ಲಿ 138 ಮಿ.ಮೀ.ನಷ್ಟು ಅಧಿಕ ಪ್ರಮಾಣದ ಮಳೆ ಬಿದ್ದಿದೆ.
ಅರಬ್ಬಿಸಮುದ್ರದಲ್ಲಿ ಉಂಟಾಗಿರುವ ಟ್ರಫ್‌ನಿಂದಾಗಿ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದ್ದು, ಆಗಾಗ್ಗೆ ಬಲವಾದ ಶೀತಗಾಳಿ ಬೀಸುತ್ತಿದೆ. ರಾಜ್ಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆಗಳಿದ್ದು, ಹವಾಮಾನ ಇಲಾಖೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದೆ.
ಕೊಡಗು, ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಮೈಸೂರು, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದರೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೋಲಾರ, ದಾವಣಗೆರೆ, ಹಾವೇರಿ, ಗದಗ, ಧಾರವಾಡ, ಚಿತ್ರದುರ್ಗ, ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ಶೃಂಗೇರಿ, ಹೊರನಾಡು, ಎನ್.ಆರ್.ಪುರ, ಕೊಪ್ಪ, ಜೈಪುರ ಸೇರಿದಂತೆ ಮತ್ತಿತರೆಡೆ ಮಳೆ ಮುಂದುವರೆದಿದ್ದು, ನೀರಿನ ಮಟ್ಟ ಕಡಿಮೆಯಾಗಿದ್ದ ಹಳ್ಳಕೊಳ್ಳಗಳು ಮತ್ತೆ ಮೈದುಂಬಿ ಹರಿಯುತ್ತಿವೆ.
ರಾಜಧಾನಿ ಬೆಂಗಳೂರಿನಲ್ಲೂ ಸಹ ನಿನ್ನೆ ಸಂಜೆ ಸಾಧಾರಣ ಮಳೆ ಸುರಿದಿದ್ದು, ಮೋಡ ಕವಿದ ವಾತಾವರಣ ಮುಂದುವರೆದಿದೆ. ಶೀತಗಾಳಿ ಬೀಸುತ್ತಿದೆ. ಸಂಜೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಿದೆ. ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಗಳಿವೆ.