Monday, September 1, 2025
Homeರಾಜ್ಯಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ವಾರಾಂತ್ಯದವರೆಗೆ ಮಳೆ ಮುಂದುವರಿಕೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ವಾರಾಂತ್ಯದವರೆಗೆ ಮಳೆ ಮುಂದುವರಿಕೆ

Rains to continue till weekend

ಬೆಂಗಳೂರು, ಸೆ.1-ನೈರುತ್ಯ ಮುಂಗಾರು ಚೇತರಿಸಿಕೊಂಡಿದ್ದು, ಈ ವಾರಾಂತ್ಯದವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಬಂಗಾಳ ಕೊಲ್ಲಿಯ ಉತ್ತರ ಭಾಗದಲ್ಲಿ ಉಂಟಾಗಿರುವ ಮೇಲೈ ಸುಳಿಗಾಳಿಯು ವಾಯುಭಾರ ಕುಸಿತವಾಗಿ ಮಾರ್ಪಾಡು ಆಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ.

ವಾಯುಭಾರ ಕುಸಿತದಿಂದ ರಾಜ್ಯದ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವುದಲ್ಲದೆ, ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ನಿರ್ದೇಶಕ ಸಿ.ಎಸ್‌‍.ಪಾಟೀಲ್‌ ತಿಳಿಸಿದ್ದಾರೆ.

ಬಂಗಾಳಕೊಲ್ಲಿಯ ಉತ್ತರ ಭಾಗದ ಒಡಿಶಾ ಕರಾವಳಿ ಭಾಗದಲ್ಲಿ ನಾಳೆಯೊಳಗೆ ವಾಯುಭಾರ ಕುಸಿತವಾಗುವ ಸಾಧ್ಯತೆಗಳಿವೆ. ಇದರಿಂದ ಸೆ.7ರವರೆಗೆ ಕಲ್ಯಾಣ ಕರ್ನಾಟಕದ ಯಾದಗಿರಿ, ಕೊಪ್ಪಳ, ಬೀದರ್‌ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ವ್ಯಾಪಕ ಹಾಗೂ ಕೆಲವೆಡೆ ಭಾರಿ ಮಳೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಭಾರಿ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ. ಹಾಗೆಯೇ ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಿಲ್ಲ. ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಆದರೆ, ವ್ಯಾಪಕ ಪ್ರಮಾಣದ ಮಳೆಯಾಗುವ ಲಕ್ಷಣಗಳು ಕಂಡುರುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ.ನಿನ್ನೆ ಬೆಂಗಳೂರು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗಿದೆ.

RELATED ARTICLES

Latest News