ನವದೆಹಲಿ,ಸೆ.11-ಭಾರತದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಸಿ.ಪಿ.ರಾಧಾಕೃಷ್ಣನ್ ಅವರು ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ.ರಾಷ್ಟ್ರಪತಿ ಭವನದ ಐತಿಹಾಸಿಕ ದರ್ಬಾರ್ ಹಾಲ್‌ನಲ್ಲಿ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ದೇಶದ ಪ್ರಥಮ ಪ್ರಜೆ ಎನಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಪ ರಾಷ್ಟ್ರಪತಿಗೆ ಅಧಿಕಾರ ಗೌಪ್ಯತೆ ಬೋಧಿಸಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರಮೋದಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಗವಾಯಿ ಸೇರಿದಂತೆ ಕೇಂದ್ರದ ಸಚಿವರು ಭಾಗವಹಿಸಲಿದ್ದಾರೆ.
ಅಧಿಕಾರ ಸ್ವೀಕರಿಸುವ ಮೊದಲು ರಾಧಕೃಷ್ಣನ್ ಅವರು ಮಹಾರಾಷ್ಟ್ರ ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಲಿದ್ದು, ರಾಷ್ಟ್ರಪತಿಗೆ ತಮ ರಾಜೀನಾಮೆ ಪತ್ರವನ್ನು ಕಳುಹಿಸಿಕೊಡಲಿದ್ದಾರೆ. ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದತೆರವಾದ ಸ್ಥಾನಕ್ಕೆ ಚುನಾವಣೆ ನಡೆದಿತ್ತು.
ರಾಧಾಕೃಷ್ಣನ್ ಅವರು ಮಂಗಳವಾರ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ವಿರೋಧ ಪಕ್ಷದ ಅಭ್ಯರ್ಥಿ ಬಿ.ಸುದರ್ಶನ್ ರೆಡ್ಡಿ ಅವರನ್ನು 152 ಮತಗಳ ಅಂತರದಿಂದ ಸೋಲಿಸಿದ್ದರು. ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರ ಆಯ್ಕೆಗೆ ಚುನಾವಣಾ ಆಯೋಗ ಅನುಮೋದನೆ ನೀಡಿದೆ.
ಚುನಾವಣಾ ಪ್ರಾಧಿಕಾರದ ಪ್ರಕಾರ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ಕುಮಾರ್ ಮತ್ತು ಚುನಾವಣಾ ಆಯುಕ್ತರಾದ ವಿವೇಕ್ ಜೋಶಿ ಮತ್ತು ಎಸ್‌ಎಸ್‌ಎಸ್ ಸಂಧು ಅವರು ಚುನಾವಣಾ ಪ್ರಮಾಣೀಕರಣಕ್ಕೆ ಸಹಿ ಹಾಕಿದ್ದರು.
ನಂತರ ಅದರ ಸಹಿ ಮಾಡಿದ ಪ್ರತಿಯನ್ನು ಉಪಚುನಾವಣಾ ಆಯುಕ್ತ ಭಾನುಪ್ರಕಾಶ್ ಯೆಟೂರು ಮತ್ತು ಕಾರ್ಯದರ್ಶಿ ಸುಮನ್‌ಕುಮಾರ್ ದಾಸ್ ಅವರು ಕೇಂದ್ರ ಗೃಹ ಕಾರ್ಯದರ್ಶಿಗೆ ಹಸ್ತಾಂತರಿಸಿದ್ದು, ಇದನ್ನು ಹೊಸ ಉಪಾಧ್ಯಕ್ಷರ ಪ್ರಮಾಣವಚನ ಸ್ವೀಕಾರ ಸಮಾರಂಭದ ವೇಳೆ ಓದಲಾಗುತ್ತದೆ.