ಹಾಸನ : ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದ ಬಳಿ. ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ ತೆರಳುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಜನರ ಗುಂಪಿನ ಮೇಲೆ ನುಗ್ಗಿದ್ದು ಸ್ಥಳದಲ್ಲೇ ಎಂಟು ಜನ ಸಾವನ್ನಪ್ಪಿದ್ದಾರೆ.
ಹೊಳೆನರಸೀಪುರ ಕಡೆ ಹೊರಟಿದ್ದ ಕ್ಯಾಂಟರ್ ಡಿಕ್ಕಿಯಾಗಿ ಈ ಗಂಭೀರ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಅಡ್ಡ ಬಂದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಕ್ಯಾಂಟರ್ ಚಾಲಕ ಮೆರವಣಿಗೆಯ ಮೇಲೆ ವಾಹನ ಹತ್ತಿಸಿದ್ದಾನೆ. ಇನ್ನೂ ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳಕ್ಕೆ ಮಾಜಿ ಸಚಿವ ಎಚ್.ಡಿ.ರೇವಣ್ಣ, ಸೂರಜ್ ರೇವಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೊಸಳೆಹೊಸಳ್ಳಿ ರಾಷ್ಟ್ರೀಯ ಹೆದ್ದಾರಿ 373ರ ಚತುಷ್ಪಥ ರಸ್ತೆಯ ಒಂದು ಬದಿಯಲ್ಲಿ ಗಣೇಶ ಮೂರ್ತಿ ಮೆರವಣಿಗೆಗೆ ಅವಕಾಶ ನೀಡಲಾಗಿತ್ತು. ಈ ವೇಳೆ ವೇಗವಾಗಿ ಬಂದ ಮಹಾರಾಷ್ಟ್ರ ಮೂಲದ ಕ್ಯಾಂಟರ್ ಮೊದಲಿಗೆ ಬೈಕ್ ಗೆ ಡಿಕ್ಕಿ ಹೊಡೆದು ನಂತರ ಮೆರವಣಿಗೆಯಲ್ಲಿ ಸಾಗುತ್ತಿದ್ದ ನೂರಾರು ಜನರ ಮೇಲೆ ಕ್ಯಾಂಟರ್ ನುಗ್ಗಿದೆ. ಇನ್ನು ಸ್ಥಳದಲ್ಲಿ ಸಾವಿಗೀಡಾದವರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರು ಕಣ್ಣೀರಿಡುತ್ತಿದ್ದಾರೆ. ಸ್ಥಳಕ್ಕೆ ಸ್ಥಳೀಯ ಶಾಸಕ ಹೆಚ್.ಡಿ ರೇವಣ್ಣ, ಸಂಸದ ಶ್ರೇಯಸ್ ಪಟೇಲ್ ಆಗಮಿಸಿದ್ದು, ಪೊಲೀಸ್ ವೈಫಲ್ಯವೇ ಘಟನೆಗೆ ಕಾರಣ ಎಂದು ಕಿಡಿಕಾರಿದ್ದಾರೆ.
ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ :
ಹಾಸನ ದುರಂತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, 8 ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಹೇಳಿದ್ದಾರೆ.
ಟ್ರಕ್ ಓಡಿಸುತ್ತಿದ್ದ ಭುವನೇಶ್
ಟ್ರಕ್ ಅನ್ನು ಭುವನೇಶ್ ಎಂಬಾತ ಓಡಿಸುತ್ತಿದ್ದ ಎನ್ನಲಾಗಿದೆ. ಹಾಸನದಿಂದ ಹೊಳೆನರಸೀಪುರ ಕಡೆಗೆ ಟ್ರಕ್ ಹೋಗುತ್ತಿದ್ದು, ಈ ವೇಳೆ ಬೈಕ್ ಸವಾರ ಅಡ್ಡ ಬಂದಿದ್ದಾನೆ. ಈ ವೇಳೆ ಅಡ್ಡ ಬಂದ ಬೈಕ್ ಸವಾರನನ್ನು ಉಳಿಸಲು ಹೋಗಿ ಜನರು ಸಾಗುತ್ತಿದ್ದ ಗಣೇಶೋತ್ಸವದ ಮೆರವಣಿಗೆ ಮೇಲೆ ಟ್ರಕ್ ನುಗ್ಗಿಸಿದ್ದಾನೆ ಎನ್ನಲಾಗಿದೆ. ಈ ದುರ್ಘಟನೆಯು ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ :
ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗೋ ಆತಂಕ ಎದುರಾಗಿದೆ. ಸದ್ಯ ಗಾಯಾಳುಗಳನ್ನು ಹಾಸನದ ಹಿಮ್ಸ್ ಆಸ್ಪತ್ರೆ ಸೇರಿದಂತೆ ನಗರದ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸಂತಾಪ :
ಇನ್ನೂ ಈ ಘಟನೆ ಬಗ್ಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಟ್ವಿಟ್ ಮಾಡಿ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ಅಪಘಾತ ಸಂಭವಿಸಿ ಹಲವರು ಜೀವ ಕಳೆದುಕೊಂಡು, 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ಗಣಪತಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್ ಹರಿದು ಭಕ್ತರ ಸಾವುಂಟಾಗಿರುವುದು ನನಗೆ ಅತ್ಯಂತ ದುಃಖ ಉಂಟು ಮಾಡಿದೆ.
ಇದು ಅತೀ ದುರ್ದೈವದ ಘಟನೆಯಾಗಿದ್ದು, ಮೃತರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ ಹಾಗೂ ದುಃಖತಪ್ತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ. ಎಲ್ಲಾ ಗಾಯಾಳುಗಳು ಅದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರ ಗಾಯಾಳುಗಳಿಗೆ ಉತ್ತಮ, ಉಚಿತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.
15 ಲಕ್ಷ ಪರಿಹಾರಕ್ಕೆ ಆಗ್ರಹ
ಇನ್ನು ಈ ಘಟನೆ ಪೊಲೀಸರ ನಿರ್ಲಕ್ಷ್ಯದಿಂದ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಈ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು. , ಸರ್ಕಾರ ಗಂಭೀರವಾಗಿ ಪರಿಗಣಿಸಿ ಮೃತರ ಸಂತ್ರಸ್ತ ಕುಟುಂಬಳಿಗೆ ಕನಿಷ್ಠ ₹10 ಲಕ್ಷ ರೂ. ಗಳಿಂದ ₹15 ಲಕ್ಷ ಪಹಾರ ಕೊಡಬೇಕು. ಲಾರಿ ಚಾಲಕ ಪಾನಮತ್ತನಾಗಿ ವಾಹನ ಚಲಾಯಿಸುತ್ತಿದ್ದು, ಆತನ ಯಡವಟ್ಟಿನಿಂದಲೇ ಈ ಅಪಘಾತ ಸಂಭವಿಸಿ ಅಮಾಯಕರ ಪ್ರಾಣ ಹೋಗಿದೆ. ಲಾರಿ ಚಾಲಕ ಮತ್ತು ಮಾಲೀಕನ ಮೇಲೆ ಕಠಿಣ ಕ್ರಮ ಜರುಗಿಸಬೇಕು, ಮೃತರ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು ಎಂದು ರೇವಣ್ಣ ಆಗ್ರಹಿಸಿದರು.
ಸ್ಥಳಕ್ಕೆ ಸಂಸದ ಶ್ರೇಯಸ್ ಪಟೇಲ್ ಭೇಟಿ :
ಘಟನೆ ನಡೆದ ಸ್ಥಳಕ್ಕೆ ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿ ಪರಿಶೀಲಿಸಿದರು. ಆನಂತರ ಮಾತನಾಡಿದ ಅವರು, ಇದು ದುದೃಷ್ಟಕರ ಘಟನೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸೂಕ್ತ ತನಿಖೆ ನಡೆಸಿದ ನಂತರ ಅಪಘಾತಕ್ಕೆ ಕಾರಣ ಏನು ಎಂಬುದು ತಿಳಿಯುತ್ತದೆ ಎಂದು ಹೇಳಿದರು.
ಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ದೌಡು
ಹಾಸನ ತಾಲೂಕಿನ ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದು, 20 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಇಂದು ರಾತ್ರಿ ಬಾಧಿತರನ್ನು ಭೇಟಿಯಾಗಲಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು ಸ್ವತಃ ಅಪಘಾತ ಸ್ಥಳಕ್ಕೆ ಭೇಟಿ ನೀಡಿ, ನಂತರ ಗಾಯಾಳುಗಳನ್ನು ದಾಖಲಿಸಲಾಗಿರುವ ಆಸ್ಪತ್ರೆಗೂ ತೆರಳಲಿದ್ದಾರೆ. ಅವರು ಬಾಧಿತರನ್ನು ಹಾಗೂ ಅವರ ಕುಟುಂಬದವರನ್ನು ಭೇಟಿಯಾಗಿ ಧೈರ್ಯ ತುಂಬಿ, ಚಿಕಿತ್ಸಾ ವ್ಯವಸ್ಥೆಗಳ ಪರಿಶೀಲನೆ ನಡೆಸಲಿದ್ದಾರೆ.