ಬೆಂಗಳೂರು : ಹಾಸನ ದುರಂತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, 8 ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಹೇಳಿದ್ದಾರೆ.
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸಂತಾಪ :
ಇನ್ನೂ ಈ ಘಟನೆ ಬಗ್ಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಟ್ವಿಟ್ ಮಾಡಿ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ಅಪಘಾತ ಸಂಭವಿಸಿ ಹಲವರು ಜೀವ ಕಳೆದುಕೊಂಡು, 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ಗಣಪತಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್ ಹರಿದು ಭಕ್ತರ ಸಾವುಂಟಾಗಿರುವುದು ನನಗೆ ಅತ್ಯಂತ ದುಃಖ ಉಂಟು ಮಾಡಿದೆ.
ಇದು ಅತೀ ದುರ್ದೈವದ ಘಟನೆಯಾಗಿದ್ದು, ಮೃತರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ ಹಾಗೂ ದುಃಖತಪ್ತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ. ಎಲ್ಲಾ ಗಾಯಾಳುಗಳು ಅದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರ ಗಾಯಾಳುಗಳಿಗೆ ಉತ್ತಮ, ಉಚಿತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.