ಬೆಂಗಳೂರು,ಸೆ.13- ಹಾಸನ ಘಟನೆ ಮಾಸುವ ಮುನ್ನವೇ ಇಂದು ಬೆಳ್ಳಂಬೆಳಿಗ್ಗೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸುಮನಹಳ್ಳಿ ಜಂಕ್ಷನ್ ರಸ್ತೆಯಲ್ಲಿ ಇಂದು ಬೆಳಿಗ್ಗೆ 7.45ರ ಸುಮಾರಿನಲ್ಲಿ ಅಡ್ಡ ದಾರಿಯಿಂದ ಅತೀ ವೇಗವಾಗಿ ಬರುತ್ತಿದ್ದ ಟ್ರಕ್ ಸುಮನಹಳ್ಳಿ ರಸ್ತೆಗೆ ಇಳಿದಾಗ ಬ್ರೇಕ್‌ಫೇಲ್ಯೂರ್ ಆಗಿ ಮುಂದೆ ಇದ್ದ ಕಾರು ಹಾಗೂ ಆಟೋಗೆ ಡಿಕ್ಕಿ ಹೊಡೆದಿದ್ದರಿಂದ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಆಟೋ ಚಾಲಕ ಹಾಗೂ ಅದರಲ್ಲಿದ್ದ ಪ್ರಯಾಣಿಕ ಮೃತಪಟ್ಟಿದ್ದು, ಅವರ ಹೆಸರು, ವಿಳಾಸ ಸದ್ಯಕ್ಕೆ ತಿಳಿದುಬಂದಿಲ್ಲ.
ಅಪಘಾತದಲ್ಲಿ ಗಾಯಗೊಂಡಿರುವ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗಾಗಿ ದಾಖಲಿಸಲಾಗಿದೆ.ಇಂದು ಬೆಳಿಗ್ಗೆ ಈ ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದರಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.
ಸುದ್ದಿ ತಿಳಿದು ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಅಪಘಾತದಿಂದ ಜಖಂಗೊಂಡಂತಹ ವಾಹನಗಳನ್ನು ತೆರವುಗೊಳಿಸಿ ನಂತರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.