ಮೈಸೂರು,ಸೆ.24– ನಗರದಲ್ಲಿಂದು ಮಹಿಷಾ ದಸರಾ ಆಚರಣೆ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ಮಹಿಷಾಸುರ ಪ್ರತಿಮೆ ಬಳಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ನಾಳೆ ಬೆಳಿಗ್ಗೆ 6 ಗಂಟೆವರೆಗೆ ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರ ಪ್ರತಿಮೆಯ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದ ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಟ್ಕರ್ ಆದೇಶ ಹೊರಡಿಸಿದ್ದಾರೆ.
ಮಹಿಷಾ ದಸರಾ ಆಚರಣೆ ಮಾಡುವ ಸಂಘಟಕರು ಇಂದು ಪುರಭವನದ ಬಳಿ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಬೆಟ್ಟದ ಮೇಲಿರುವ ಮಹಿಷಾಸುರ ಪ್ರತಿಮೆಗೂ ಸಹ ಮಾಲಾರ್ಪಣೆ ಮಾಡಲಾಗುವುದು ಎಂದು ತಿಳಿದುಬಂದ ಹಿನ್ನೆಲೆಯಲ್ಲಿ ಕೆಲ ಸಂಘಟನೆಗಳು ವಿರೋಧವನ್ನು ವ್ಯಕ್ತಪಡಿಸುವ ಸಾಧ್ಯತೆಯಿದ್ದು, ಮಹಿಷಾ ದಸರಾ ಆಚರಣೆ ವಿಚಾರದಲ್ಲಿ ಪರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ನಾಳೆ ಬೆಳಿಗ್ಗೆ 6 ಗಂಟೆವರೆಗೆ ಯಾವುದೇ ಸಭೆ, ಸಮಾರಂಭ, ಮೆರವಣಿಗೆ ನಡೆಸುವಂತಿಲ್ಲ ಎಂದು ತಿಳಿಸಲಾಗಿದೆ.