ಗುಲ್ಬರ್ಗ,ಸೆ.27-ಮಳೆ ಹಾಗೂ ಪ್ರವಾಹ ಪೀಡಿತ ಚಿತ್ತಾಪುರ ತಾಲೂಕಿನ ಹಳೆ ಹೆಬ್ಬಾಳ ಗ್ರಾಮಕ್ಕೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಇಂದು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.ಈ ಸಂದರ್ಭದಲ್ಲಿ ಮಳೆಯಿಂದ ಬಿದ್ದ ಮನೆಯನ್ನು ಪರಿಶೀಲಿಸಿ ಹಾನಿಗೊಳಗಾದ ಮನೆಗಳ ಸರ್ವೆ ನಡೆಸಿ ತಕ್ಷಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಹಳೆ ಹೆಬ್ಬಾಳ ಗ್ರಾಮವನ್ನು ಸ್ಥಳಾಂತರಿಸುವ ಬಗ್ಗೆ ಗ್ರಾಮಸ್ಥರು ಸಚಿವರ ಮುಂದೆ ಬೇಡಿಕೆ ಇಟ್ಟಾಗ, ಗ್ರಾಮಸ್ಥರಿಗೆ ಸ್ಪಂದಿಸಿದ ಸಚಿವರು, ಮಳೆ ತುಸು ಕಡಿಮೆಯಾದ ನಂತರ ಗ್ರಾಮಕ್ಕೆ ಮತ್ತೆ ಭೇಟಿ ನೀಡಿ ಬೇಡಿಕೆ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು.
ಗ್ರಾಮದ ಸ್ಥಳಾಂತರಕ್ಕೆ ತಾವು ಮುಂದಾಗಿರುವುದಾಗಿ ಹೇಳಿದ ಸಚಿವರು, ಎಷ್ಟು ಕುಟುಂಬಗಳು ಸ್ಥಳಾಂತರಗೊಳ್ಳಬೇಕು ಎನ್ನುವ ಬಗ್ಗೆ ತೀರ್ಮಾನಿಸುವಂತೆ ಗ್ರಾಮಸ್ಥರಿಗೆ ಸಲಹೆ ನೀಡಿದರು.
ಈ ನಡುವೆ ಗ್ರಾಮಸ್ಥರೊಂದಿಗೆ ಗ್ರಾಮಸಭೆ ನಡೆಸುವಂತೆ ಸ್ಥಳದಲ್ಲಿದ್ದ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹಾಗೂ ಎಸಿ ಸಾಹಿತ್ಯ ಅವರಿಗೆ ಸೂಚಿಸಿದರು.
ಗ್ರಾಮಸ್ಥರಿಗೆ ಬೇಕಾಗುವ ಸೌಲಭ್ಯ ಒದಗಿಸುವಂತೆ ಕಾಳಗಿ ತಹಸೀಲ್ದಾರ್ ಅವರಿಗೆ ಸೂಚಿಸಿದರು.
ನಿರಂತರ ಮಳೆಯಿಂದ ಬೆಣ್ಣೆತೊರ ಜಲಾಶಯದಿಂದ ನೀರು ಹರಿಬಿಟ್ಟಿದ್ದರಿಂದ ಹಳೆ ಹೆಬ್ಬಾಳ ಗ್ರಾಮಕ್ಕೆ ನೀರು ನುಗ್ಗಿದ್ದರಿಂದ ಗ್ರಾಮಸ್ಥರನ್ನು ತಾತ್ಕಾಲಿಕವಾಗಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿ ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗಿತ್ತು.