Friday, October 3, 2025
Homeರಾಷ್ಟ್ರೀಯ | Nationalಮೊದಲು ಖರ್ಗೆ ಕುಟುಂಬಕ್ಕೆ ಪರಿಹಾರ ಕೊಡಿ : ವಿಜಯೇಂದ್ರ ವ್ಯಂಗ್ಯ

ಮೊದಲು ಖರ್ಗೆ ಕುಟುಂಬಕ್ಕೆ ಪರಿಹಾರ ಕೊಡಿ : ವಿಜಯೇಂದ್ರ ವ್ಯಂಗ್ಯ

First give compensation to Kharge family: Vijayendra

ಕಲಬುರ್ಗಿ,ಸೆ.30- ಮೊದಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬಕ್ಕೆ ಪರಿಹಾರ ಕೊಟ್ಟು ನಂತರ ರೈತರ ಸಂಕಷ್ಟಕ್ಕೂ ಸ್ಪಂದಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಬಳಿ ರೈತರೊಬ್ಬರು ಬೆಳೆ ನಾಶವಾಗಿದೆ. ತೊಗರಿಬೆಳೆ ನಾಶವಾಗಿದೆ. 4 ಎಕರೆಗೆ ಪರಿಹಾರ ಕೊಡಿಸಿ ಎಂದು ಕೇಳಿದರೆ, ನನ್ನದೇ 40 ಎಕರೆ ಇದೆ; ನನ್ನ ಬೆಳೆಯೂ ಸಂಪೂರ್ಣ ನಾಶವಾಗಿದೆ. ಪರಿಹಾರ ಬಂದಿಲ್ಲ ಎನ್ನುತ್ತಿದ್ದಾರೆ. ಹೀಗಾಗಿ ಸರ್ಕಾರ ಮೊದಲು ಅವರ ಕುಟುಂಬಕ್ಕೆ ಪರಿಹಾರ ಕೊಟ್ಟು ನಂತರ ಸಂತ್ರಸ್ಥರಿಗೆ ಕೊಡಲಿ ಎಂದು ಕುಹಕವಾಡಿದರು.

ಎಕರೆಗೆ 25ರಿಂದ 30 ಸಾವಿರ ರೂ. ಪರಿಹಾರ ಕೊಡಬೇಕು. ಒಣಭೂಮಿಗೆ ಎನ್‌ಡಿಆರೆಫ್‌ ನಿಯಮದಡಿ ಹೆಕ್ಟೇರ್‌ಗೆ 6 ಸಾವಿರ ರೂ. ಪರಿಹಾರ ಇತ್ತು. ಮಾಜಿ ಮುಖ್ಯಮಂತ್ರಿ ಬಿ.ಎಸ್‌‍ ಯಡಿಯೂರಪ್ಪ ಅವರು ಎಲ್ಲ ಜಿಲ್ಲೆಗಳಿಗೆ ಪ್ರವಾಸ ಮಾಡಿ ಪ್ರವಾಹ ಪೀಡಿತರಿಗೆ ರಾಜ್ಯದಿಂದ ಎನ್‌ಡಿಆರ್‌ಎಫ್‌ ಮಾದರಿಯ ನೆರವು ನೀಡಿದ್ದರು. ಸಿದ್ದರಾಮಯ್ಯನವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಆರೋಪ ಮಾಡುತ್ತಿಲ್ಲ. ಆ ಕಾಳಜಿಯನ್ನು ತೋರಿಸಬೇಕು. ಸಂದಿಗ್ಧ ಪರಿಸ್ಥಿತಿಯಲ್ಲಿರುವ ರೈತರ ಬಗ್ಗೆ ಈಗ ನೀವು ಕಾಳಜಿ ತೋರಿಸದೇ ಇದ್ದರೆ ಇನ್ಯಾವಾಗ ಕಾಳಜಿ ತೋರಿಸುತ್ತೀರಿ ಎಂದು ಪ್ರಶ್ನಿಸಿದರು.

ಹಿಂದೂ ಸಮಾಜ ವಿಭಜನೆ
ಜಾತಿ ಸಮೀಕ್ಷೆ ಕುರಿತು ಪ್ರತಿಕ್ರಿಯೆ ನೀಡಿದ ವಿಜಯೇಂದ್ರ ಅವರು, ಮುಖ್ಯಮಂತ್ರಿಗಳು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಕೇಂದ್ರ ಸರಕಾರದ ಜಾತಿ ಸಮೀಕ್ಷೆಯನ್ನೂ ವಿರೋಧಿಸುತ್ತೀರಾ ಎಂದು ಕೇಳಿದ್ದಾರೆ. ಕಾಂತರಾಜು ವರದಿಗೆ 180 ಕೋಟಿ ಖರ್ಚು ಮಾಡಿದ್ದೀರಲ್ಲವೇ? ನೀವೇ ಮುಖ್ಯಮಂತ್ರಿ ಇದ್ದರೂ ಅದನ್ನು ಅನುಷ್ಠಾನ ಮಾಡಿಲ್ಲವೇಕೆ ಎಂದು ಪ್ರಶ್ನಿಸಿದರು.

ಇವತ್ತು 500- 600 ಕೋಟಿ ಖರ್ಚು ಮಾಡಿ ಸಮೀಕ್ಷೆ ಮಾಡುವುದನ್ನು ಬಿಜೆಪಿ ವಿರೋಧಿಸಲು ಹೊರಟಿಲ್ಲ. ಸ್ವಾತಂತ್ರ್ಯಾ ನಂತರದಲ್ಲಿ ಹಿಂದಿನ ಕಾಂಗ್ರೆಸ್‌‍, ಯುಪಿಎ ಸರಕಾರವು ಜಾತಿ ಗಣತಿ ಕುರಿತು ಇಂಥ ದಿಟ್ಟ ನಿರ್ಧಾರ ಮಾಡಿರಲಿಲ್ಲ. ಮನಮೋಹನ್‌ ಸಿಂಗ್‌ ಅವರ ಸರಕಾರ ತೀರ್ಮಾನ ಮಾಡಿದರೂ ರಾಹುಲ್‌ ಗಾಂಧಿ ಅದನ್ನು ವಿರೋಧಿಸಿದ್ದರು ಎಂದು ದೂರಿದರು.

ರಾಜ್ಯ ಸರಕಾರವು ಜಾತಿ ಜನಗಣತಿ ನೆಪದಲ್ಲಿ ಪಗಡೆಯಾಟ ಮಾಡಲು ಹೊರಟಿದೆ. ಹಿಂದೂ ಸಮಾಜ ಒಡೆಯಲು ಹೊರಟಿದ್ದಾರೆ. ರಾಜ್ಯ ಸರಕಾರಕ್ಕೆ ಅಧಿಕಾರ ಇದೆಯೋ ಇಲ್ಲವೋ; ನಾವು ಜಾತಿ ಜನಗಣತಿಯನ್ನು ವಿರೋಧಿಸುತ್ತಿಲ್ಲ. ಸಿಎಂ ಇಚ್ಛಾಶಕ್ತಿ ಬಗ್ಗೆ ಗೊಂದಲ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಜಾತಿ ಜನಗಣತಿ ಮಾಡಲು ಹೊರಟಿದ್ದಾರಾ ಅಥವಾ ಪ್ರಾಮಾಣಿಕವಾಗಿ ಹಿಂದುಳಿದ, ಶೋಷಿತ ಸಮುದಾಯಗಳಿಗೆ ನ್ಯಾಯ ಕೊಡಲೆಂದು ಇದನ್ನು ಮಾಡುತ್ತಿದ್ದಾರಾ? ಅವರಲ್ಲಿ ಪ್ರಾಮಾಣಿಕ ಕಳಕಳಿ ಕಾಣುತ್ತಿಲ್ಲ; ಜನರಲ್ಲೂ ಅನುಮಾನ ಹುಟ್ಟುಹಾಕಿದ್ದಾರೆ ಎಂದು ಆಕ್ಷೇಪಿಸಿದರು.

ಶೋಷಿತ- ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ನ್ಯಾಯ ಕೊಡಬೇಕೆಂಬ ಬದ್ಧತೆ ಬಿಜೆಪಿಗೆ ಸ್ಪಷ್ಟವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಸಿದ್ದರಾಮಯ್ಯನವರ ಮನಸ್ಥಿತಿಗೆ ನಮ ವಿರೋಧ ಇದೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು.ಹೈಕೋರ್ಟ್‌ ಏನು ಆದೇಶ ಮಾಡಿದೆ? ಯಾಕೆ ಕೆಲಸಕ್ಕೆ ಬಾರದ ಪ್ರಶ್ನೆಗಳನ್ನು ಇಟ್ಟುಕೊಂಡಿದ್ದಾರೆ? 60ಕ್ಕೂ ಹೆಚ್ಚು ಪ್ರಶ್ನೆಗಳಿದ್ದು, ಇದರಲ್ಲಿ ಎಲ್ಲವೂ ಕಡ್ಡಾಯವಲ್ಲ ಎಂದು ರಾಜ್ಯ ಹೈಕೋರ್ಟ್‌ ತಿಳಿಸಿದೆ ಎಂದು ಹೇಳಿದರು.

ಈ ವೇಳೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ.ಎಸ್‌‍.ಪಾಟೀಲ್‌ ನಡಹಳ್ಳಿ, ಮಾಜಿ ಸಂಸದ ಉಮೇಶ್‌ ಜಾಧವ್‌, ಶಾಸಕ ಬಸವರಾಜ ಮತ್ತಿಮೂಡ್‌, ವಿಧಾನಪರಿಷತ್‌ ಸದಸ್ಯರಾದ ಬಿ.ಜಿ.ಪಾಟೀಲ್‌, ಶಶಿಲ್‌ ನಮೋಶಿ, ಮಾಜಿ ಶಾಸಕರಾದ ಅಮರನಾಥ ಪಾಟೀಲ್‌, ದತ್ತಾತ್ರೇಯ ಪಾಟೀಲ್‌ ರೇವೂರ್‌, ಬಿಜೆಪಿ ಕಲಬುರಗಿ ನಗರ ಜಿಲ್ಲಾಧ್ಯಕ್ಷ ಚಂದ್ರಕಾಂತ್‌ ಬಿ. ಪಾಟೀಲ್‌, ಕಲಬುರಗಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ್‌ ಬಗಲಿ ಹಾಗೂ ಮುಖಂಡರು ಇದ್ದರು.

RELATED ARTICLES

Latest News