ಬೆಂಗಳೂರು, ಅ.5- ಲಿಂಗಾಯತ ಪ್ರತ್ಯೇಕ ಧರ್ಮದ ಚರ್ಚೆ ಮತ್ತೊಮೆ ಮುನ್ನೆಲೆಗೆ ಬಂದಿದೆ. ಬೇಡಿಕೆ ಈಡೇರುವವರಿಗೂ ಹೋರಾಟ ಮುಂದುವರೆಯಬೇಕೆಂಬ ಸಲಹೆ ಗಳು ಕೇಳಿ ಬಂದಿವೆ.
ನಗರದ ಅರಮನೆ ಮೈದಾನದಲ್ಲಿ ನಡೆದ ಬಸವಸಂಸ್ಕೃತಿ ಅಧ್ಯಯನ 2025ರ ಸಮಾರೋಪದಲ್ಲಿ ಮಾತನಾಡಿದ ನ್ಯಾಯಮೂರ್ತಿ ನಾಗಮೋಹನ ದಾಸ್, ಈ ಹಿಂದೆ ತಮ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಸಮಿತಿ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಶಿಫಾರಸು ಮಾಡಿತ್ತು. ಅದನ್ನು ಆಧರಿಸಿ, ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿತ್ತು ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರ ಯಾವುದೇ ಸಕಾರಣ ನೀಡದೆ ಪ್ರಸ್ತಾವನೆಯನ್ನು ವಾಪಸ್ ಕಳುಹಿಸಿದೆ. ರಾಜ್ಯ ಸರ್ಕಾರ ಮತ್ತೊಮೆ ವಿವರಣೆ ಹಾಗೂ ಸ್ಪಷ್ಟನೆಗಳೊಂದಿಗೆ ಕೇಂದ್ರಕ್ಕೆ ಶಿಫಾರಸು ಕಳುಹಿಸಬೇಕು ಎಂದು ಸಲಹೆ ನೀಡಿದ್ದಾರೆ.
ಲಿಂಗಾಯತ ಧರ್ಮಕ್ಕೆ ಧಾರ್ಮಿಕ ಅಲ್ಪ ಸಂಖ್ಯಾತ ಧರ್ಮದ ಮಾನ್ಯತೆ ಸಿಗುವವರೆಗೂ ಹೋರಾಟ ಮುಂದುವರೆಯಬೇಕು. ಈ ಹೋರಾಟದಲ್ಲಿ ಮಿತ್ರರು ಯಾರು, ಶತ್ರುಗಳು ಯಾರು ಎಂದು ಗುರುತಿಸಲು ಸಾಧ್ಯವಾಗಬೇಕು. ಶತ್ರುಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಹೋರಾಟ ನಡೆಸಿದರೆ, ಅದು ಯಶಸ್ವಿಯಾಗುವುದಿಲ್ಲ. ಶತ್ರುಗಳನ್ನು ಹೊರಗಿಟ್ಟು ಹೋರಾಟ ರೂಪಿಸಬೇಕು ಎಂದು ಕರೆ ನೀಡಿದರು.
ಸಮಾನ ಮನಸ್ಕರ ಜೊತೆಗೂಡಿ ಸೈದ್ಧಾಂತಿಕವಾಗಿ ಹೋರಾಟ ನಡೆಸಿದರೆ, ಖಂಡಿತ ಯಶಸ್ಸು ಸಿಗುತ್ತದೆ ಎಂದು ನಾಗಮೋಹನ್ದಾಸ್ ಅಭಿಪ್ರಾಯಪಟ್ಟರು.
ಹಿನ್ನೆಲೆ:
ಈ ಹಿಂದೆ 2013ರಿಂದ 18ರ ನಡುವೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ನಡೆದಿತ್ತು. ಆದರೆ ಅದೇ ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆಯಲ್ಲಿ ಮುಳುವಾಗಿತ್ತು. ಸಿದ್ದರಾಮಯ್ಯ ಅವರ ಸರ್ಕಾರ ಹಲವು ಭಾಗ್ಯ ಸರಣಿಯ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅದು ಪ್ರಯೋಜನವಾಗದೇ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮುಗ್ಗರಿಸಿತ್ತು. ಇದಕ್ಕೆ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟವೇ ಕಾರಣ ಎಂದು ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕರು ಆಕ್ಷೇಪ ವ್ಯಕ್ತಪಡಿಸಿದರು.
ಸುಮಾರು 7 ವರ್ಷಗಳ ಕಾಲ ತಣ್ಣಗಿದ್ದ ಈ ವಿವಾದ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಅಧ್ಯಯನ ಸಮಿತಿಯ ಮುಖ್ಯಸ್ಥರಾಗಿದ್ದ ನ್ಯಾ. ನಾಗಮೋಹನ್ ದಾಸ್ ಅವರೇ ಈ ಬಗ್ಗೆ ಹೇಳಿಕೆ ನೀಡಿರುವುದು ಹೊದ ಚರ್ಚೆಗಳನ್ನು ಹುಟ್ಟು ಹಾಕಿದೆ.
ವೇದಿಕೆಯಲ್ಲಿ ನಾಡಿನ ಬಹುತೇಕ ಮಠಾಧೀಶರು, ಪ್ರಭಾವಿ ಹಾಗೂ ಪ್ರಮುಖ ನಾಯಕರು ಭಾಗವಹಿಸಿದ್ದರು. ನಾಗಮೋಹನ್ದಾಸ್ ಹೇಳಿಕೆಗೆ ಚಪ್ಪಾಳೆ ತಟ್ಟಿ ಸ್ವಾಗತಿಸಲಾಯಿತು.
ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದ ವೇದಿಕೆಯಲ್ಲಿ ಪ್ರಾಸ್ತಾವಿಕ ಮಾತನಾಡಿದ ಜಾಗತಿಕ ಲಿಂಗಾಯತ ಮಹಾ ಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ಎಸ್.ಎಂ. ಜಾಮದಾರ್, ಲಿಂಗಾಯತ ಧರ್ಮದ ಅಲ್ಪಸಂಖ್ಯಾತ ಸ್ಥಾನಮಾನ ಹೋರಾಟವನ್ನು ಸರಿಸಿಕೊಂಡರು. ಸಿದ್ದರಾಮಯ್ಯ ಸರ್ಕಾರ ಹಿಂದೆ ಈ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿತ್ತು ಎಂದು ಹೇಳಿದರು.