ಬೆಂಗಳೂರು, ಅ.14- ಇತ್ತೀಚೆಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ .ಶಿವಕುಮಾರ್ ಅವರ ನಿವಾಸಗಳನ್ನು ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಹಾಕಿರುವ ಮಾಹಿತಿ ಬೆಳಕಿಗೆ ಬಂದಿದೆ.
ತಮಿಳುನಾಡಿನ ವ್ಯಕ್ತಿಯಿಂದ ಬೆದರಿಕೆ ಬಂದಿದೆ ಎಂದು ಅನುಮಾನಿಸಲಾಗಿದ್ದು, ಆರೋಪಿಯನ್ನು ಪತ್ತ್ತೆ ಹಚ್ಚಲು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಕ್ಟೋಬರ್ 11 ರಂದು ತಮಿಳುನಾಡು ಡಿಜಿಪಿಗೆ ನಿರ್ದಿಷ್ಟ ಐಡಿಯಿಂದ ಇಮೇಲ್‌ಗಳನ್ನು ಕಳುಹಿಸಲಾಗಿದೆ, ತಕ್ಷಣವೇ ಕರ್ನಾಟಕ ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಯಿತು. ಅನಂತರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ashwinshekher@outlook.com ನಿಂದ ಬಂದಿರುವ ಈಮೇಲ್‌ನಲ್ಲಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಇಬ್ಬರ ನಿವಾಸಗಳಲ್ಲಿ ನಾಲ್ಕು ಆರ್‌ಡಿಎಕ್‌್ಸ ಹಾಗೂ ಸುಧಾರಿತ ಐಇಡಿಗಳನ್ನು ಇರಿಸಲಾಗಿದೆ. ಅವುಗಳನ್ನು ರಿಮೋಟ್ ಮೂಲಕ ಸ್ಫೋಟಿಸಲಾಗುವುದು ಎಂದು ಬೆದರಿಕೆ ಹಾಕಲಾಗಿತ್ತು.
ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಬಾಂಬ್ ಪತ್ತೆ ದಳ ಎರಡೂ ನಿವಾಸಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಆದರೆ ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 351(4) (ಕ್ರಿಮಿನಲ್ ಬೆದರಿಕೆ) ಮತ್ತು 353(1)(ಬಿ) (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. ತಮಿಳುನಾಡಿನ ವ್ಯಕ್ತಿಯೊಬ್ಬರ ಇಮೇಲ್ ಐಡಿಯನ್ನು ಟ್ರ್ಯಾಕ್ ಮಾಡಲಾಗಿದ್ದು, ಆರೊಪಿಯನ್ನು ಬಂಧಿಸಲು ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಕಳೆದ ಕೆಲವು ತಿಂಗಳುಗಳಿಂದ ಇದೇ ರೀತಿಯ ಬೆದರಿಕೆಗಳು ಮತ್ತುಮಾಹಿತಿಗಳು ಪದೇ ಪದೇ ಇಮೇಲ್ ಮೂಲಕ ಬರುತ್ತಿವೆ. ಬೆದರಿಕೆಯ ಇಮೇಲ್‌ಗಳ ಕಳುಹಿಸುವವರನ್ನು ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ಸಹ ರಚಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಇಂದಿನ ಪತ್ರಿಕಾಗೋಷ್ಟಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿಮಂತ್ ಕುಮಾರ್ ಸಿಂಗ್, ಬೆದರಿಕೆ ಸಂದೇಶಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.