ಬೆಂಗಳೂರು. ನ.4- ಬಿಹಾರದ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡಲು ಕಾರ್ಮಿಕರಿಗೆ ಮೂರು ದಿನಗಳ ವೇತನ ಸಹಿತ ರಜೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಯಮಿದಾರರಿಗೆ ಮನವಿ ಮಾಡಿದ್ದಾರೆ.ಈ ಕುರಿತು ಪತ್ರ ಬರೆದಿರುವ ಡಿ.ಕೆ.ಶಿವಕುಮಾರ್ ಬಿಹಾರ ರಾಜ್ಯದ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ನವೆಂಬರ್ 6 ಮತ್ತು 11ರಂದು ಮತದಾನವಾಗಲಿದೆ.
ಬೆಂಗಳೂರು ಮತ್ತು ಕರ್ನಾಟಕದ ವಿವಿಧ ಭಾಗಗಳಲ್ಲಿ ಬಿಹಾರದ ನಿವಾಸಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಎಲ್ಲಾ ಕಂಪನಿಗಳು, ವಾಣಿಜ್ಯ ಉದ್ಯಮಿಗಳು, ಹೋಟೆಲ್‌ಗಳು, ಗುತ್ತಿಗೆದಾರರು, ಬಿಲ್ಡರ್‌ರಸಗಳು, ಅಂಗಡಿ ಮುಂಗಟ್ಟುಗಳು ಹಾಗೂ ಇತರ ಉದ್ದಿಮೆದಾರರು ಬಿಹಾರದ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸಲು ಅನುಕೂಲವಾಗುವಂತೆ ರಾಜ್ಯದಲ್ಲಿ ನೆಲೆಸಿರುವವರಿಗೆ ಕನಿಷ್ಠ ಮೂರು ದಿನಗಳ ವೇತನ ಸಹಿತ ರಜೆ ನೀಡಬೇಕು. ಈ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ.
ಇತ್ತೀಚೆಗೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಡಿ.ಕೆ.ಶಿವಕುಮಾರ್ ಬಿಹಾರಿಗಳ ಜೊತೆ ಸಂವಾದ ನಡೆಸಿದರು. ತವರೂರಿಗೆ ತೆರಳಿ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು. ಅದಕ್ಕೆ ಪೂರಕವಾಗಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದಾಗಿ ಭರವಸೆ ನೀಡಿದರು. ಅದರಂತೆ ಉದ್ಯಮಿದಾರರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿಕೊಂಡಿದ್ದಾರೆ.
