ಬೀದರ್,ನ.5-ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ದತ್ತಾತ್ರೇಯ ಭಕ್ತರು ಮೃತಪಟ್ಟಿರುವ ಘಟನೆ ಧನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಮೃತಪಟ್ಟವರನ್ನು ತೆಲಂಗಾಣ ಮೂಲದ ರಾಚಪ್ಪ, ನವೀನ್, ಕಾಶಿನಾಥ್ ಮತ್ತು ನಾಗರಾಜ್ ಎಂದು ಗುರುತಿಸಲಾಗಿದೆ.
ಶಿಫ್‌್ಟ ಕಾರಿನಲ್ಲಿ ಐದು ಮಂದಿ ತೆಲಂಗಾಣದಿಂದ ಕಲಬುರಗಿಯ ಗಾಣಗಾಪುರ ದತ್ತಾತ್ರೇಯ ದೇಗುಲಕ್ಕೆ ಬಂದಿದ್ದರು. ದೇವರ ದರ್ಶನ ಮುಗಿಸಿಕೊಂಡು ವಾಪಸ್ ತೆಲಂಗಾಣಕ್ಕೆ ತೆರಳುತ್ತಿದ್ದರು. ಇಂದು ಬೆಳಗ್ಗೆ 7.20 ರ ಸುಮಾರಿನಲ್ಲಿ ಇವರ ಕಾರು ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ನೀಲಮನಳ್ಳಿ ತಾಂಡಾ ಬಳಿ ಹೋಗುತ್ತಿದ್ದಾಗ ಎದುರಿನಿಂದ ಅತೀ ವೇಗವಾಗಿ ಬಂದ ಕೊರಿಯರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಎರಡು ವಾಹನಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿವೆ.
ಸುದ್ದಿ ತಿಳಿದು ಧನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಕಾರಿನೊಳಗೆ ಸಿಕ್ಕಿಕೊಂಡಿದ್ದ ನಾಲ್ವರ ಮೃತದೇಹಗಳನ್ನು ಸ್ಥಳೀಯರ ನೆರವಿನಿಂದ ಹೊರಗೆ ತೆಗೆದಿದ್ದಾರೆ. ಗಂಭೀರ ಗಾಯಗೊಂಡಿದ್ದ ಮತ್ತೊಬ್ಬರನ್ನು ಬಿಮ್ಸೌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ನಾಲ್ವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಮೃತಪಟ್ಟವರ ಪೈಕಿ ನಾಗರಾಜ್ ಎಂಬುವವರು ನಾರಾಯಣ ಖೇಡ್‌ನ ಪಿಯುಸಿ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು. ಧನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
