ಚಿತ್ರದುರ್ಗ,ಫೆ.27- ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗೊಂಡಿರುವ ಘಟನೆ ಚಳ್ಳಕೆರೆ ತಾಲ್ಲೂಕು ಹಿರೇಹಳ್ಳಿ ಟೋಲ್ ಬಳಿ ನಡೆದಿದೆ.
ಮೃತರನ್ನು ಕಾರು ಚಾಲಕ ನರಸಿಂಹಮೂರ್ತಿ(40) ಲೋಹಿತ್ (38) ಗಂಗಾಧರ (32)ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಶಿವಕುಮಾರ್ (39) ಹಾಗೂ ಸದಾಶಿವಯ್ಯ(42) ಇವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ತುಮಕೂರು ಜಿಲ್ಲೆ ಕುಣಿಗಲ್ ಮೂಲದವರಾಗಿದ್ದು, ಮಂತ್ರಾಲಯಕ್ಕೆ ಹೋಗಿ ದರ್ಶನ ಮಾಡಿಕೊಂಡು ವಾಪಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.ನಿನ್ನೆ ಸಂಜೆ ಹಿರೇಹಳ್ಳಿಯ ಟೋಲ್ ಬಳಿ ಲೋಡ್ ತುಂಬಿಕೊಂಡು ನಿಂತಿದ್ದ ಆಂಧ್ರ ಮೂಲದ ಲಾರಿಗೆ ಬಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದ್ದು, ಅಪಘಾತಕ್ಕೆ ಕಾರು ಚಾಲಕನ ಅಜಾಗರೂಕತೆ ಹಾಗೂ ಅತಿ ವೇಗವೇ ಕಾರಣ ಎನ್ನಲಾಗಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಡಿಷನಲ್ ಎಸ್ಪಿ ಶಿವಕುಮಾರ್, ಡಿವೈಎಸ್ ಪಿ ಸತ್ಯನಾರಾಯಣ ರಾವ್ ಸೇರಿದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ . ತಳುಕು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
