ಬೆಂಗಳೂರು,ಡಿ.1- ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನ ಹಾಗೂ ಲೋಕಸಭೆ ಚುನಾವಣೆ ಕಾರ್ಯತಂತ್ರ ಕುರಿತಂತೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ.
ರೇಸ್‍ಕೋರ್ಸ್ ರಸ್ತೆಯಲ್ಲಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಸೇರಿದ ಫ್ಲಾಟ್‍ನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಕೆಲವೇ ಕೆಲವು ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದರು.
ಸುಮಾರು 2 ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಅಧಿವೇಶನದ ವೇಳೆ ಸರ್ಕಾರದ ವಿರುದ್ಧ ಒಗ್ಗಟ್ಟಿನಿಂದ ಹೋರಾಟ ಮಾಡಬೇಕು. ಸರ್ಕಾರದ ವೈಫಲ್ಯವನ್ನು ಈ ಅಧಿವೇಶನದಲ್ಲಿ ಎತ್ತಿ ತೋರಿಸಿ ಜನರಿಗೆ ಮನವರಿಕೆ ಮಾಡಿಕೊಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ.
ಸರ್ಕಾರದ ವಿರುದ್ಧ ಸ್ವಪಕ್ಷೀಯರು ಮಾಡುತ್ತಿರುವ ಆರೋಪಗಳು ಭ್ರಷ್ಟಾಚಾರ, ಶಾಸಕರೇ ಪತ್ರ ಬರೆದಿರುವುದು ಬರ ನಿರ್ವಹಣೆಯಲ್ಲಿ ವೈಫಲ್ಯ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಲು ಉಭಯ ಪಕ್ಷದ ನಾಯಕರು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ. ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಲಾಗುತ್ತಿದೆ. 10 ಕೆ.ಜಿ. ಅಕ್ಕಿಯನ್ನು ಕೊಡದೆ, ಫಲಾನುಭವಿಗಳ ಖಾತೆಗೆ ಹಣವನ್ನೂ ಹಾಕದೆ ಮೋದಿ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಎಂಬ ಅಪಪ್ರಚಾರ ನಡೆಸಲಾಗಿದೆ.
ದುಬೈನಲ್ಲಿ ಮೊಳಗಿತು ‘ಭಾರತ್ ಮಾತಾ ಕೀ ಜೈ’ ಘೋಷಣೆ
ಗೃಹಲಕ್ಷ್ಮಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನ ಮಾಡುತ್ತಿಲ್ಲ. ನವೆಂಬರ್ ತಿಂಗಳು ಮುಗಿದರೂ ಶೇ. 50 ರಷ್ಟು ಫಲಾನುಭವಿಗಳಿಗೆ ಹಣ ಸಂದಾಯವಾಗಿಲ್ಲ. ಇನ್ನು ಅಧಿಕಾರಕ್ಕೆ ಬಂದ ಮೊದಲ ಸಂಪುಟದಲ್ಲಿ 5 ಗ್ಯಾರಂಟಿಗಳನ್ನು ಅನುಷ್ಠಾನ ಮಾಡುವುದಾಗಿ ಘೋಷಣೆ ಮಾಡಲಾಗಿತ್ತು.
ಪದವೀಧರರಿಗೆ ಪ್ರತಿ ತಿಂಗಳು ಮಾಸಾಶನ ನೀಡುವ ಯುವನಿಧಿ ಯೋಜನೆ ಈಗಲೂ ಅನುಷ್ಠಾನವಾಗಿಲ್ಲ. ಇದರ ಬಗ್ಗೆಯೂ ಸರ್ಕಾರದ ಕಿವಿ ಹಿಂಡುವ ಕೆಲಸವನ್ನು ಮಾಡಬೇಕೆಂಬ ಅಭಿಪ್ರಾಯ ಕೇಳಿಬಂದಿದೆ. ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ಲೋಕಸಭೆ ಚುನಾವಣೆಗೆ ಸಿದ್ಧತೆಯನ್ನು ಕೈಗೊಳ್ಳಬೇಕು. 2 ರಿಂದ 3 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ 2024 ರ ಲೋಕಸಭೆ ಚುನಾವಣೆಗೆ ಸಿದ್ಧತೆಯನ್ನು ಆರಂಭಿಸಬೇಕು.
ಕ್ಷೇತ್ರ ಹಂಚಿಕೆ ಸರ್ಕಾರದ ವಿರುದ್ಧ ಜನಾಂಧೋಲನ ರೂಪಿಸುವುದು, ಚುನಾವಣೆ ಕಾರ್ಯತಂತ್ರ, ಜಂಟಿ ಪ್ರಚಾರ ಹೀಗೆ ಹಲವು ವಿಷಯಗಳ ಬಗ್ಗೆ ಕುಮಾರಸ್ವಾಮಿ, ಅಶೋಕ್ ಮತ್ತು ವಿಜಯೇಂದ್ರ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.