ಬೆಂಗಳೂರು, ಡಿ. 5- ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯಾದ್ಯಂತ ಮಿಂಚಿನ ದಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ 63 ಕಡೆ 13 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಅಪಾರ ಪ್ರಮಾಣದ ಅಕ್ರಮ ಸಂಪತ್ತನ್ನು ಬಯಲಿಗೆಳೆದಿದ್ದಾರೆ.
ಬೆಳಗಾವಿಯಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿಗಳು, ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ವಿಶೇಷವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ .ವೈ.ವಿಜಯೇಂದ್ರ ಅವರ ಪತ್ನಿಯ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ಯಾದಗಿರಿಯಲ್ಲಿ ಡಿಎಚ್‍ಒ ಆಗಿರುವ ಡಾ.ಪ್ರಭುಲಿಂಗ ಮಾನಕರ್ ಅವರ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ನಿವಾಸ ಸೇರಿದಂತೆ ಹಲವೆಡೆ ಲೋಕಾ ಅಧಿಕಾರಿಗಳು ಶೋಧ ನಡೆಸಿದ್ದು, ಈ ವೇಳೆ 300 ಗ್ರಾಂ ಚಿನ್ನಾಭರಣ ಹಾಗೂ 4 ಲಕ್ಷ ನಗದು ಪತ್ತೆಯಾಗಿದ್ದು, ಇವರ ಸಂಬಂಗಳ ನಿವಾಸಗಳಲ್ಲೂ ಕೂಡ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಮುಸ್ಲಿಮರಿಗೆ ಸಂಪತ್ತು ಹಂಚುತ್ತೇನೆ ಎಂದ ಸಿಎಂಗೆ ತಿರುಗೇಟು ಕೊಟ್ಟ ಅಶೋಕ್
ಬೆಂಗಳೂರಿನ ಮೈಸೂರು ರಸ್ತೆ ಕಣಿಮಿಣಿಕೆ ಬಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಕಾರಿ ಹೆಚ್.ಎಸ್.ಕೃಷ್ಣಮೂರ್ತಿ ಮನೆ ಹಾಗೂ ಕುಂಬಳಗೋಡು ಬಳಿಯ ಕಚೇರಿ ಸೇರಿದಂತೆ ಹಲವೆಡೆ ದಾಳಿ ನಡೆದಿದ್ದು, ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.ಕೃಷಿ ಜಮೀನು, ಹಲವೆಡೆ ನಿವೇಶನ ಸೇರಿದಂತೆ ಹಲವು ಆಸ್ತಿ ದಾಖಲೆ ಪತ್ರಗಳು ಪತ್ತೆಯಾಗಿವೆ.
ಬೆಸ್ಕಾಂ ಜಾಗೃತ ದಳದ ಅಧಿಕಾರಿ ಸುಧಾಕರ್ ರೆಡ್ಡಿ ಅವರ ಅಮೃತಹಳ್ಳಿಯಲ್ಲಿರುವ ಅಪಾರ್ಟ್‍ಮೆಂಟ್‍ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. 92.95 ಲಕ್ಷ ನಗದು, ಚಿನ್ನಾಭರಣ,28 ಕೆಜಿ ಬೆಳ್ಳಿ, 25 ಲಕ್ಷ ಮೌಲ್ಯದ ವಜ್ರದ ಆಭರಣಗಳು ಹಾಗೂ ಅಪಾರ ಪ್ರಮಾಣದ ಸ್ಥಿರಾಸ್ತಿಗಳು ಪತ್ತೆಯಾಗಿವೆ. ಚಿಂತಾಮಣಿ ಬಳಿಯ ಸಂಬಂಧಿಕರ ಮನೆ ಮೇಲೂ ದಾಳಿ ನಡೆದಿದೆ.
ನಂಜನಗೂಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಎಂಬುವವರ ಮೈಸೂರಿನ ಗುರುಕುಲ ಬಡಾವಣೆ ನಿವಾಸ ಸೇರಿ 12 ಕಡೆ ಕಾರ್ಯಾಚರಣೆ ನಡೆದಿದೆ. ಕುಟುಂಬದ ಹೆಸರಿನಲ್ಲಿ ಎಂ.ಎಸ್. ಗ್ರೂಪ್ ಕಂಪೆನಿ ಇದ್ದು, ಇದರಲ್ಲಿ ಇವರ ಹೂಡಿಕೆ ಇದೆ ಎಂಬ ಆರೋಪವಿದ್ದು, ಪಿ.ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಡಿಎಸ್‍ಪಿ ಕೃಷ್ಣಯ್ಯ ನೇತೃತ್ವದಲ್ಲಿ 12 ತಂಡಗಳಿಂದ ವಿವಿಧ ಕಡೆಗಳಲ್ಲಿ ಪರಿಶೀಲನೆ ನಡೆದಿದೆ.
ಬಳ್ಳಾರಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಚಂದ್ರಶೇಖರ, ಅರಣ್ಯ ಇಲಾಖೆಯ ಡಿಆರ್‍ಎಫ್‍ಒ ಮಾರುತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆದಿದೆ. ಚಂದ್ರಶೇಖರ್ ಬಳ್ಳಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಮನೆ ಮಾತ್ರ ಹೊಸಪೇಟೆಯಲ್ಲಿದೆ. ಇನ್ನು ಅರಣ್ಯ ಇಲಾಖೆಯ ಡಿಆರ್‍ಎಫ್‍ಓ ಮಾರುತಿ ಗಂಗಾವತಿಯಲ್ಲಿ ಕೆಲಸ ಮಾಡುತ್ತಿದ್ದು , ಮನೆ ಕಂಪ್ಲಿಯಲ್ಲಿದೆ. ಹೀಗಾಗಿ ಚಂದ್ರಶೇಖರ ಅವರ ಹೊಸಪೇಟೆ ಮನೆ ಮತ್ತು ಮಾರುತಿ ಅವರ ಕಂಪ್ಲಿ ಮತ್ತು ಗಂಗಾವತಿ ನಿವಾಸದ ಮೇಲೆ ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸಲಾಗುತ್ತಿದ್ದು ಅಪಾರ ಪ್ರಮಾಣದ ಸಂಪತ್ತು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಬೀದರ್‍ನಲ್ಲೂ ಸಹ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ಬೀದರ್‍ನ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ನೌಕರರ ಸುನೀಲ್ ಕುಮಾರ್ ಮನೆ ಹಾಗೂ ಅವರ ಒಡೆತನದ ಕಾಂಪ್ಲೆಕ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಕೃಷಿ ಇಲಾಖೆ ಉಪನಿರ್ದೇಶಕ ಮುನೇಗೌಡ ಅವರ ನಂದಿ ಕ್ರಾಸ್ ಬಳಿ ಇರುವ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.
ಚಿಕ್ಕಬಳ್ಳಾಪುರದ ಹಲವೆಡೆ ಇವರು ಅಪಾರ ಪ್ರಮಾಣದ ಆಸ್ತಿ ಖರೀದಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಹಲವಾರು ದಾಖಲೆಗಳನ್ನು ಪರಿಶೀಲಿಸಲಾಗುತ್ತಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಪೊಲೀಸರು ಕಾಂಗ್ರೆಸ್ ಏಜೆಂಟ್ ಆಗಿದ್ದಾರೆ : ಯತ್ನಾಳ್ ವಾಗ್ದಾಳಿ
ಬೆಳಗಾವಿಯಲ್ಲಿ ಕೆಆರ್‍ಐಡಿಎಲ್‍ನ ಸೂಪರಿಂಡೆಂಟ್ ಎಂಜಿನಿಯರ್ ತಿಮ್ಮರಾಜಪ್ಪ ಅವರ ನಿವಾಸ ಸೇರಿದಂತೆ 8 ಕಡೆ ಲೋಕಾಯುಕ್ತ ದಾಳಿ ನಡೆದಿದೆ. ಕೋಲಾರದ ಕೆಜಿಎಫ್‍ನಲ್ಲಿರುವ ಸ್ವಂತ ಊರಿನಲ್ಲಿರುವ ಮನೆ ಹಾಗೂ ಅವರ ಸಂಬಂಧಿಕರ ಮನೆ ಮೇಲೂ ದಾಳಿ ನಡೆಸಲಾಗಿದೆ. ಕೋಲಾರ ಲೋಕಾಯುಕ್ತ ಎಸ್‍ಪಿ ಉಮೇಶ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ.