Sunday, May 12, 2024
Homeರಾಜ್ಯಮುಂದಿನ ವರ್ಷದಿಂದ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್

ಮುಂದಿನ ವರ್ಷದಿಂದ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್

ಬೆಳಗಾವಿ, ಡಿ.7- ಮುಂದಿನ ಆರ್ಥಿಕ ವರ್ಷದಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಿಸುವ ಯೋಜನೆಯನ್ನು ಆರಂಭಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಶಾಸಕ ಪ್ರದೀಪ್‍ಈಶ್ವರ್ ಪ್ರಶ್ನೆ ಕೇಳಿ, ಸೈಕಲ್ ವಿತರಣೆಯನ್ನು ಹಿಂದಿನ ಸರ್ಕಾರ ಸ್ಥಗಿತಗೊಳಿಸಿದೆ. ಅದನ್ನು ಮರು ಆರಂಭಿಸಬೇಕು. ಇದರಿಂದಾಗಿ ವಿದ್ಯಾರ್ಥಿಗಳು ಶಾಲೆ ತೊರೆಯುವ ಪ್ರಕರಣಗಳು ತಗ್ಗಲಿವೆ ಎಂದು ಹೇಳಿದರು.

ವಿಪಕ್ಷ ನಾಯಕ ಆರ್.ಅಶೋಕ್, ಈ ಹಿಂದೆ ಯಡಿಯೂರಪ್ಪ ಈ ಯೋಜನೆಯನ್ನು ಆರಂಭಿಸಿದ್ದರು. ಆದರೆ ಅದು ಸ್ಥಗಿತಗೊಂಡಿದೆ. ರಾಜ್ಯಸರ್ಕಾರದ ಶಕ್ತಿ ಯೋಜನೆಯಿಂದಾಗಿ ತಾಯಂದಿರು ಬಸ್ಸಿನಲ್ಲಿ ಹೋಗುತ್ತಿದ್ದಾರೆ, ಮಕ್ಕಳು ನಡೆದುಕೊಂಡು ಹೋಗುತ್ತಿದ್ದಾರೆ. ಅದರಲ್ಲೂ ಕೆಲವು ಕಡೆ ಜೆಸಿಬಿಯಲ್ಲಿ ಮಕ್ಕಳು ಪ್ರಯಾಣಿಸುತ್ತಿರುವ ಪ್ರಕರಣಗಳೂ ಕಂಡುಬಂದಿವೆ ಎಂದು ವಿವರಿಸಿದರು.

ರಾಷ್ಟ್ರ ಉಳಿಸಲು ಸರ್ಕಾರಕ್ಕೆ ಅವಕಾಶ ನೀಡಬೇಕು : ಸುಪ್ರೀಂ ಕೋರ್ಟ್

ಉತ್ತರ ನೀಡಿದ ಸಚಿವ ಮಧು ಬಂಗಾರಪ್ಪ, ಹಿಂದೆ ಆಡಳಿತದಲ್ಲಿದ್ದ ನಿಮ್ಮ ಸರ್ಕಾರವೇ ಸೈಕಲ್ ವಿತರಣೆಯನ್ನು ಸ್ಥಗಿತಗೊಳಿಸಿದೆ. ನಮ್ಮ ಸರ್ಕಾರ ಮತ್ತೆ ಆರಂಭಿಸುವ ಪ್ರಯತ್ನ ಮಾಡುತ್ತಿದೆ ಎಂದರು. ತಾವು ಭೇಟಿ ನೀಡಿದ ಹಲವು ಶಾಲೆಗಳಲ್ಲಿ ಈ ರೀತಿಯ ಬೇಡಿಕೆಗಳು ಕೇಳಿಬಂದಿವೆ. ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಯಿಂದ ಅನುಕೂಲವಾಗಲಿದೆ. ಅದರಲ್ಲೂ ಗ್ರಾಮೀಣ ಭಾಗ ಮತ್ತು ಕಡಿಮೆ ಅಂತರದ ಶಾಲಾ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಹಾಯವಾಗಲಿದೆ. ಈ ನಿಟ್ಟಿನಲ್ಲಿ ಮುಂದಿನ ಬಜೆಟ್‍ನಲ್ಲಿ ಚರ್ಚೆ ಮಾಡಿ ಯೋಜನೆಯನ್ನು ಮರು ಆರಂಭಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಶಾಲಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರ ಬಸ್ ಸೌಲಭ್ಯ ಒದಗಿಸಲಾಗುತ್ತಿದೆ. ಉಚಿತ ಬಸ್ ಪಾಸ್‍ಗಳಿವೆ. ಮುಂದುವರೆದು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕೇಂದ್ರ ಪ್ರಾಯೋಜಿತ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಲ್ಲಿ ತಮ್ಮ ವ್ಯಾಪ್ತಿಯನ್ನೂ ಮೀರಿದ ಶಾಲೆಗಳಿಗೆ ಪ್ರಯಾಣಿಸಲು ಪ್ರತಿ ತಿಂಗಳಿಗೆ 600 ರೂ. ಸಾರಿಗೆ ಭತ್ಯೆ ನೀಡಲಾಗುತ್ತಿದೆ ಎಂದು ಸಚಿವರು ವಿವರಿಸಿದರು.

ಒಂದರಿಂದ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಶಾಲೆಯ ಮಕ್ಕಳಿಗೆ ವಿದ್ಯಾವಿಕಾಸ ಯೋಜನೆಯಡಿ ಶೈಕ್ಷಣಿಕ ವರ್ಷದಲ್ಲಿ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ಅನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದು ಹೇಳಿದರು. ಇದನ್ನು ದುಪ್ಪಟ್ಟು ಪ್ರಮಾಣಕ್ಕೆ ಹೆಚ್ಚಿಸಬೇಕೆಂದು ಪ್ರದೀಪ್ ಈಶ್ವರ್ ಮನವಿ ಮಾಡಿದರು.

RELATED ARTICLES

Latest News