ಬೆಂಗಳೂರು, ಡಿ.10- ವೈಜ್ಞಾನಿಕ ಮನೋಭಾವವನ್ನು ಪ್ರೋತ್ಸಾಹಿಸಲು ಹಾಗೂ ಎಲ್ಲರಿಗೂ ವಿಜ್ಞಾನ ಎಂಬ ಉದ್ದೇಶವನ್ನು ಸಾಧಿಸುವ ನಿಟ್ಟಿನಲ್ಲಿ ಹೊಸ ನೀತಿ ರಚಿಸುವಂತೆ ಸಚಿವ ಎನ್.ಎಸ್‍ಭೋಸರಾಜ್ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
ಚಂದ್ರಯಾನ – 3ರ ಯಶಸ್ಸಿನ ನಂತರ ಮಕ್ಕಳಲ್ಲಿ ಬಾಹ್ಯಾಕಾಶದ ಬಗ್ಗೆ ಆಸಕ್ತಿ ಹೆಚ್ಚಾಗಿದೆ. ಇದಕ್ಕೆ ಪ್ರೋತ್ಸಾಹದ ಅಗತ್ಯವಿದೆ. ಈ ನಿಟ್ಟಿನಲ್ಲಿ ರಾಜ್ಯದ ಶಾಲಾ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ವಿಜ್ಞಾನದ ಕುತೂಹಲವನ್ನು ಉತ್ತೇಜಿಸುವ ಸಲುವಾಗಿ ದೂರದರ್ಶಕಗಳನ್ನು ಒದಗಿಸುವುದು ಸೂಕ್ತವಾಗಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕ ನೀತಿಯನ್ನು ರೂಪಿಸುವಂತೆ ಸೂಚನೆ ನೀಡಿದ್ದೇನೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.
ನಾಳೆಯಿಂದ ಮತ್ತಷ್ಟು ರಂಗೇರಲಿದೆ ಬೆಳಗಾವಿ ಅಧಿವೇಶನ
ರಾಜ್ಯದಲ್ಲಿ 2 ಪ್ರಾದೇಶಿಕ ವಿಜ್ಞಾನ ಕೇಂದ್ರಗಳು, 2 ತಾರಾಲಯಗಳು, 08 ಉಪಪ್ರಾದೇಶಿಕ ವಿಜ್ಞಾನ ಕೇಂದ್ರಗಳಿವೆ. 11 ಸಂಚಾರಿ ತಾರಾಲಯಗಳು ಕಾರ್ಯ ನಿರ್ವಹಿಸುತ್ತಿವೆ. ರಾಜ್ಯದ ವಿದ್ಯಾರ್ಥಿಗಳಲ್ಲಿ ಬಾಲ್ಯಾವಸ್ಥೆಯಿಂದಲೇ ವೈಜ್ಞಾನಿಕ ವಿಷಯಗಳಲ್ಲಿ ಆಸಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ನೂತನ ಯೋಜನೆಯೊಂದನ್ನು ಜಾರಿಗೊಳಿಸಲು ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.
ಈ ಯೋಜನೆಯಡಿ ರಾಜ್ಯದ ಸರಕಾರಿ ಪ್ರೌಢ ಶಾಲೆಗಳಲ್ಲಿ ಟೆಲಿಸ್ಕೋಪ್ ಮತ್ತು ಮೈಕ್ರೋಸ್ಕೋಪ್‍ಗಳನ್ನು ನೀಡಲು ಹಾಗೆಯೇ, ಈ ಉಪಕರಣಗಳ ನಿರ್ವಹಣೆ ಮತ್ತು ಅವುಗಳನ್ನು ಬಳಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಶಿಕ್ಷಕರುಗಳಿಗೆ ತರಬೇತಿಯನ್ನು ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆ ಪ್ರಾರಂಭಿಸುವಂತೆ ಅವರು ಸೂಚನೆ ನೀಡಿದ್ದಾರೆ.