ಬೆಂಗಳೂರು, ಡಿ.12- ಹೊಸ ವರ್ಷ ಆಚರಣೆ ಗೆಂದು ಮಾದಕ ವಸ್ತುಗಳನ್ನು ಮಾರಾಟ ಮಾಡಲು ಶೇಖರಿಸಿಟ್ಟಿದ್ದ ವಿದೇಶಿ ಪ್ರಜೆಯನ್ನು ಸಿಸಿಬಿ ಪೊಲೀಸರು ಬಂಧಿಸಿ 21 ಕೋಟಿ ರೂ. ಬೆಲೆ ಬಾಳುವ 16 ಕೆ.ಜಿ ತೂಕದ ಎಂಡಿಎಂಎ ಕ್ರಿಸ್ಟಲ್, 500 ಗ್ರಾಂ ತೂಕದ ಕೊಕೇನ್ ಹಾಗೂ 1 ಮೊಬೈಲ್ ವಶಪಡಿಸಿ ಕೊಂಡಿದ್ದಾರೆ.
ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಡ್ರಗ್ಸ್ ಪೆಡ್ಲಿಂಗ್ನಲ್ಲಿ ತೊಡಗಿದ್ದ ನೈಜಿರೀಯಾ ದೇಶದ ಪ್ರಜೆಯನ್ನು ಬಂಧಿಸಿದ್ದಾರೆ. ಆರೋಪಿಯು ಒಂದು ವರ್ಷದ ಹಿಂದೆ ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದು, ನಗರದ ರಾಮಮೂರ್ತಿನಗರದಲ್ಲಿ ಮನೆಯನ್ನು ಬಾಡಿಗೆಗೆ ಪಡೆದುಕೊಂಡು ವಾಸವಿದ್ದನು.
2024ರ ಹೊಸ ವರ್ಷದ ಆಚರಣೆ ಹಿನ್ನೆಲೆಯಲ್ಲಿ ಮಾದಕ ವ್ಯಸನಿಗಳಿಗೆ ನಿಷೇದಿತ ಮಾದಕ ವಸ್ತುಗಳಾದ ಎಂ.ಡಿ.ಎಂ.ಎ ಕ್ರಿಸ್ಟಲ್ ಮತ್ತು ಕೊಕೇನ್ ಅನ್ನು ಅತಿ ಹೆಚ್ಚು ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ದೆಹಲಿ, ಮುಂಬೈ ಹಾಗೂ ಇತರೆ ರಾಜ್ಯಗಳಲ್ಲ್ಲಿ ನೆಲೆಸಿರುವ ವಿದೇಶಿ ಮೂಲದ ವ್ಯಕ್ತಿಗಳಿಂದ ಖರೀದಿಸಿ ಚೂಡಿದಾರ್ ಬಟ್ಟೆಗಳಲ್ಲಿ, ಬೆಡ್ಶೀಟ್ ಕವರ್ಗಳಲ್ಲಿ, ಸೋಪ್ ಬಾಕ್ಸ್ ಮತ್ತು ಚಾಕಲೇಟ್ ಬಾಕ್ಸ್ಗಳಲ್ಲಿ ನಿಷೇದಿತ ಮಾದಕ ವಸ್ತುಗಳನ್ನು ಅಡಗಿಸಿ ಯಾರಿಗೂ ಅನುಮಾನ ಬರದಂತೆ ನಗರಕ್ಕೆ ತಂದು ತನ್ನ ವಾಸದ ಮನೆಯಲ್ಲಿರಿಸಿಕೊಂಡಿದ್ದನು.
ಮುಂದುವರೆದ ಅಶೋಕ್ Vs ವಿಶ್ವನಾಥ್ ಸಮರ
ಹೊಸ ವರ್ಷದ ಆಚರಣೆಯ ಸಮಯದಲ್ಲಿ ಹೆಚ್ಚಿನ ಬೆಲೆಗೆ ನಗರದಲ್ಲಿ ನಡೆಯುವ ಪಾರ್ಟಿಗಳಿಗೆ, ಗ್ರಾಹಕರುಗಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಐಟಿ/ಬಿಟಿ ಉದ್ಯೋಗಿಗಳಿಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದಿಸುವ ಉದ್ದೇಶದಿಂದ ಮಾದಕ ವಸ್ತುಗಳನ್ನು ಸಂಗ್ರಹಿಸಿ ಗೌಪ್ಯವಾಗಿ ಶೇಖರಿಸಿಕೊಂಡಿರುವುದು ಪ್ರಾಥಮಿಕ ವಿಚಾರಣೆಯಿಂದ ತಿಳಿದು ಬಂದಿರುತ್ತದೆ.
ಆರೋಪಿಯ ವಿರುದ್ದ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆ ಮತ್ತು ವಿದೇಶಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ. ಈ ಕಾರ್ಯಾಚರಣೆಯನ್ನು ಹೆಚ್ಚುವರಿ ಪೊಲೀಸ್ ಆಯುಕ್ತರು(ಪ), ಪ್ರಭಾರ ಜಂಟಿ ಪೊಲೀಸ್ ಆಯುಕ್ತರು, ಅಪರಾಧ ಬೆಂಗಳೂರು ನಗರ ಮತ್ತು ಉಪ ಪೊಲೀಸ್ ಆಯುಕ್ತರು, ಅಪರಾಧ-2 ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ ಘಟಕದ ಮಾದಕ ದ್ರವ್ಯ ನಿಗ್ರಹ ದಳದ ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಈ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿತ್ತಾರೆ.