ಬೆಂಗಳೂರು, ಮಾ.17- ರಾಜ್ಯದ ವಿವಿಧ ಯೋಜನೆಗಳ ಕುರಿತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿಂದು ಕರ್ನಾಟಕದ ಸಂಸದರ ಸಭೆ ನಡೆಸಲಿದ್ದಾರೆ.
ದೆಹಲಿ ಪ್ರವಾಸ ಕೈಗೊಂಡಿರುವ ಡಿ.ಕೆ.ಶಿವಕುಮಾರ್ ಸಂಜೆ ಎಲ್ಲಾ ಪಕ್ಷದ ಸಂಸದರನ್ನು ಸಭೆಗೆ ಆಹ್ವಾನಿಸಿದ್ದಾರೆ. ಆಲಮಟ್ಟಿ ಅಣೆಕಟ್ಟಿನ ಎತ್ತರಕ್ಕೆ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ರಾಜ್ಯ ಸರ್ಕಾರಗಳು ಅಡ್ಡಿ ಪಡಿಸುತ್ತಿದ್ದು, ಭೂ ಸ್ವಾಧೀನ ಪ್ರಕ್ರಿಯೆ ಕೈಗೊಳ್ಳದಂತೆ ತಡೆ ನೀಡಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಇದು ರಾಜ್ಯಸರ್ಕಾರಕ್ಕೆ ನುಂಗಲಾರದ ಬಿಸಿ ತುಪ್ಪವಾಗಿದೆ.
ಒಂದು ವೇಳೆ ಕೇಂದ್ರ ಸರ್ಕಾರ ಮೂರು ರಾಜ್ಯಗಳ ಒತ್ತಡಕ್ಕೆ ಮಣಿದು ಭೂ ಸ್ವಾಧೀನಕ್ಕೆ ತಡೆ ನೀಡಿದರೆ, ಮಹತ್ವಾಕಾಂಕ್ಷೆಯ ಆಲಮಟ್ಟಿ ಯೋಜನೆ ಗಗನ ಕುಸುಮವೂ ಆಗಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ನಿಟ್ಟಿನಲ್ಲಿ ಡಿ.ಕೆ.ಶಿವಕುಮಾರ್ ಸಂಸದರ ಜೊತೆ ಸಭೆ ನಡೆಸುತ್ತಿದ್ದಾರೆ.
ಇದೇ ವೇಳೆ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್‌ನಲ್ಲಿ 5300 ಕೋಟಿ ರೂ.ಗಳನ್ನು ಘೋಷಿಸಿಲಾಗಿತ್ತು. ಆದರೆ ಆ ಹಣ ಇನ್ನೂ ಬಿಡುಗಡೆಯಾಗಿಲ್ಲ. ಈ ನಿಟ್ಟಿನಲ್ಲಿಯೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಸಂಸದರಿಗೆ ಡಿ.ಕೆ.ಶಿವಕುಮಾರ್ ಮನವಿ ಮಾಡಿಕೊಳ್ಳಲಿದ್ದಾರೆ.
ಜೊತೆಗೆ ಮೇಕೆದಾಟು, ಮಹಾದಾಯಿ ನದಿಗೆ ಅಡ್ಡಲಾಗಿ ಕಳಸಾ-ಬಂಡೂರಿ ನಾಲಾ ಯೋಜನೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರದ ಎನ್‌ಓಸಿಗಳು ಬಾಕಿ ಇದ್ದು ಅದಕ್ಕಾಗಿ ಒತ್ತಡ ಹೇರುವಂತೆ ಮನವಿ ಸಲ್ಲಿಸಲಿದ್ದಾರೆ. ಬೆಂಗಳೂರಿನ ನಗರಾಭಿವೃದ್ಧಿ ಹಾಗೂ ಇತರ ಯೋಜನೆಗಳ ಸಂಬಂಧಪಟ್ಟಂತೆಯೂ ಸಂಸದರ ಜೊತೆ ಡಿ.ಕೆ.ಶಿವಕುಮಾರ್ ಚರ್ಚೆ ನಡೆಸುವ ಸಾಧ್ಯತೆ ಇದೆ.
