Wednesday, April 29, 2026
Homeರಾಜ್ಯಅಕಾಲಿಕ ಮಳೆ ಹಾನಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆರ್‌.ಅಶೋಕ್‌ ಒತ್ತಾಯ

ಅಕಾಲಿಕ ಮಳೆ ಹಾನಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆರ್‌.ಅಶೋಕ್‌ ಒತ್ತಾಯ

R. Ashok urges government to provide compensation for untimely rain damage

ಬೆಂಗಳೂರು,ಮಾ.21- ಮಳೆ ಹಾನಿಗೊಳಗಾದ ಜಿಲ್ಲೆಗಳಲ್ಲಿ ಜಂಟಿ ಸಮೀಕ್ಷೆ ನಡೆಸಿ ಬೆಳೆ ನಷ್ಟದ ನಿಖರ ವರದಿ ಪಡೆದು, ಅಕಾಲಿಕ ಮಳೆಯಿಂದ ಉಂಟಾದ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿ ಹಾನಿಗೆ ತಕ್ಷಣದ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಯಾವುದೇ ವಿಳಂಬ ಮಾಡದೆ ಸಂಕಷ್ಟದಲ್ಲಿರುವ ರೈತರಿಗೆ ಎಕರೆವಾರು ವೈಜ್ಞಾನಿಕ ಪರಿಹಾರವನ್ನು ವಿತರಿಸಬೇಕು. ಸಂಕಷ್ಟದಲ್ಲಿರುವ ಅನ್ನದಾತನ ಕೈ ಹಿಡಿಯುವುದು ಸರ್ಕಾರದ ಪ್ರಥಮ ಆದ್ಯತೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ನೆರೆ, ಬರ ಸಂದರ್ಭದಲ್ಲಿ ಬೆಳೆ ಹಾನಿ ಸಮೀಕ್ಷೆ, ಪರಿಹಾರ ವಿತರಣೆಯಲ್ಲಿ ಈ ಹಿಂದೆ ವಿಳಂಬ ಮಾಡಿದಂತೆ ಈ ಬಾರಿಯೂ ಮಾಡಿದರೆ, ರೈತರ ಹಿತ ಕಾಯುವಲ್ಲಿ ನಿರ್ಲಕ್ಷ್ಯ ವಹಿಸಿದರೆ ರಾಜ್ಯ ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಅಕಾಲಿಕವಾಗಿ ಸುರಿದ ಆಲಿಕಲ್ಲು ಮಳೆ ನಾಡಿನ ಅನ್ನದಾತರ ಬದುಕನ್ನು ಮತ್ತಷ್ಟು ದುಸ್ತರಗೊಳಿಸಿದ್ದು, 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸಾವಿರಾರು ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಗದಗ ಜಿಲ್ಲೆಯಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವುದು ಅತ್ಯಂತ ದುರದೃಷ್ಟಕರ ಸಂಗತಿ. ಅವರ ಕುಟುಂಬಕ್ಕೆ ಸರ್ಕಾರ ತಕ್ಷಣವೇ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ಧಾರವಾಡ, ಹಾವೇರಿ, ಗದಗ, ಕಲಬುರಗಿ, ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಹಲವು ಸುಮಾರು 10 ಜಿಲ್ಲೆಗಳಲ್ಲಿ ಜೋಳ, ಕಡಲೆ, ಗೋಧಿ ಹಾಗೂ ಮೆಕ್ಕೆಜೋಳದ ಬೆಳೆಗಳು ನೆಲಕಚ್ಚಿವೆ. ಇತ್ತ ಹಳೇ ಮೈಸೂರು ಭಾಗದ ಹಾಸನ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಾವು, ದ್ರಾಕ್ಷಿ, ಹಲಸು ಹಾಗೂ ಕಲ್ಲಂಗಡಿ ಬೆಳೆಗಾರರು ಅಪಾರ ನಷ್ಟ ಅನುಭವಿಸಿದ್ದಾರೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಬೆಳೆ ಕಣ್ಣೆದುರೇ ನಾಶವಾಗುತ್ತಿರುವುದನ್ನು ಕಂಡು ರೈತರು ಕಣ್ಣೀರು ಹಾಕುತ್ತಿದ್ದಾರೆ ಎಂದು ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

RELATED ARTICLES

Latest News