ಬೆಂಗಳೂರು, ಮೇ 3-ಪೂರ್ವ ಮುಂಗಾರು ನಾಳೆಯಿಂದ ಮತ್ತಷ್ಟು ಚೇತರಿಸಿಕೊಳ್ಳಲಿದ್ದು, ರಾಜ್ಯದಲ್ಲಿ ಇನ್ನೊಂದು ವಾರ ಮಳೆಯಾಗುವ ಮುನ್ಸೂಚನೆಗಳಿವೆ. ಕಳೆದ ನಾಲ್ಕೈದು ದಿನಗಳಿಂದ ರಾಜ್ಯದ ಕೆಲವೆಡೆ ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ.
ನಿನ್ನೆ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಿದೆ.
ಚಾಮರಾಜನಗರ, ಮೈಸೂರು, ಬೆಳಗಾವಿ, ಕಲಬುರಗಿ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ರಾಜ್ಯದ ಒಳನಾಡಿನಲ್ಲಿ ಟ್ರಫ್ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮೇ 9ರವರೆಗೆ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಗುಡುಗು, ಮಿಂಚಿನ ಮಳೆಯಾಗಲಿದ್ದು, 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಅವರು ಹೇಳಿದ್ದಾರೆ.
ಆದರೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಣಹವೆ ಮುಂದುವರೆಯಲಿದ್ದು, ಗರಿಷ್ಠ ತಾಪಮಾನ 40 ರಿಂದ 42 ಡಿ.ಸೆ.ನಷ್ಟು ಇರಲಿದೆ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆಯಾಗಲಿದೆ. ಕಲಬುರಗಿಯಲ್ಲಿ 42 ಡಿ.ಸೆ., ಬೀದರ್ ನಲ್ಲಿ 43 ಡಿ.ಸೆ., ರಾಯಚೂರಿನಲ್ಲಿ 41 ಡಿ.ಸೆ.ನಷ್ಟು ಗರಿಷ್ಠ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 35ರಿಂದ 37 ಡಿ.ಸೆ.ನಷ್ಟು ದಾಖಲಾಗುವ ಸಾಧ್ಯತೆಗಳಿವೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳಿವೆ.
