ಬೆಂಗಳೂರು,ಏ.13- ಇದುವರೆಗೆ 10ನೇ ತರಗತಿಯವರೆಗೆ ಮಾತ್ರ ಇದ್ದ ಉಚಿತ ಪಠ್ಯಪುಸ್ತಕ ವಿತರಣೆ ಯೋಜನೆಯನ್ನು 2026-27ನೇ ಸಾಲಿನಿಂದ ಪದವಿ ಪೂರ್ವ (ಪಿಯು) ಕಾಲೇಜಿನ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗಿದೆ. ಇನ್ನು ಮುಂದೆ ಎಲ್ಲಾ ಸರ್ಕಾರಿ ಪಿಯು ಕಾಲೇಜುಗಳ ವಿದ್ಯಾರ್ಥಿಗಳು ತಮ ಪಠ್ಯಪುಸ್ತಕಗಳನ್ನು ಉಚಿತವಾಗಿ ಪಡೆಯಲಿದ್ದಾರೆ. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
ಇದರಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಸುಮಾರು 61 ಲಕ್ಷ ಮಕ್ಕಳಿಗೆ ಅನುಕೂಲವಾಗಲಿದೆ. ಈ ಮೂಲಕ ಮೊದಲ ಬಾರಿಗೆ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯ ಪುಸ್ತಕದ ಜೊತೆಗೆ ನೋಟ್ಬುಕ್ ಸಹ ವಿತರಣೆಗೆ ಮುಂದಾಗಿದೆ.
ಕಾಲೇಜುಗಳ ವಿದ್ಯಾರ್ಥಿಗಳಿಗೂ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲು ನಿರ್ಧರಿಸಿದೆ. 2026-27ನೇ ಶೈಕ್ಷಣಿಕ ಸಾಲಿನಿಂದಲೇ ಈ ಹೊಸ ಯೋಜನೆ ಜಾರಿಗೆ ಬರಲಿದೆ. ಇದುವರೆಗೆ ಕೇವಲ 1 ರಿಂದ 10ನೇ ತರಗತಿಯವರೆಗಿನ ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಪಠ್ಯಪುಸ್ತಕ ವಿತರಣೆ ಯೋಜನೆಯನ್ನು ಸೀಮಿತಗೊಳಿಸಲಾಗಿತ್ತು. ಇದೀಗ ಇತಿಹಾಸದಲ್ಲೇ ಮೊದಲ ಬಾರಿಗೆ ಈ ಸೌಲಭ್ಯವನ್ನು ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗಿದೆ.
ರಾಜ್ಯಾದ್ಯಂತ ಇರುವ ಸರ್ಕಾರಿ ಪಿಯು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳ ಲಕ್ಷಾಂತರ ವಿದ್ಯಾರ್ಥಿಗಳು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಈ ಮಹತ್ವದ ನಿರ್ಧಾರದಿಂದಾಗಿ ಗ್ರಾಮೀಣ ಭಾಗದ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹೆಚ್ಚಿನ ಅನುಕೂಲವಾಗಲಿದ್ದು, ಆರ್ಥಿಕ ಹೊರೆ ಕಡಿಮೆಯಾಗಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ.ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಲು ಹಾಗೂ ಗುಣಮಟ್ಟದ ಶಿಕ್ಷಣ ನೀಡಲು ಶಾಲಾ ಶಿಕ್ಷಣ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ.
ಪ್ರಸ್ತುತ ರಾಜ್ಯದಲ್ಲಿ 1,319 ಸರ್ಕಾರಿ, 815 ಅನುದಾನಿತ ಪದವಿಪೂರ್ವ ಕಾಲೇಜುಗಳು ಇವೆ. ಪ್ರಥಮ ಹಾಗೂ ದ್ವಿತೀಯ ವರ್ಷ ಸೇರಿ ಸರ್ಕಾರಿ ಕಾಲೇಜುಗಳಲ್ಲಿ 13.17 ಲಕ್ಷ ಹಾಗೂ ಅನುದಾನಿತ ಕಾಲೇಜುಗಳಲ್ಲಿ 1.91 ಲಕ್ಷ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಒಟ್ಟು 34 ವಿಷಯಗಳನ್ನು ಬೋಧಿಸಲಾಗುತ್ತಿದೆ. ಪದವಿಪೂರ್ವ ಕಾಲೇಜುಗಳಿಗೆ 2026-27ನೇ ಸಾಲಿನಿಂದ ಉಚಿತ ಪಠ್ಯಪುಸ್ತಕ ವಿತರಿಸುವ ಯೋಜನೆ ಅನುಷ್ಠಾನಕ್ಕೆ ತರಲಾಗಿದೆ.
ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 10ನೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಅಭ್ಯಾಸ ಪುಸ್ತಕ ಹಾಗೂ 1ರಿಂದ 12ನೇ ತರಗತಿಯವರೆಗೆ ದಿನಚರಿ ಪುಸ್ತಕ ವಿತರಣೆ ಸಂಬಂಧ ಶಿಕ್ಷಣ ಇಲಾಖೆಯು 30 ಕೋಟಿ 83 ಲಕ್ಷದ 25 ಸಾವಿರ ಹಣದ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಿತ್ತು. ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಸರ್ಕಾರ ಸಹ ಒಪ್ಪಿಗೆ ಸೂಚಿಸಿತ್ತು.
ಇನ್ನು 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಸರ್ಕಾರದ ಕಡೆಯಿಂದಲೇ ಪಠ್ಯ ಪುಸ್ತಕ ಹಾಗೂ ನೋಟ್ ಬುಕ್ ಉಚಿತವಾಗಿ ನೀಡುವುದರಿಂದ ಪೋಷಕರ ಹೊರೆ ತಪ್ಪಲಿದೆ. 1ರಿಂದ 10ನೇ ತರಗತಿ ಮಕ್ಕಳಿಗೆ ಶಾಲೆಯಲ್ಲಿ ಪಠ್ಯ ಪುಸ್ತಕ ನೀಡಲಾಗುತ್ತಿತ್ತಾದರೂ ಪೋಷಕರು ನೋಟ್ ಬುಕ್ ಕೊಡಿಸಬೇಕಿತ್ತು. 11 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೂ ಸಹ ಪುಸ್ತಕ ನೀಡುತ್ತಿರುವುದರಿಂದ ಪೋಷಕರ ಹೊರೆ ಕಡಿಮೆಯಾಗಲಿದೆ.
