ಬೆಂಗಳೂರು,ಜ.3-ಶಾಂತಿ, ಸೌಹಾರ್ದತೆ, ಸಮಾನತೆಯನ್ನು ಪ್ರತಿಪಾದಿಸುವ ಸಂದೇಶಗಳಿರುವ ಚಲನಚಿತ್ರಗಳನ್ನು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶಿಸಲು ಆದ್ಯತೆ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ 15ನೇ ಆವೃತ್ತಿಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಅವರು, ಫೆಬ್ರವರಿ 29ರಿಂದ ಮಾ.7ರವರೆಗೆ ಚಲನಚಿತ್ರೋತ್ಸವ ನಡೆಯಲಿದೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉದ್ಘಾಟನೆ ಮತ್ತು ಸಮಾರೋಪ ಸಮಾರಂಭವನ್ನು ಆಯೋಜಿಸಲಾಗುವುದು ಎಂದು ಹೇಳಿದರು.
ಇಂದು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿಯ ಸಭೆ ನಡೆಸಲಾಗಿದೆ. ದೇಶ, ವಿದೇಶಗಳ ಮತ್ತು ಕನ್ನಡ ಭಾಷೆಯ ಚಲನಚಿತ್ರಗಳನ್ನು ಪ್ರದರ್ಶಿಸಲಾಗುವುದು ಎಂದರು.
ಮಾರ್ಚ್ 1ರಿಂದ 7ರವರೆಗೆ ಚಿತ್ರೋತ್ಸವದ ಚಲನಚಿತ್ರ ಪ್ರದರ್ಶನ ನಡೆಯಲಿದೆ. ಮಾರ್ಚ್ 7ರಂದು ಗುರುವಾರ ಸಂಜೆ ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲರು ಪ್ರಶಸ್ತಿ ವಿತರಣೆ ಮಾಡಲಿದ್ದಾರೆ.
ಚಲನಚಿತ್ರೋತ್ಸವ ಆಯೋಜನೆಗೆ 1.61 ಕೋಟಿ ರೂ. ಲಭ್ಯವಿದ್ದು, ಹೆಚ್ಚುವರಿಯಾಗಿ ಅಗತ್ಯವಿರುವ ಅನುದಾನ ಒದಗಿಸಲು ಸರ್ಕಾರ ಸಿದ್ದವಿದೆ ಎಂದು ಹೇಳಿದರು. ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ತೀರ್ಮಾನಿಸಲಾಯಿತು. ಲಿಂಗ ಸಮಾನತೆ, ಸಮಾನತೆಗೂ ಆದ್ಯತೆ ನೀಡಲಾಗುತ್ತಿದೆ ಎಂದರು.
2023ರಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿ 68518 ಅಪರಾಧ ಪ್ರಕರಣಗಳು ದಾಖಲು
ಚಲನಚಿತ್ರೋತ್ಸವದ ಆಯೋಜನೆಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಕೋರ್ ಸಮಿತಿಯನು ರಚಿಸಲಾಗಿದೆ. ಸಮಿತಿ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಮೊದಲ ಹಂತದಲ್ಲಿ ದೇಶ-ವಿದೇಶಗಳ ಉತ್ತಮ ಸಿನಿಮಾಗಳನ್ನು ಚಿತ್ರೋತ್ಸವದಲ್ಲಿನ ಪ್ರದರ್ಶನಕ್ಕಾಗಿ ತರಿಸಿಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಚಿತ್ರೋತ್ಸವದ ಕೆಲಸಗಳಲ್ಲಿ ಪರಿಣಿತಿ ಹೊಂದಿರುವ ವಿದ್ಯಾಶಂಕರ್ ಅವರನ್ನು ಕಲಾತ್ಮಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಇದರೊಂದಿಗೆ ಸಂಘಟಕರು, ತಾಂತ್ರಿಕ ಸಲಹೆಗಾರರು, ಸ್ವಯಂ ಸೇವಕರುಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಂಡು ಸಂಭಾವನೆ ಆಧಾರದಲ್ಲಿ ಇವರ ಸೇವೆಯನ್ನು ಪಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಸಭೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರು ಚಲನಚಿತ್ರೋತ್ಸವ ಯಶಸ್ವಿಗೊಳಿಸಲು ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು. ಪ್ರತಿ ವರ್ಷದಂತೆ ಒರಿಯಾನ್ ಮಾಲ್ನಲ್ಲಿರುವ ಪಿವಿಆರ್ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ ಮಾಡಲಾಗುವುದು ಎಂದು ಮಾಹಿತಿ ನೀಡಿದರು.