ಬೆಂಗಳೂರು,ಆ.16- ಶಿವಮೊಗ್ಗದಲ್ಲಿ ಫ್ಲೆಕ್ಸ್ ವಿಚಾರಕ್ಕೆ ಸಂಬಂಧಿಸದಂತೆ ಯುವಕ ಪ್ರೇಮ್ ಸಿಂಗ್‍ಗೆ ಚೂರಿ ಇರಿದ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ಮೂಲಕ ರಾಜ್ಯದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬುಲ್ಡೋಜರ್ ಮಾದರಿ ಅನುಷ್ಠಾನವಾಗಬೇಕೆಂಬ ಬಿಜೆಪಿ ಕಾರ್ಯಕರ್ತರ ಒತ್ತಡಕ್ಕೆ ಸರ್ಕಾರ ಅಸ್ತು ಎಂದಿದೆ.
ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ರಾಜ್ಯ ಸರ್ಕಾರ ಗಲಭೆಯಲ್ಲಿ ಭಾಗಿಯಾಗಿರುವ ಆರೋಪಿಗಳ ಆಸ್ತಿಯನ್ನು ಮುಟ್ಟು ಗೋಲು ಹಾಕಿಕೊಂಡು ಇವರ ವಿರುದ್ಧ ಗೂಂಡಾ ಕಾಯ್ದೆ ಜಾರಿ ಮಾಡಲು ಮುಂದಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.
ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವ ಅರಗ ಜ್ಞಾನೇಂದ್ರ ಅವರೊಂದಿಗೆ ಚರ್ಚಿಸಿ ಆರೋಪಿಗಳ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವ ಮೂಲಕ ಮುಂದಿನವರಿಗೆ ಎಚ್ಚರಿಕೆ ಸಂದೇಶ ರವಾನಿಸಬೇಕೆಂಬುದು ಸರ್ಕಾರದ ಉದ್ದೇಶವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಯುವ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಆಸ್ತಿ ಯನ್ನು ಜಪ್ತಿ ಮಾಡಿ ಇವರನ್ನು ಗಡಿಪಾರು ಮಾಡಲು ಗೃಹ ಇಲಾಖೆ ಸಿದ್ದತೆ ನಡೆಸಿತ್ತು.
ಇದರ ಬೆನ್ನಲ್ಲೇ ಶಿವಮೊಗ್ಗದಲ್ಲಿ ಯುವಕ ಪ್ರೇಮ್‍ಸಿಂಗ್ ಚಾಕು ಇರಿದ ಪ್ರಕರಣದಲ್ಲಿ ಭಾಗಿಯಾಗಿರುವ ನದೀಮ್, ಅಬ್ದುಲ್ ರೆಹಮಾನ್ ಮತ್ತು ಜಬೀವುಲ್ಲಾ ಅವರುಗಳ ಆಸ್ತಿಯನ್ನು ಪತ್ತೆಹಚ್ಚಿ ಮುಟ್ಟುಗೋಲು ಹಾಕಿಕೊಳ್ಳಲು ಸಿದ್ದತೆ ನಡೆಸಲಾಗಿದೆ.
ಈಗಾಗಲೇ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್‍ಕುಮಾರ್, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್ ಅವರ ಜೊತೆ ಗೃಹ ಸಚಿವ ಅರಗ ಜ್ಞಾನೇಂದ್ರ ಚರ್ಚೆ ನಡೆಸಿದ್ದಾರೆ. ಪ್ರಕರಣದ ಆರೋಪಿ ಎನ್ನಲಾಗುತ್ತಿ ರುವ ಜಬೀವುಲ್ಲಾ ಈ ಹಿಂದೆ ನಡೆದ ಅನೇಕ ಕೋಮುಗಲಭೆಯಲ್ಲಿ ಭಾಗಿಯಾಗಿದ್ದ ಎನ್ನಲಾಗುತ್ತಿದೆ.
2016ರಲ್ಲಿ ಶಿವಮೊಗ್ಗದ ಅಮೀರ್ ಅಹಮ್ಮದ್ ವೃತ್ತದಲ್ಲಿ ಗಣೇಶ ಉತ್ಸವ ನಡೆಯುವ ವೇಳೆ ಚಪ್ಪಲಿ ಎಸೆದು ಪರಾರಿಯಾಗಿದ್ದ. ಈತ ಅನೇಕ ಪ್ರಕರಣಗಳಲ್ಲಿ ಯುವಕರಿಗೆ ಕುಮ್ಮಕ್ಕು ಕೊಟ್ಟಿದ್ದ ಎಂದು ತಿಳಿದುಬಂದಿದೆ.
ಈವೆಲ್ಲವನ್ನೂ ಗಂಭೀರವಾಗಿ ತೆಗೆದುಕೊಂಡಿರುವ ಗೃಹ ಇಲಾಖೆ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳ ಆಸ್ತಿ ಜಪ್ತಿ ಮಾಡಿ ಗೂಂಡಾ ಕಾಯ್ದೆ ಹಾಕಲು ಸಿದ್ದತೆ ನಡೆಸಿದೆ.
ಕೆಲ ದಿನಗಳ ಹಿಂದೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಗತ್ಯಬಿದ್ದರೆ ರಾಜ್ಯದಲ್ಲಿ ಉತ್ತರಪ್ರದೇಶದ ಯೋಗಿ ಆದಿತ್ಯ ನಾಥ್ ಮಾದರಿ ಜಾರಿ ಮಾಡುವುದಾಗಿ ಘೋಷಣೆ ಮಾಡಿದ್ದರು.
ಏನಿದು ಯೋಗಿ ಮಾದರಿ:
ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮಾದರಿಯು ಅಪರಾಧಿಗಳಿಗೆ ಸಿಂಹಸ್ವಪ್ನವಾಗಿ ಕಾಡುತ್ತಿದೆ. ಕೋಮುಗಲಭೆ, ಯುವತಿಯರ ಮೇಲೆ ಹಲ್ಲೆ, ಅಪರಾಧಗಳಲ್ಲಿ ಭಾಗಿಯಾಗುವುದು ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡವರ ಮನೆ, ಕಚೇರಿಗಳನ್ನು ಜೆಸಿಬಿ ಮೂಲಕ ಧ್ವಂಸ ಗೊಳಿಸಿ ಅವರ ಆಸ್ತಿಯನ್ನು ಜಪ್ತಿ ಮಾಡಲಾಗುತ್ತದೆ.
ಉತ್ತರಪ್ರದೇಶದಲ್ಲಿ ಈ ಪ್ರಯೋಗ ವನ್ನು ಅನುಷ್ಠಾನಗೊಳಿಸಿದ ಪರಿಣಾಮ ಕಾನೂನು ಸುವ್ಯವಸ್ಥೆ ಕೊಂಚ ಮಟ್ಟಿಗೆ ತಹಬದಿಗೆ ಬಂದಿತ್ತು. ಕೆಲವರು ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರೂ ನ್ಯಾಯಾಲಯ ಮಧ್ಯಪ್ರವೇಶ ಮಾಡಿರಲಿಲ್ಲ.
ಇತ್ತೀಚೆಗೆ ಸ್ವಯಂ ಘೋಷಿತ ಬಿಜೆಪಿ ಕಾರ್ಯಕರ್ತನೊಬ್ಬ ನೋಯ್ಡದಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ 24 ಗಂಟೆಯೊಳಗೆ ಆತನಿಗೆ ಸೇರಿದ ಮನೆಯನ್ನು ಜೆಸಿಬಿ ಮೂಲಕ ನೆಲಸಮಗೊಳಿಸಿ ಆರೋಪಿಗಳ ಎದೆಯಲ್ಲಿ ನಡುಕು ಹುಟ್ಟುವಂತೆ ಯೋಗಿ ಮಾಡಿದ್ದರು. ಇದು ಇತ್ತೀಚಿನ ದಿನಗಳಲ್ಲಿ ಯೋಗಿ ಆದಿತ್ಯನಾಥ್ ಬುಲ್ಡೋಜರ್ ಮಾದರಿ ಎಂದೇ ಪ್ರಚಲಿತವಾಗಿದೆ.