Sunday, May 5, 2024
Homeರಾಜ್ಯಕೃಷಿ ಇಲಾಖೆಯಲ್ಲಿ 1 ಸಾವಿರ ಹುದ್ದೆ ಭರ್ತಿಗೆ ಕ್ರಮ : ಸಚಿವ ಚೆಲುವರಾಯಸ್ವಾಮಿ

ಕೃಷಿ ಇಲಾಖೆಯಲ್ಲಿ 1 ಸಾವಿರ ಹುದ್ದೆ ಭರ್ತಿಗೆ ಕ್ರಮ : ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು,ಅ.12- ಮೊದಲ ಹಂತದಲ್ಲಿ ಒಂದು ಸಾವಿರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದರು. ವಿಧಾನಸೌಧದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಬೀಜ ನಿಗಮ ಮತ್ತು ಕರ್ನಾಟಕ ರಾಜ್ಯ ಸಾವಯವ ಬೀಜ ಪ್ರಮಾಣ ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಮತ್ತು ಕಿರುಹೊತ್ತಿಗೆ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಕೃಷಿ ಇಲಾಖೆಯಲ್ಲಿ ಶೇ.57ರಷ್ಟು ವಿವಿಧ ಹುದ್ದೆಗಳು ಖಾಲಿ ಇವೆ. ಅಂದರೆ ಸುಮಾರು 2,500 ಹುದ್ದೆಗಳು ಖಾಲಿ ಇದ್ದು, ಮೊದಲ ಹಂತದಲ್ಲಿ ಒಂದು ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದು, ಅವರು ಆರ್ಥಿಕ ಇಲಾಖೆಗೆ ಸೂಚಿಸಿದ್ದಾರೆ. ಆದಷ್ಟು ಬೇಗ ನೇಮಕಾತಿ ಮಾಡಲಾಗುವುದು. ಇದರಲ್ಲಿ ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಕಾರಿಗಳ ಹುದ್ದೆಗಳು ಸೇರಿವೆ ಎಂದರು.

ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಕೃಷಿ ಅಧಿಕಾರಿಗಳಿದ್ದಾರೆ. ಆದರೆ ಕ್ಷೇತ್ರ ಮಟ್ಟದಲ್ಲಿ ಇಲ್ಲ. ಹೋಬಳಿ, ತಾಲ್ಲೂಕು ಮಟ್ಟದಲ್ಲೂ ಕೃಷಿ ಅಧಿಕಾರಿಗಳು ರೈತರ ಸಂಪರ್ಕಕ್ಕೆ ಸಿಗಬೇಕೆಂಬುದು ನಮ್ಮ ಉದ್ದೇಶ. ಖಾಲಿ ಇರುವ ಹುದ್ದೇಶಗಳಲ್ಲಿ ಶೇ.50ರಷ್ಟು ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಕಳೆದ ಐದು ವರ್ಷಗಳಲ್ಲಿ ಕೃಷಿ ಇಲಾಖೆಯಲ್ಲಿ ನೇಮಕಾತಿಯನ್ನೇ ಮಾಡಿಲ್ಲ. ನಾವು ನಾಲ್ಕೂವರೆ ತಿಂಗಳಲ್ಲೇ ನೇಮಕಾತಿಗೆ ಕ್ರಮ ಕೈಗೊಂಡಿದ್ದೇವೆ ಎಂದರು. ಅಲ್ಲದೆ 360 ಕೃಷಿ ಸಹಾಯಕ ಅಧಿಕಾರಿಗಳ ಹುದ್ದೆಗಳು ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು. ಕಳೆದ ವರ್ಷ ಸೆಪ್ಟೆಂಬರ್‍ನಲ್ಲಿ 113 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವರ್ಷ 22 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಪೂರ್ಣ ಪ್ರಮಾಣದಲ್ಲಿ ನಿಲ್ಲಿಸಲು ಸರ್ಕಾರ ಕೆಲಸ ಮಾಡುತ್ತಿದೆ. ರೈತರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದರು.

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇರುವುದನ್ನು ಮುಖ್ಯಮಂತ್ರಿಗಳು ಗಮನಿಸಿದ್ದು, ಆದಷ್ಟು ಬೇಗ ಪರಿಹರಿಸಲಾಗುವುದು ಎಂದರು. ರಾಜ್ಯದಲ್ಲಿನ ಬರಪೀಡಿತ ಪ್ರದೇಶಗಳ ಅಧ್ಯಯನವನ್ನು ಕೇಂದ್ರ ತಂಡ ಮಾಡಿದ್ದು ಕೇಂದ್ರ ಸರ್ಕಾರಕ್ಕೆ ವರದಿ ನೀಡಲಿದೆ. ಆ ವರದಿ ಆಧರಿಸಿ ಕೇಂದ್ರ ಸರ್ಕಾರ ನೀಡುವ ಪರಿಹಾರ ಧನ ನೋಡಿಕೊಂಡು ರಾಜ್ಯ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ. 195 ತಾಲ್ಲೂಕುಗಳ ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿದ್ದು, ಸುಮಾರು 5 ಸಾವಿರ ಕೋಟಿ ರೂ. ಪರಿಹಾರ ನೀಡಲು ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.

RELATED ARTICLES

Latest News