ಮೈಸೂರು, ಮಾ.24- ರಾಜ್ಯದ 28 ಕ್ಷೇತ್ರಗಳನ್ನೂ ನಾವು ಪ್ರತಿಷ್ಠೆಯಾಗಿ ಪರಿಗಣಿಸಿದ್ದು, 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ತವರು ಕ್ಷೇತ್ರ ಮೈಸೂರು-ಕೊಡಗು, ಚಾಮರಾಜನಗರ ಕ್ಷೇತ್ರವಷ್ಟೇ ಅಲ್ಲ, ರಾಜ್ಯದ ಎಲ್ಲ ಕ್ಷೇತ್ರಗಳೂ ನಮಗೆ ಪ್ರತಿಷ್ಠೆಯಾಗಿವೆ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಅವರಿಗೆ ಯಾವುದೇ ಪ್ರಯೋಜನವಿಲ್ಲ. ಆದರೆ, ಅದು ನಮಗೇ ಅನುಕೂಲ. ನಮ್ಮ ಚುನಾವಣಾ ಕಾರ್ಯತಂತ್ರಕ್ಕೆ ಅನುಗುಣವಾಗಿ ನಾವು ಸಾಧನೆಯನ್ನು ಮುಂದಿಟ್ಟುಕೊಂಡು ಮತದಾರರ ಬಳಿ ಹೋಗುತ್ತೇವೆ ಎಂದು ಹೇಳಿದರು.
ಚುನಾವಣಾ ಕಾರ್ಯತಂತ್ರದಲ್ಲಿ ಹಲವಾರು ಗುಟ್ಟುಗಳಿರುತ್ತವೆ. ಆದರೆ, ಅದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಬಿಜೆಪಿಯವರು ಎಷ್ಟೇ ಸುಳ್ಳು ಹೇಳಿದರೂ ಜನ ನಂಬುವುದಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ಅಧಿಕಾರಕ್ಕೆ ಬಂದ ತಕ್ಷಣವೇ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ಜನರ ಆರ್ಥಿಕ ಬದುಕನ್ನು ಉತ್ತಮಗೊಳಿಸುವತ್ತ ನಾವು ಹೆಜ್ಜೆ ಇಟ್ಟಿದ್ದೇವೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳಿಗೆ ಈಗಾಗಲೇ 52 ಸಾವಿರಕ್ಕೂ ಹೆಚ್ಚು ಹಣವನ್ನು ಮೀಸಲಿಟ್ಟಿದ್ದೇವೆ. ಇದಲ್ಲದೆ, ಮಹಿಳಾ ಸಬಲೀಕರಣಕ್ಕೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದು ಹೇಳಿದರು.
ಸದ್ಯ ನಮಗೆ ನಾಲ್ಕು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ನಡೆಯುತ್ತಿದ್ದು, ನಾಳೆ ಅಥವಾ ನಾಡಿದ್ದು ಪ್ರಕಟಿಸಲಾಗುವುದು. ಇದರಲ್ಲಿ ನಮಗೆ ಯಾವುದೇ ಕಗ್ಗಂಟಿಲ್ಲ, ಗೊಂದಲವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಕೇಂದ್ರ ಸರ್ಕಾರದ ಹಲವಾರು ಯೋಜನೆಗಳು ಇನ್ನೂ ಜಾರಿಗೆ ಬಂದಿಲ್ಲ, ಜನರಿಗೆ ತಲುಪುತ್ತಿಲ್ಲ. ಸಂಘಟಿತರಾಗಿ ನಾವು ಚುನಾವಣೆ ಎದುರಿಸಿ 20ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ಸಿಎಂ ತಿಳಿಸಿದರು.