ಬೆಂಗಳೂರು,ನ.11– ರಾಜ್ಯದ ವಿಜಯಪುರ ಸೇರಿದಂತೆ ಇತರ ಜಿಲ್ಲೆಗಳಲ್ಲಿ ವಕ್ಫ್ ಬೋರ್ಡ್ ರೈತರಿಗೆ ನೋಟಿಸ್ ಕೊಟ್ಟಿರುವ ಹಿನ್ನೆಲೆಯಲ್ಲಿ ತಲೆದೋರಿರುವ ವಿವಾದವನ್ನು ಜೀವಂತವಾಗಿ ಇಡುವಂತೆ ಹಾಗೂ ನಿರಂತರವಾಗಿ ಪ್ರತಿಭಟನೆ ನಡೆಸುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದಾರೆ.
ರಾಜ್ಯದಲ್ಲಿ ವಕ್‌್ಫ ಬೋರ್ಡ್ ನೋಟಿಸ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಉಪ ಚುನಾವಣೆಯಲ್ಲೂ ವಕ್ಫ್ ಬೋರ್ಡ್ ನೋಟಿಸ್ ವಿಚಾರವನ್ನು ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡುತ್ತಿದೆ. ಕಾಂಗ್ರೆಸ್ ನಾಯಕರ ವಿರುದ್ಧ ಜನಾಭಿಪ್ರಾಯ ರೂಪಿಸುವಲ್ಲೂ ಇದು ಅನುಕೂಲವಾಗಿದೆ.
ಶಿಗ್ಗಾವಿ ಉಪ ಚುನಾವಣೆ ಹಾಗೂ ಚನ್ನಪಟ್ಟಣದಲ್ಲಿ ಇದು ಬಿಜೆಪಿ ಮೈತ್ರಿ ಕೂಟಕ್ಕೆ ಅನುಕೂಲಕರವಾಗಿ ಮಾರ್ಪಡುತ್ತಿದೆ. ಹಾವೇರಿಯಲ್ಲಿ ಮುಸ್ಲಿಂ ಮುಖಂಡರ ಮನೆಗಳಿಗೆ ಕಲ್ಲು ತೂರಾಟವೂ ನಡೆದಿತ್ತು. ಇನ್ನು ಶಿಗ್ಗಾವಿ ಹಾಗೂ ಚನ್ನಪಟ್ಟಣದಲ್ಲಿ ನಡೆಯುವ ಚುನಾವಣಾ ಪ್ರಚಾರದಲ್ಲೂ ವಕ್ಫ್ ವಿಚಾರವನ್ನು ಪ್ರಸ್ತಾಪಿಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿಯನ್ನು ಬಿಜೆಪಿ ನಾಯಕರು ನಡೆಸುತ್ತಿದ್ದಾರೆ.
ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲು ಚಿಂತನೆ ನಡೆಸುತ್ತಿದೆ. ಇದರ ಸಾಧಕ ಬಾಧಕ ಪರಿಶೀಲನೆ ನಡೆಸಲು ಈಗಾಗಲೇ ಜಗದಾಂಬಿಕಾ ಪಾಲ್ ನೇತೃತ್ವದಲ್ಲಿ ಜಂಟಿ ಸಂಸದೀಯ ಸಮಿತಿಯನ್ನು ರಚನೆ ಮಾಡಲಾಗಿದೆ. ಈ ಸಮಿತಿ ವಿಜಯಪುರ ರೈತರಿಗೆ ವಕ್ಫ್ ನೋಟಿಸ್ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ರೈತರ ಅಹವಾಲು ಸ್ವೀಕಾರ ಮಾಡಿದೆ. ಕೇಂದ್ರ ಸಚಿವ ಅಮಿತ್ ಶಾ ಸೂಚನೆಯ ಮೇರೆಗೆ ಬಿಜೆಪಿ ನಾಯಕರು ಈ ಎಲ್ಲಾ ತಂತ್ರಗಾರಿಕೆಗಳನ್ನು ಪ್ರಯೋಗ ಮಾಡುತ್ತಿದ್ದಾರೆ ಎಂಬ ಮಾತುಗಳು ಬಿಜೆಪಿ ಪಾಳಯದಿಂದಲೇ ಕೇಳಿ ಬರುತ್ತಿದೆ.
ಬೆಳಗಾವಿ ಅಧಿವೇಶನದಲ್ಲೂ ಪ್ರಸ್ತಾಪಕ್ಕೆ ಚಿಂತನೆ :
ಇನ್ನು ವಕ್‌್ಫ ವಿವಾದವನ್ನು ಕೇವಲ ಹೋರಾಟ ಮಾಡಿ ಸುಮನಾಗದೆ ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಪ್ರಸ್ತಾಪ ಮಾಡಲು ನಿರ್ಧಾರ ಮಾಡಲಾಗಿದೆ. ಸದನದಲ್ಲಿ ರೈತರಿಗೆ ನೋಟಿಸ್ ಕೊಟ್ಟ ವಕ್ಫ್ ನಡೆಯನ್ನು ವಿರೋಧಿಸಿ ಧರಣಿ ನಡೆಸಲೂ ಬಿಜೆಪಿ ನಾಯಕರು ಚಿಂತನೆ ನಡೆಸುತ್ತಿದ್ದಾರೆ.
ಅಲ್ಲದೆ, ನೋಟಿಸ್ ಸಿಕ್ಕ ರೈತರನ್ನು ಸೇರಿಸಿಕೊಂಡು ಬಿಜೆಪಿ ಕಾರ್ಯಕರ್ತರು ಬೆಳಗಾವಿ ಚಲೋ ಮಾಡುವ ನಿಟ್ಟಿನಲ್ಲೂ ಪಕ್ಷದಲ್ಲಿ ಚರ್ಚೆ ನಡೆಯುತ್ತಿದೆ. ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ಮೂಲಕ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕಮಲ ಪಡೆ ಸಿದ್ಧತೆ ನಡೆಸುತ್ತಿದೆ.