ಬೆಂಗಳೂರು,ಆ.3-ಕೇಂದ್ರ ಗೃಹ ಸಚಿವ ಅಮಿತ್ ಷಾ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ಪಕ್ಷದ ಪ್ರಮುಖರ ಜೊತೆ ಪ್ರಸ್ತುತ ವಿದ್ಯಮಾನಗಳ ಕುರಿತು ಚರ್ಚೆ ನಡೆಸುವ ಸಂಭವವಿದೆ. ಅಮಿತ್ ಷಾ ಅವರ ಅಧಿಕೃತ ಪ್ರವಾಸ ಪಟ್ಟಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿಯ ಯಾವುದೇ ನಾಯಕರನ್ನು ಭೇಟಿಯಾಗುವುದರ ಬಗ್ಗೆ ಮಾಹಿತಿ ಇಲ್ಲ.
ಆದರೆ ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವ ಸಾಲು ಸಾಲು ಸರಣಿ ಹತ್ಯೆಗಳು, ಸ್ವಪಕ್ಷದವರೇ ಪಕ್ಷದ ವಿರುದ್ಧ ತಿರುಗಿ ಬಿದ್ದಿರುವುದು, ಕಾನೂನು ಸುವ್ಯವಸ್ಥೆ ಮುಂದಿಟ್ಟುಕೊಂಡು ಪ್ರತಿಪಕ್ಷಗಳ ವಾಗ್ದಾಳಿ ಸೇರಿದಂತೆ ಕೆಲವು ಪ್ರಮುಖ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
ನಾಳೆ ಬೆಳಗ್ಗೆ ಸಿಎಂ ಬೊಮ್ಮಾಯಿ ಸೇರಿದಂತೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಹಾಗೂ ಕೆಲವು ಪ್ರಮುಖರ ಜೊತೆ ತಾಜ್‍ವೆಸ್ಟೆಂಡ್ ಹೋಟೆಲ್‍ನಲ್ಲಿ ತಂಗಿರುವ ವೇಳೆ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆಯ ನಂತರ ಕೆಲ ಯುವ ಮುಖಂಡರು ಸಾಲು ಸಾಲು ರಾಜೀನಾಮೆ ಕೊಟ್ಟಿದ್ದಾರೆ.ಇದು ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಹೀಗಾಗಿ ಡ್ಯಾಮೇಜ್ ಕಂಟ್ರೋಲ್‍ಗೆ ಮುಂದಾಗಿರುವ ಬಿಜೆಪಿ ನಾಯಕರು ಮುಂದೆ ಕೈಗೊಳ್ಳಬೇಕಾದ ಕಾರ್ಯಕತಂತ್ರಗಳ ಬಗ್ಗೆ ಅಮಿತ್ ಷಾ ಅವರಿಂದ ಸಲಹೆ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.
ಪ್ರಸ್ತುತ ಬೆಳವಣಿಗೆಗಳು ಬಿಜೆಪಿಗೆ ಪೂರಕವಾಗಿಲ್ಲ. ಹೀಗಾಗಿ ಯಾರೂ ಕೂಡ ಅನಗತ್ಯವಾಗಿ ಗೊಂದಲ ಇಲ್ಲವೇ ವಿವಾದಾತ್ಮಕ ಹೇಳಿಕೆಗಳನ್ನು ಕೊಡಬಾರದು. ಪರಿಸ್ಥಿತಿ ತಿಳಿಯಾಗುವವರೆಗೂ ಎಚ್ಚರಿಕೆ ಹೆಜ್ಜೆ ಇಡುವಂತೆ ಷಾ ಸೂಚನೆ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.