Saturday, May 4, 2024
Homeರಾಜ್ಯವಿಧಾನಸೌಧಕ್ಕೆ ಬೀಗ ಜಡಿಯಲು ಯತ್ನ

ವಿಧಾನಸೌಧಕ್ಕೆ ಬೀಗ ಜಡಿಯಲು ಯತ್ನ

ಬೆಂಗಳೂರು,ಫೆ.7- ರಾಜ್ಯ ಸರ್ಕಾರದ ವೈಫಲ್ಯವನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಚೇರಿಗೆ ಬೀಗ ಹಾಕಲು ವಿಫಲ ಪ್ರಯತ್ನ ನಡೆಸಿದ ಪ್ರಸಂಗ ಜರುಗಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಉಪನಾಯಕ ಅರವಿಂದ್ ಬೆಲ್ಲದ್, ವಿಧಾನ ಪರಿಷತ್ನ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ, ಮುಖ್ಯ ಸಚೇತಕ ಎನ್.ರವಿಕುಮಾರ್, ಶಾಸಕರಾದ ಮುನಿರತ್ನ, ಚನ್ನಬಸಪ್ಪ, ರವಿಸುಬ್ರಹ್ಮಣ್ಯ, ಎಚ್.ಕೆ.ಕುಮಾರಸ್ವಾಮಿ ಸೇರಿದಂತೆ ಅನೇಕರು ಗಾಂ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನಡೆದ ಬಳಿಕ ಶಾಸಕರು ಹಾಗೂ ಬಿಜೆಪಿ ಕಾರ್ಯಕರ್ತರು ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಚೇರಿಗೆ ಬೀಗ ಹಾಕುವ ಪ್ರಯತ್ನ ಮಾಡಿದರು. ಆದರೆ ಪೊಲೀಸರು ಇದಕ್ಕೆ ಅವಕಾಶ ಕೊಡದೆ ತಡೆ ಹಿಡಿದರು. ಒಂದು ಹಂತದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಅಶೋಕ್ ಅವರು ಪೊಲೀಸರನ್ನು ತಳ್ಳಿ ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಸಿಎಂ ಕಚೇರಿಗೆ ಬೀಗ ಹಾಕಲು ಮುಂದಾದರು.

ಸಕಾಲದಲ್ಲಿ ಪೊಲೀಸರು ಮಧ್ಯಪ್ರವೇಶಿಸಿದರು. ನಂತರ ಬಿಜೆಪಿ ಕಾರ್ಯಕರ್ತರು ಶಾಸಕರ ಭವನದಿಂದ ಪ್ರವೇಶಿಸುವ ದಕ್ಷಿಣ ದ್ವಾರಕ್ಕೆ ಬೀಗ ಜಡಿಯಲು ಮುಂದಾದರು. ಈ ವೇಳೆ ಭದ್ರತೆಗೆ ನಿಂತಿದ್ದ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತಳ್ಳಾಟ, ಮಾತಿನ ಚಕಮಕಿ ನಡೆದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು.

ಕರ್ನಾಟಕದ ಇತಿಹಾಸದಲ್ಲಿ ಇಷ್ಟು ದೊಡ್ಡ ನಾಟಕ ಮಾಡುವ ಸರ್ಕಾರ ಇನ್ನೊಂದಿಲ್ಲ : ಬೊಮ್ಮಾಯಿ

ನಾವು ಪ್ರವೇಶ ದ್ವಾರಕ್ಕೆ ಬೀಗ ಹಾಕುತ್ತೇವೆ ಎಂದು ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದರೆ ಪೊಲೀಸರು ನಾವು ಅವಕಾಶ ಕೊಡುವುದಿಲ್ಲ. ಕೇವಲ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದೀರಿ. ಈಗ ಪ್ರತಿಭಟನೆ ನಡೆಸುತ್ತೇವೆ ಎಂದರೆ ಅದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದರು.
ಪೊಲೀಸರ ಮಾತಿಗೂ ಜಗ್ಗದೆ ಬೀಗ ಜಡಿಯಲು ಮುಂದಾಗುತ್ತಿದ್ದಂತೆ ಮಧ್ಯಪ್ರವೇಶ ಮಾಡಿದ ಪೊಲೀಸರು ಶಾಸಕರು ಮತ್ತು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

RELATED ARTICLES

Latest News