ಬೆಂಗಳೂರು,ಆ.17– ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದರಿಂದ ಯಾವುದೇ ಕ್ಷಣದಲ್ಲೂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ.
ದೂರುದಾರರಾದ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್ ಅವರು ನೀಡಿರುವ ದೂರಿನ ಅನುಸಾರ ಲೋಕಾಯುಕ್ತ ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳುವ ಸಂಭವವಿದೆ.ರಾಜ್ಯಪಾಲರು ನಿರ್ದಿಷ್ಟ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವ ಬಗ್ಗೆ ತಮ ನೋಟೀಸ್ನಲ್ಲಿ ಉಲ್ಲೇಖ ಮಾಡಿಲ್ಲವಾದರೂ ದೂರುದಾರರು ಈಗಾಗಲೇ ಲೋಕಾಯುಕ್ತ ನ್ಯಾಯಾಲಯಕ್ಕೆ ದೂರು ಕೊಟ್ಟಿದ್ದಾರೆ.
ಇದೀಗ ರಾಜ್ಯಪಾಲರೂ ಕೂಡ ತನಿಖೆಗೆ ಅನುಮತಿ ನೀಡಿರುವುದರಿಂದ ಸಿದ್ದರಾಮಯ್ಯ ಮೇಲೆ ಎಫ್ಐಆರ್ ದಾಖಲಿಸುವುದು ಅನಿವಾರ್ಯವಾಗುತ್ತದೆ.ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ನಂತರ ಎಫ್ಐಆರ್ ದಾಖಲಿಸಿಕೊಂಡಿದ್ದರು. ಈ ಎಫ್ಐಆರ್ ರದ್ದುಪಡಿಸಬೇಕೆಂದು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಮೇಲನವಿ ಅರ್ಜಿ ಸಲ್ಲಿಸಿದ್ದರು.
ಆದರೆ ನ್ಯಾಯಾಲಯ ಈ ಅರ್ಜಿಯನ್ನು ವಜಾಗೊಳಿಸಿ ಯಡಿಯೂರಪ್ಪ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಸಿದ್ದರಾಮಯ್ಯ ಕೂಡ ಪ್ರಭಾವಿ ಸ್ಥಾನದಲ್ಲಿರುವುದರಿಂದ ಸಾಕ್ಷ್ಯಗಳನ್ನು ನಾಶಪಡಿಸುವ ಇಲ್ಲವೇ, ಪ್ರಭಾವ ಬೀರುವ ಸಾಧ್ಯತೆ ಇದೆ ಎಂಬುದು ಕಂಡುಬಂದಿದೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವ ಸಾಧ್ಯತೆಯಿದೆ.