ಬೆಂಗಳೂರು,ಜೂ.13- ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನು ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಇರಿಸಿ ಸಂಪೂರ್ಣ ತನಿಖೆ ನಡೆಸುತ್ತಿದ್ದು, ಠಾಣೆ ಬಳಿ ಗುಂಪು ಸೇರುವುದನ್ನು ನಿಯಂತ್ರಿಸುವ ಸಲುವಾಗಿ ಠಾಣೆ ಸುತ್ತ 200 ಮೀಟರ್ ಪ್ರದೇಶದಲ್ಲಿ ಇಂದಿನಿಂದ ಐದು ದಿನಗಳ ಕಾಲ ಪ್ರತಿಬಂಧ ಕಾಯ್ದೆ ವಿಧಿಸಿ ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಅವರು ಆದೇಶಿಸಿದ್ದಾರೆ.
ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರಬಾರು, ಮೆರವಣಿಗೆ ಮತ್ತು ಸಭೆಗಳನ್ನು ನಡೆಸಬಾರದು, ದೊಣ್ಣೆ, ಕತ್ತಿ ಸೇರಿದಂತೆ ಯಾವುದೇ ಮಾರಕಾಸ್ತ್ರಗಳು ಅಥವಾ ದೈಹಿಕ ಹಿಂಸೆ ಮಾಡುವ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.
ಯಾವುದೇ ಸ್ಫೋಟಕ ವಸ್ತು ಸಿಡಿಸುವುದು, ಕಲ್ಲು ಕ್ಷಿಪಣಿ ಎಸೆಯುವ ಸಾಧನಗಳ ಅಥವಾ ಉಪಕರಣಗಳ ಸಾಗಾಟ ಮತ್ತು ಶೇಖರಿಸುವುದನ್ನು ನಿಷೇಧಿಸಲಾಗಿದೆ. ವ್ಯಕ್ತಿ ಅಥವಾ ಶವಗಳ ಪ್ರತಿಕೃತಿ ಪ್ರದರ್ಶನ ಮಾಡುವುದನ್ನು ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಭಿತ್ತಿಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಿ ಆಯುಕ್ತರು ಆದೇಶಿಸಿದ್ದಾರೆ.
ನಟ ದರ್ಶನ್ ಸೇರಿದಂತೆ ಕೆಲವು ಆರೋಪಿಗಳನ್ನು ಈ ಠಾಣೆಯಲ್ಲಿ ಇರಿಸಿ ವಿಚಾರಣೆ ನಡೆಸಲಾಗುತ್ತಿದೆ.