ಬೆಂಗಳೂರು,ಡಿ.1– ಶಾಸಕ ಮುನಿರತ್ನ ಅವರ ವಿರುದ್ಧ ನಂದಿನಿಲೇಔಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸಿಐಡಿಯ ಎಸ್ಐಟಿಗೆ ವರ್ಗಾವಣೆಯಾಗಿದೆ.ಮುನಿರತ್ನ ಅವರ ಮೇಲಿನ ಎಲ್ಲಾ ಪ್ರಕರಣಗಳ ತನಿಖೆಗಾಗಿ ಸರ್ಕಾರ ಎಸ್ಐಟಿ ರಚನೆ ಮಾಡಿದ್ದು, ಈ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಅಲ್ಲಿಗೆ ವರ್ಗಾವಣೆ ಮಾಡಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಈ ಸಂಜೆಗೆ ತಿಳಿಸಿದ್ದಾರೆ.
ತನ್ನ ಕುಟುಂಬದವರನ್ನು ಹನಿಟ್ರಾಪ್ ಮಾಡಲು ಯತ್ನಿಸಿದರಲ್ಲದೆ ಹತ್ಯೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಬಿಬಿಎಂಪಿಯ ಮಾಜಿ ಸದಸ್ಯೆ ಮಂಜುಳ ಅವರ ಪತಿ ಲಗ್ಗೆಯ ನಾರಾಯಣಸ್ವಾಮಿ ಅವರು ನಂದಿನಿ ಲೇಔಟ್ ಪೊಲೀಸ್ ಠಾಣೆಗೆ ಶಾಸಕ ಮುನಿರತ್ನ ವಿರುದ್ಧ ದೂರು ನೀಡಿದ್ದಾರೆ.
ಶಾಸಕ ಮುನಿರತ್ನ ಮತ್ತು ಅವರ ಬೆಂಬಲಿಗರು ಕಳೆದ 8 ವರ್ಷಗಳಿಂದ ನನ್ನ ಮತ್ತು ಪತ್ನಿಯ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ರಾಮನಗರ ಜಿಲ್ಲೆಯ ಕಗ್ಗಲಿಪುರ, ನಗರದ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಮುನಿರತ್ನ ಅವರ ವಿರುದ್ಧ ಪ್ರಕರಣಗಳು ದಾಖಲಾಗಿವೆ.
ಮುನಿರತ್ನ ಅವರ ವಿರುದ್ಧ ಜಾತಿ ನಿಂದನೆ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿರುವ ಎಸ್ಐಟಿ, ನಗರದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ.