ಏಕಕಾಲಕ್ಕೆ ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ..!

Spread the love

ಬೆಂಗಳೂರು, ಅ.17- ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಏಕಕಾಲಕ್ಕೆ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಎಡಬಿಡದೆ ಮಳೆ ಸುರಿಯುತ್ತಿದೆ. ಹವಾ ಮುನ್ಸೂಚನೆ ಪ್ರಕಾರ ಇನ್ನೂ ಎರಡು ದಿನಗಳ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆ ಮುಂದುವರೆಯಲಿದೆ.

ಕಳೆದ ಎಂಟತ್ತು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಸಂಜೆ ಹಾಗೂ ರಾತ್ರಿ ವೇಳೆ ಮಳೆ ಆರಂಭವಾಗಿ ಕೆಲವೆಡೆ ಸಾಧಾರಣ ಮತ್ತೆ ಕೆಲವೆಡೆ ಭಾರೀ ಮಳೆಯಾಗಿದೆ. ಇಂದು ಬೆಳಗ್ಗೆ ಕೂಡ ಹಗುರ ಮಳೆಯಾಗಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿತ್ತು. ಎರಡೂ ಕಡೆ ವಾಯುಭಾರ ಕುಸಿತವಾಗಿರುವುದರಿಂದ ನೈಋತ್ಯ ಮುಂಗಾರು ಮರಳುವಿಕೆ ಪ್ರಕ್ರಿಯೆ ವಿಳಂಬವಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು.

ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದ ನಡುವೆ ಉಂಟಾಗಿರುವ ವಾಯುಭಾರ ಕುಸಿತದ ನಡುವೆ ಟ್ರಪ್ ನಿರ್ಮಾಣವಾಗಿರುವುದರಿಂದ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಕೆಲವೆಡೆ ಆಗಾಗ್ಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಆನಂತರ ನೈಋತ್ಯ ಮುಂಗಾರು ಮರಳುವಿಕೆ ಪ್ರಕ್ರಿಯೆ ಮುಂದುವರೆಯಲಿದೆ. ಇದುವರೆಗೆ ಹವಾ ಮುನ್ಸೂಚನೆ ಪ್ರಕಾರ ಈಗಾಗಲೇ ಮುಂಗಾರು ಮರಳುವಿಕೆ ಪೂರ್ಣಗೊಂಡು ಈಶಾನ್ಯ ಹಿಂಗಾರು ಮಳೆಯ ಪ್ರಕ್ರಿಯೆ ಆರಂಭವಾಗಬೇಕಿತ್ತು ಎಂದು ಅವರು ಹೇಳಿದರು.