ಬೆಂಗಳೂರು,ಫೆ.16– ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರಲು ರಾಜ್ಯ ಸರ್ಕಾರ ವ್ಯವಸ್ಥೆ ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಅಧಿಕಾರಿಗಳು ಏರ್ ಆಂಬುಲೆನ್ಸ್ ಸಜ್ಜುಗೊಳಿಸಿದ್ದು ಶಾಂತಕುಮಾರ್ ಅವರನ್ನು ಚಂಡೀಗಡದಿಂದ ಬೆಂಗಳೂರಿಗೆ ಕರೆತಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗುವುದು.
ರಸ್ತೆ ಅಪಘಾತದಲ್ಲಿ ಶಾಂತಕುಮಾರ್ ಅವರ ಬೆನ್ನು ಮೂಳೆಗೆ ಗಂಭೀರ ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಸ್ತುತ ಶಾಂತಕುಮಾರ್ ಅವರಿಗೆ ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.