ಬೆಂಗಳೂರು,ಅ.20-ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ ನಡೆಸಿದರೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿಲ್ಲ. ಬಿಕ್ಕಟ್ಟು ಬಗೆಹರಿಯದಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ವಿಳಂಬವಾಗಲಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅೋಂಕ್, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ್, ಸಾ.ರಾ.ಮಹೇಶ್, ಸಂಸದ ಮಲ್ಲೇಶ್ ಬಾಬು ಮೊದಲಾದವರಿದ್ದ ಸಮನ್ವಯ ಸಭೆಯಲ್ಲಿ ಕುಮಾರಸ್ವಾಮಿ ಅವರಿಗೆ ಅಭ್ಯರ್ಥಿ ಆಯ್ಕೆ ಜವಾಬ್ದಾರಿ ನೀಡಲಾಗಿದೆ.
ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಸಂಡೂರು ಹಾಗೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಈ ಎರಡು ಕ್ಷೇತ್ರಗಳನ್ನು ಬಿಜೆಪಿ ಉಳಿಸಿಕೊಂಡಿದ್ದು, ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ.
ಹೀಗಾಗಿ ಕುಮಾರಸ್ವಾಮಿ ಅವರು ಪ್ರತಿನಿಧಿಸಿದ್ದ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಚಿಹ್ನೆಯಡಿ ಸ್ಪರ್ಧೆಗಿಳಿಯುವ ಬಗ್ಗೆ ಉಭಯ ಪಕ್ಷಗಳ ನಾಯಕರು ತೀರ್ಮಾನಿಸಿದ್ದಾರೆ. ಆದರೆ, ಅಭ್ಯರ್ಥಿ ಆಯ್ಕೆ ಬಿಕ್ಕಟ್ಟು ಮಾತ್ರ ಮುಂದುವರೆದಿದೆ.
ನಾಳೆ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪ್ರಮುಖರ ಸಭೆ ನಡೆಯಲಿದ್ದು, ಸಭೆಯಲ್ಲಿ ಶಾಸಕರು, ಮಾಜಿ ಸಚಿವರು ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಉಪ ಚುನಾವಣೆ ಹಾಗೂ ಅಭ್ಯರ್ಥಿ ಆಯ್ಕೆ ಕುರಿತಂತೆ ಚರ್ಚಿಸಿ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಇಂದು ನಡೆಯಬೇಕಾಗಿದ್ದ ಸಭೆ ಮಳೆಯಿಂದಾಗಿ ನಾಳೆಗೆ ಮುಂದೂಡಲಾಗಿದೆ. ನಾಳೆ ನಡೆಯುವ ಪಕ್ಷದ ಪ್ರಮುಖರ ಸಭೆಯಲ್ಲಿ ಕೈಗೊಂಡ ನಿರ್ಧಾರದ ಬಳಿಕ ಕುಮಾರಸ್ವಾಮಿ ಅವರು ಅಭ್ಯರ್ಥಿ ಆಯ್ಕೆ ಅಂತಿಮಗೊಳಿಸಲಿದ್ದಾರೆ.ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಗೂ ಬಿಜೆಪಿ ಕೇಂದ್ರ ನಾಯಕರೊಂದಿಗೆ ಕುಮಾರಸ್ವಾಮಿ ಸಮಾಲೋಚನೆ ನಡೆಸಿ ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಕಟಿಸುವ ಸಾಧ್ಯತೆಗಳಿವೆ.
ಉಪ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಲು ಅ.25ರವರೆಗೆ ಗಡುವು ಇದೆ. ಆಡಳಿತಾರೂಢ ಕಾಂಗ್ರೆಸ್ ಸಹ ಇನ್ನೂ ಈ ಕ್ಷೇತ್ರದ ಅಭ್ಯರ್ಥಿ ಪ್ರಕಟಿಸಿಲ್ಲ. ಹೀಗಾಗಿ ಎರಡು ಮೂರು ದಿನಗಳ ಕಾಲ ಕಾದು ನೋಡುವ ತಂತ್ರವನ್ನು ಜೆಡಿಎಸ್ ಅನುಸರಿಸುವ ಸಾಧ್ಯತೆಗಳಿವೆ.
ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಈ ಕ್ಷೇತ್ರದ ಪ್ರಬಲ ಸ್ಪರ್ಧಾಕಾಂಕ್ಷಿಯಾಗಿದ್ದಾರೆ. ಅವರ ಸ್ಪರ್ಧೆಯನ್ನು ಜೆಡಿಎಸ್ ವಿರೋಧಿಸಿಲ್ಲ. ಆದರೆ, ಬಿಜೆಪಿ ಬದಲಾಗಿ ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸಲಿ ಎಂಬ ಸಲಹೆಯನ್ನು ಮುಂದಿಟ್ಟಿದೆ. ಇದಕ್ಕೆ ಒಪ್ಪಿದರೆ ಯೋಗೇಶ್ವರ್ ಕಣಕ್ಕಿಳಿಯಲಿದ್ದಾರೆ.
ಇಲ್ಲದಿದ್ದರೆ, ಸ್ಥಳೀಯರನ್ನು ಕಣಕ್ಕಿಳಿಸುವ ಬಗ್ಗೆ ಜೆಡಿಎಸ್ ಗಂಭೀರ ಚಿಂತನೆ ನಡೆಸಿದೆ. ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುವುದಿಲ್ಲ ಎಂದು ಪದೇ ಪದೇ ಸ್ಪಷ್ಟಪಡಿಸಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಲಿ.
ಇಲ್ಲವೇ ನಿಮ ಕುಟುಂಬದವರು ಸ್ಪರ್ಧೆ ಮಾಡಬೇಕು ಎಂಬ ಒತ್ತಡವನ್ನು ಕುಮಾರಸ್ವಾಮಿ ಅವರ ಮೇಲೆ ತಂದಿದ್ದಾರೆ.ಜೆಡಿಎಸ್ ಸ್ಪರ್ಧೆ ಎಂಬುದು ನಿರ್ಧಾರವಾಗಿದ್ದರೂ ಅಭ್ಯರ್ಥಿ ಯಾರೆಂಬುದನ್ನು ಗುಟ್ಟಾಗಿ ಉಳಿಸಲಾಗಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಸಮಗ್ರವಾಗಿ ಚರ್ಚಿಸಿ ಮಂಗಳವಾರದ ವೇಳೆಗೆ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಅಂತಿಮಗೊಳಿಸಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.