ವಲಸಿಗರಿಗೆ ಜೆಡಿಎಸ್ ಮಣೆ

Social Share

ಬೆಂಗಳೂರು, ಮಾ.7- ರಾಷ್ಟ್ರೀಯ ಪಕ್ಷಗಳಿಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿ ಚುನಾವಣಾ ಅಖಾಡಕ್ಕಿಳಿದಿರುವ ಜೆಡಿಎಸ್, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ವಲಸೆ ಬಂದವರಿಗೆ ಮಣೆ ಹಾಕುತ್ತಿದೆ.

ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಬೇಕು ಎಂಬ ಉದ್ದೇಶದಿಂದ 123 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು ಎಂಬ ಗುರಿ ಹೊಂದಿದೆ. ಇದಕ್ಕಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪಂಚರತ್ನ ರಥಯಾತ್ರೆಯ ಮೂಲಕ ಚುನಾವಣಾ ಪ್ರಚಾರವನ್ನು ಆರಂಭಿಸಲಾಗಿದೆ.

ಈ ನಡುವೆ ರಾಷ್ಟ್ರೀಯ ಪಕ್ಷಗಳನ್ನು ತೊರೆದು ಪಕ್ಷಕ್ಕೆ ಸೇರ್ಪಡೆಯಾಗುವವರನ್ನು ಮುಂದಿನ ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳನ್ನಾಗಿ ಘೋಷಣೆ ಮಾಡಿ ಕಣಕ್ಕಿಳಿಸುತ್ತಿದೆ. ಆ ಮೂಲಕ ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ವಲಸೆ ಬರುವವರಿಗೆ ಆದ್ಯತೆ ನೀಡುತ್ತಿದೆ. ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿ ಬಹುಮತ ಗಳಿಸಬೇಕು ಎಂದು ಹೆಬ್ಬಯಕೆ ಹೊಂದಿದ್ದು, ಅದಕ್ಕಾಗಿ ಎಲ್ಲಾ ರೀತಿಯಲ್ಲೂ ಸಮರ್ಥರಾದವರನ್ನೇ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುತ್ತಿದೆ.

ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬಿಗ್ ರಿಲೀಫ್, ಜಾಮೀನು ಮಂಜೂರು

ಮಾಜಿ ಶಾಸಕ ವೈಎಸ್‍ವಿ ದತ್ತಾ ಪಕ್ಷ ತೊರೆದಿರುವ ಹಿನ್ನೆಲೆಯಲ್ಲಿ ಕಡೂರು ಕ್ಷೇತ್ರದಲ್ಲಿ ವಲಸೆ ಬಂದವರಿಗೆ ಮಣೆ ಹಾಕಲಾಗಿದೆ. ಇತ್ತೀಚೆಗೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾದ ಸಿ.ಎಂ.ಧನಂಜಯ ಅವರನ್ನು ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಘೋಷಿಸಿದ್ದಾರೆ.

ಅರಕಲಗೂಡು ಕ್ಷೇತ್ರದ ಶಾಸಕ ಎ.ಟಿ.ರಾಮಸ್ವಾಮಿ ಅವರು, ಪಕ್ಷದಲ್ಲಿ ಸಕ್ರಿಯವಾಗಿಲ್ಲ ಎಂಬ ಕಾರಣಕ್ಕೆ ಅವರಿಗೆ ಈ ಬಾರಿ ಟಿಕೆಟ್ ನಿರಾಕರಿಸುವುದು ಬಹುತೇಕ ಖಚಿತವಾಗಿದೆ. ಮಾಜಿ ಸಚಿವ ಎ.ಮಂಜು ಜೆಡಿಎಸ್ ಸೇರಲಿದ್ದಾರೆ. ಅರಕಲಗೂಡು ಕ್ಷೇತ್ರದಲ್ಲಿ ಎ.ಮಂಜು ಅವರಿಗೆ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದೆ. ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬ ಅವರು ಸಧ್ಯದಲ್ಲೇ ಜೆಡಿಎಸ್‍ಗೆ ಮರಳಲಿದ್ದು, ಅವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಯೋಜಿಸಲಾಗಿದೆ.

ಮಾಡಾಳ್ ಮಿಸ್ಸಿಂಗ್ : ಹುಡುಕಿಕೊಡುವಂತೆ ಕಾಂಗ್ರೆಸ್ ಪೋಸ್ಟರ್ ಪಾಲಿಟಿಕ್ಸ್

ಇದಲ್ಲದೆ, ಇತ್ತೀಚೆಗೆ ಜೆಡಿಎಸ್ ಸೇರ್ಪಡೆಯಾದ ಮಾಜಿ ಶಾಸಕ ವೀರಭದ್ರಪ್ಪ ಹಾಲರವಿ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ್ ಅವರು ಸಹ ವಿಧಾನಸಭೆಗೆ ಆಯ್ಕೆಯಾಗಿ ಬರಲಿದ್ದಾರೆ ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದರು. ಹೀಗಾಗಿ ವಲಸೆ ಬಂದಿರುವ ಇವರಿಬ್ಬರು ಅಭ್ಯರ್ಥಿಗಳಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಘೋಟ್ನೇಕರ್ ಅವರು ಹಳಿಯಾಳ ಕ್ಷೇತ್ರದಿಂದ ಹಾಗೂ ವೀರಭದ್ರಪ್ಪ ಹಾಲರವಿ ಅವರು ಹುಬ್ಬಳಿ-ಧಾರವಾಡ ಪೂರ್ವ ಕ್ಷೇತ್ರದಿಂದ ಸ್ಪರ್ಧೆಗಿಳಿಯುವ ಸಾಧ್ಯತೆಗಳಿವೆ.

ಜೆಡಿಎಸ್‍ನ ಎರಡನೇ ಪಟ್ಟಿ ಪ್ರಕಟಣೆ ಸಂದರ್ಭದಲ್ಲಿ ವಲಸಿಗರು ಅಭ್ಯರ್ಥಿಗಳಾಗಿ ಘೋಷಣೆಯಾಗುವ ಸಾಧ್ಯತೆಗಳಿವೆ.

ಪಕ್ಷ ತೊರೆಯುವ ಶಾಸಕರು ಹಾಗೂ ಮಾಜಿ ಶಾಸಕರ ಕ್ಷೇತ್ರಗಳಲ್ಲಿ ಈಗಾಗಲೇ ಪರ್ಯಾಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಉದ್ದೇಶಿಸಲಾಗಿದೆ. ಗುಬ್ಬಿ,ಕೋಲಾರ, ಕಡೂರು ಕ್ಷೇತ್ರಗಳಲ್ಲಿ ಬದಲಿ ಅಭ್ಯರ್ಥಿಗಳ ಘೋಷಣೆ ಆಗಿದೆ. ಅರಸೀಕೆರೆ, ಅರಕಲಗೂಡು ಸೇರಿದಂತೆ ಇನ್ನೂ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಬೇಕಿದೆ.

ಚುನಾವಣೆ ಸಮೀಪಿಸುತ್ತಿದಂತೆ ಇನ್ನಷ್ಟು ರಾಷ್ಟ್ರೀಯ ಪಕ್ಷಗಳ ಮುಖಂಡರು ಪಕ್ಷ ಸೇರ್ಪಡೆ ಆಗಲಿದ್ದು, ಅವರಿಗೂ ಟಿಕೆಟ್ ದೊರೆಯುವ ಸಾಧ್ಯತೆಗಳಿವೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

Articles You Might Like

Share This Article