ಬೆಂಗಳೂರು,ಅ.16- ಒಂದೇ ದಿನದ ಮಳೆಗೆ ಭಾರತದ ಸಿಲಿಕಾನ್ ವ್ಯಾಲಿ ಕೆರೆಯಂತೆ ಆಗಿದ್ದು, ಇಂಥ ದುಸ್ಥಿತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಟ್ಟ ನೀತಿಗಳೇ ಕಾರಣ ಎಂದು ಕೇಂದ್ರ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಗರದಲ್ಲಿ ಒಂದೇ ದಿನದ ವರುಣನ ಅಬ್ಬರಕ್ಕೆ ಭಾರತದ ಸಿಲಿಕಾನ್ ವ್ಯಾಲಿಯ ಮೂಲಸೌಕರ್ಯ ವ್ಯವಸ್ಥೆ ತತ್ತರಿಸಿ ಹೋಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತ ಮತ್ತು ಅಸಮರ್ಪಕ ನಿರ್ವಹಣೆಯಿಂದ ಭಾರತದ ಐಟಿ ಕಾರಿಡಾರ್‌ನಲ್ಲಿ ಪ್ರವಾಹಸದೃಶ ಪರಿಸ್ಥಿತಿ ತಲೆದೋರಿದೆ ಎಂದು ದೂರಿದ್ದಾರೆ.
ಒಳಚರಂಡಿ ವ್ಯವಸ್ಥೆ ಹದಗೆಟ್ಟು ರಸ್ತೆಗಳು ನದಿಗಳಾಗಿವೆ. ಸರ್ಕಾರದ ಘೋರ ವೈಫಲ್ಯದಿಂದ ಬೆಂಗಳೂರಿನ ಜನರು ಮಳೆಗೆ ಸಿಕ್ಕಿ ನರಕಯಾತನೆ ಅನುಭವಿಸುತ್ತಿದ್ದಾರೆ. ಆಡಳಿತ ವ್ಯವಸ್ಥೆಯ ಕೆಟ್ಟ ನೀತಿಗಳು ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮೆಯ ಬೆಂಗಳೂರು ನಗರವನ್ನು ಹಾಳುಗೆಡವಿದೆ ಎಂದು ಟೀಕಿಸಿದ್ದಾರೆ.
ಹೂಡಿಕೆದಾರ ಸ್ವರ್ಗವಾಗಿದ್ದ ಬೆಂಗಳೂರು, ಜಾಗತಿಕ ಮಟ್ಟದ ತಂತ್ರಜ್ಞಾನದ ನೆಚ್ಚಿನ ನೆಲೆವೀಡಾಗಿದ್ದ ಬೆಂಗಳೂರು ಈಗ ಇನ್ನಿಲ್ಲದ ದುಸ್ಥಿತಿಗೆ ಸಿಲುಕಿ ಕಣ್ಣೀರು ಹಾಕುತ್ತಿದೆ ಎಂದು ಆಕೋಶ ವ್ಯಕ್ತಪಡಿಸಿದ್ದಾರೆ.