ಶಿವಮೊಗ್ಗ ಸಹಜಸ್ಥಿತಿಗೆ ಮರಳಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ

Social Share

ಬೆಂಗಳೂರು,ಫೆ.24-ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಶಾಂತವಾಗದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಶಿವಮೊಗ್ಗ ಘಟನೆ ಕುರಿತಂತೆ ಸಮಾಲೋಚನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗಕ್ಕೆ ಹತ್ತಿರವಿದ್ದ ಆಗುಂಬೆಯಿಂದ ಆಂಟಿನಕ್ಸಲ್ ಪಡೆ ಹಾಗೂ ಆರ್‍ಎಎಫ್‍ಗಳನ್ನು ಕರೆಸಿದ್ದೆವು. ಅದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ ಎಂದರು.
ಶಿವಮೊಗ್ಗ ಘಟನೆ ಕುರಿತಂತೆ ಹಿರಿಯ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿಗಳೊಂದಿಗೂ ಚರ್ಚಿಸಿ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗಿದೆ. ಇಂದು ಶಿವಮೊಗ್ಗಕ್ಕೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳೊಂದಿಗೆ ಘಟನೆಯ ಹಿನ್ನೆಲೆಯಲ್ಲಿ ಚರ್ಚಿಸಲಾಗುವುದು. ಶಿವಮೊಗ್ಗದಲ್ಲಿ ಯುವಕನ ಹತ್ಯೆ ಪ್ರಕರಣ ದುರದೃಷ್ಟಕರವಾಗಿದೆ. ಆ ಹತ್ಯೆಗೆ ಸಂಬಂಧಿಸಿದಂತೆ ನ್ಯಾಯ ಕೊಡಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಹತ್ಯೆಯಲ್ಲಿ ಭಾಗವಹಿಸಿದವರಿಗೆ ಶಿಕ್ಷೆ ಕೊಡಿಸುವ ಪ್ರಯತ್ನ ಸರ್ಕಾರ ಮಾಡುತ್ತಿದೆ. ಹೀಗಾಗಿ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ಯುವಕನ ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ 8 ಮಂದಿಯನ್ನು ಬಂಧಿಸಲಾಗಿದೆ. ಇನ್ನೊಂದಷ್ಟು ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಬಂತರು ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದಾರೆಯೇ ಎಂಬುದು ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಘಟನೆಯ ಹಿಂದೆ ಮತೀಯ ಸಂಘಟನೆಗಳು ಇವೆ ಎಂಬ ಮಾಹಿತಿ ಕೇಳಿ ಬರುತ್ತಿದ್ದ, ಆ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದರು.
ಶಿವಮೊಗ್ಗದಲ್ಲಿ ಪೊಲೀಸರ ವೈಫಲ್ಯವೇನೂ ಇಲ್ಲ. ಬೆಂಗಳೂರು ನಗರ ಜಂಟಿ ಪೊಲೀಸ್ ಆಯುಕ್ತ (ಅಪರಾಧ) ರಮಣಗುಪ್ತ ಅವರನ್ನು ಶಿವಮೊಗ್ಗದಲ್ಲಿ ಕಾನೂನು ಸುವ್ಯವಸ್ಥೆ ನಿರ್ವಹಣೆ ಮಾಡಲು ಕಳುಹಿಸಲಾಗಿದೆ. ಪ್ರಕರಣದ ವಿಚಾರಣೆ ಹಂತದಲ್ಲಿ ಇರುವುದರಿಂದ ಎಲ್ಲವನ್ನೂ ಮಾಧ್ಯಮಗಳ ಮುಂದೆ ವಿಸ್ತೃತವಾಗಿ ಹೇಳಲಾಗುವುದಿಲ್ಲ ಎಂದು ತಿಳಿಸಿದರು.
ಪ್ರಚೋದನಕಾರಿ ಮಾಹಿತಿ ಹಂಚಿಕೆ ಮಾಡುವ ಹಿನ್ನೆಲೆಯಲ್ಲಿ ಸೋಷಿಯಲ್ ಮೀಡಿಯಾದ ಮೇಲೂ ಕಣ್ಣು ಇಡಲಾಗಿದೆ. ಏನು ಬೇಕಾದರೂ ಸೋಷಿಯಲ್ ಮೀಡಿಯಾದಲ್ಲಿ ಹಾಕುವಂತಿಲ್ಲ. ವಿವೇಚಾನಯುತವಾಗಿ ಬಳಸಬೇಕಾಗುತ್ತದೆ. ಸೋಸಿಯಲ್ ಮೀಡಿಯಾದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು. ಅಂಥವಹವರನ್ನು ಬಂಧಿಸಲಾಗುವುದು ಎಂದು ತಿಳಿಸಿದರು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಗ್ಗೆ ಕಲಬುರಗಿಯಲ್ಲಿ ಹೇಳಿಕೆ ನೀಡಿರುವ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಬಂೀಧಿಖಾನೆಗೆ ಹೆಚ್ಚಿನ ಹಣ: ಬಜೆಟ್‍ನಲ್ಲಿ ಪೊಲೀಸರಿಗೆ ನೀಡುವ ಸವಲತ್ತುಗಳ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಲಾಗಿದೆ. ಹಿಂದಿನ ಬಜೆಟ್‍ನಲ್ಲಿ ಸಾಕಷ್ಟು ಹಣವನ್ನು ನೀಡಿದ್ದಾರೆ. ಬಂೀಧಿಖಾನೆ ಅಭಿವೃದ್ಧಿ, ವಿಧಿವಿಜ್ಞಾನ ಪ್ರಯೋಗಾಲಯ ಅಭಿವೃದ್ಧಿಗೆ ಹಣ ನೀಡಬೇಕೆಂದು ಮನವಿ ಮಾಡಿರುವುದಾಗಿ ಅವರು ತಿಳಿಸಿದರು.

Articles You Might Like

Share This Article