ಬೆಂಗಳೂರು,ಜು.17- ಚಾಲಕರ ದಾಖಲೆಗಳ ಪರಿಶೀಲನೆಗಾಗಿ ವಾಹನಗಳನ್ನು ಪದೇ ಪದೇ ತಡೆದು ನಿಲ್ಲಿಸದಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತೊಮ್ಮೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಈ ಹಿಂದಿನ ಆದೇಶವನ್ನು ಪಾಲನೆ ಮಾಡದೆ, ವಾಹನ ಚಾಲಕರಿಗೆ ಅನಗತ್ಯವಾಗಿ ತೊಂದರೆ ಕೊಟ್ಟರೆ, ಅಂತಹವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದ ಪ್ರತಿಯೊಂದು ಜಿಲ್ಲೆಗಳಿಗೆ ಈ ಆದೇಶ ಅನ್ವಯವಾಗಲಿದೆ. ಇದರನ್ವಯ ಮದ್ಯಪಾನ ಸೇವಿಸಿ ಯಾರಾದರೂ ವಾಹನ ಚಾಲನೆ ಮಾಡುವುದು ಕಂಡು ಬಂದರೆ ಅಂತಹ ವಾಹನಗಳನ್ನು ತಡೆದು ತಪಾಸಣೆ ನಡೆಸಬೇಕು. ಉಳಿದಂತೆ ದಾಖಲೆಗಳ ಪರಿಶೀಲನೆ ನೆಪದಲ್ಲಿ ಸಾರ್ವಜನಿಕರಿಗೆ ಪದೇ ಪದೇ ತೊಂದರೆ ಕೊಟ್ಟರೆ, ಆದೇಶ ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ಕೊಟ್ಟಿದ್ದಾರೆ.
ಸಂಚಾರ ನಿಯಮ ಉಲ್ಲಂಘನೆ ಮಾಡದಿದ್ದರೂ ಸಂಚಾರಿ ಪೊಲೀಸರು ಸುಖಾಸುಮ್ಮನೆ ದಾಖಲೆ ಪರಿಶೀಲನೆ ನೆಪದಲ್ಲಿ ವಾಹನಗಳನ್ನು ನಿಲ್ಲಿಸಿ ತಪಾಸಣೆ ಮಾಡಲು ಮುಂದಾಗುತ್ತಿದ್ದರು ಎಂಬ ಆರೋಪವಿದೆ. ಕೆಲ ದಿನಗಳ ಹಿಂದೆ ಮದ್ಯಪಾನ ಮಾಡಿ ವಾಹನ ಚಲಾಯಿಸುವವರು ಮತ್ತು ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಾಹನಗಳನ್ನು ಮಾತ್ರ ತಪಾಸಣೆ ಮಾಡಿ. ಸುಖಾಸುಮ್ಮನೆ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸಿ ವಾಹನ ತಪಾಸಣೆ ಮಾಡದಂತೆ ಸೂದ್ ಸೂಚಿಸಿದ್ದರು.
ರಸ್ತೆಯಲ್ಲಿ ಪೊಲೀಸರು ದಿಢೀರನೇ ವಾಹನ ನಿಲ್ಲಿಸುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ ಮತ್ತು ಪೊಲೀಸರ ತಪಾಸಣೆಗೆ ಬೆದರಿ ವಾಹನ ಸವಾರರು ತಪ್ಪಿಸಿಕೊಳ್ಳುವ ಯತ್ನದಲ್ಲಿ ಅಪಘಾತವಾಗುತ್ತವೆ ಎಂಬ ದೂರುಗಳು ಹೆಚ್ಚಾಗಿ ಕೇಳಿ ಬಂದಿದ್ದರಿಂದ ಈ ಕ್ರಮ ತೆಗೆದುಕೊಳ್ಳಲಾಗಿತ್ತು.
ಆದರೂ, ಕೆಲವು ಪೊಲೀಸರು ಈ ನಿಯಮ ಉಲ್ಲಂಘಿಸಿ ಅನಗತ್ಯವಾಗಿ ವಾಹನಗಳ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದರು. ಇದರಿಂದ ಬೇಸತ್ತ ಸಾರ್ವಜನಿಕರು ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ದೂರು ನೀಡಿದ್ದರು ಎನ್ನಲಾಗಿದೆ.
ನಿನ್ನೆ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ವಾಹನ ಚಾಲಕರ ದಾಖಲೆಗಳ ಪರಿಶೀಲನೆ ನೆಪದಲ್ಲಿ ಕೆಲವು ಪೊಲೀಸರು ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಹೀಗಾಗಿ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಮತ್ತೊಮ್ಮೆ ಹೊರಡಿಸುವಂತೆ ಸೂಚನೆ ನೀಡಿದ್ದರು ಎಂದು ಗೃಹ ಇಲಾಖೆಯ ಮೂಲಗಳು ತಿಳಿಸಿವೆ.
ಈಗ ಹೊರಡಿಸಿರುವ ಆದೇಶದಲ್ಲಿ ನಾನು ಮತ್ತೊಮ್ಮೆ ಪುನರುಚ್ಚರಿಸುತ್ತೇನೆ. ಕಣ್ಣಿಗೆ ಸ್ಪಷ್ಟವಾಗಿ ಗೋಚರಿಸುವಂತೆ ಸಂಚಾರ ಉಲ್ಲಂಘನೆಯನ್ನು ಮಾಡದ ಹೊರತು ಕೇವಲ ದಾಖಲೆಗಳನ್ನು ಪರಿಶೀಲಿಸುವುದಕ್ಕಾಗಿ ಯಾವುದೇ ವಾಹನವನ್ನು ನಿಲ್ಲಿಸಲಾಗುವುದಿಲ್ಲ.
ಕುಡಿದು ವಾಹನ ಚಲಾಯಿಸುವುದು, ಸಂಚಾರ ನಿಯಮ ಉಲ್ಲಂಘನೆ ಮಾಡುವವರನ್ನು ಮಾತ್ರ ಪರಿಶೀಲಿಸುವಂತೆ ಹೇಳಿದ್ದಾರೆ. ಮತ್ತು ಇದನ್ನು ಅನುಷ್ಟಾನಗೊಳಿಸಲು ಬೆಂಗಳೂರು ಪೊಲೀಸ್ ಕಮಿಷನರ್ ಮತ್ತು ಸಂಚಾರಿ ವಿಭಾಗದ ಜಂಟಿ ಆಯುಕ್ತರಿಗೆ ಸೂಚಿಸಿದ್ದರು.