ಬೆಂಗಳೂರು, ಮೇ 30- ನಗರದ ನೂತನ ಪೊಲೀಸ್ ಆಯುಕ್ತರಾಗಿ ರಾಜ್ಯ ಗುಪ್ತದಳ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಬಿ.ದಯಾನಂದ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನಗರ ಪೊಲೀಸ್ ಆಯುಕ್ತರಾಗಿದ್ದ ಸಿ.ಎಚ್.ಪ್ರತಾಪ್‍ರೆಡ್ಡಿ ಅವರನ್ನು ಆಂತರಿಕ ಭದ್ರತಾ ವಿಭಾಗದ ಡಿಜಿಪಿಯಾಗಿ ನೇಮಿಸಿ ವರ್ಗಾವಣೆ ಮಾಡಿದೆ. ಇದೇ ವೇಳೆ ಬೆಂಗಳೂರು ನಗರ ಸಂಚಾರ ವಿಭಾಗದ ವಿಶೇಷ ಆಯುಕ್ತ (ಎಡಿಜಿಪಿ)ರಾಗಿದ್ದ ಡಾ.ಎಂ.ಎ.ಸಲೀಂ ಅವರಿಗೆ ಬಡ್ತಿ ನೀಡಿ ಸಿಐಡಿ, ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧ ವಿಭಾಗದ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಸಿಐಡಿ ವಿಭಾಗದ ಎಡಿಜಿಪಿಯಾಗಿದ್ದ ಕೆ.ವಿ.ಶರತ್‍ಚಂದ್ರ ಅವರನ್ನು ರಾಜ್ಯ ಗುಪ್ತದಳ ವಿಭಾಗದ ಎಡಿಜಿಪಿಯನ್ನಾಗಿ ನೇಮಕ ಮಾಡಲಾಗಿದೆ. ನೂತನ ನಗರ ಪೊಲೀಸ್ ಆಯುಕ್ತರಾಗಿ ನೇಮಕವಾಗಿರುವ ಬಿ.ದಯಾನಂದ ಅವರು ಈ ಹಿಂದೆ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಅಧಿಕಾರಾವಧಿಯಲ್ಲಿ ಗುಪ್ತದಳ ವಿಭಾಗದ ಎಡಿಜಿಪಿಯಾಗಿ ಕಾರ್ಯನಿರ್ವಹಿಸಿದ್ದರು.
ಪ್ರಣಾಳಿಕೆಯಲ್ಲಿ ಹೇಳಿದಂತೆ ಪಠ್ಯಕ್ರಮ ಪರಿಷ್ಕರಣೆ : ಸಚಿವ ಮಧುಬಂಗಾರಪ್ಪ
ಹಲವು ಬಾರಿ ನಗರ ಪೊಲೀಸ್ ಆಯುಕ್ತರ ಹುದ್ದೆಗೆ ಅವರ ಹೆಸರು ಕೇಳಿ ಬಂದಿತ್ತಾದರೂ ಗುಪ್ತದಳ ವಿಭಾಗದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದರಿಂದ ಸರ್ಕಾರಗಳು ಅದೇ ವಿಭಾಗದಲ್ಲಿ ಅವರನ್ನು ಮುಂದುವರೆಸಿದ್ದವು.
ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಕಾರಕ್ಕೆ ಬರುತ್ತಿದ್ದಂತೆ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ನಡೆಸಲು ಮುಂದಾಗಿದ್ದು, ಮೊದಲ ಹಂತವಾಗಿ ಬೆಂಗಳೂರು ನಗರದಲ್ಲಿ ಬದಲಾವಣೆಗೆ ಮುನ್ನುಡಿ ಬರೆದಿದೆ.
ದಯಾನಂದ್ ಅವರು ಈ ಹಿಂದೆ ಬೆಂಗಳೂರು ನಗರದ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು.
#Bangalore, #PoliceCommissioner, dayanand, appointed,