ಬೆಳಗಾವಿ,ಡಿ.20- ಸುವರ್ಣ ವಿಧಾನಸೌಧದ ವಿಧಾನಸಭೆಯಲ್ಲಿ ಚಳಿಗಾಲದ ಅಧಿವೇಶನದ ಕಾರ್ಯಕಲಾಪಗಳು ಒಟ್ಟು 64 ಗಂಟೆಗಳ ಕಾಲ ಜರುಗಿವೆ. ಹದಿನಾರನೇ ವಿಧಾನಸಭೆಯ 5ನೇ ಅಧಿವೇಶನವು ಡಿಸೆಂಬರ್ 9ರಿಂದ 19ರವರೆಗೆ 8 ದಿನಗಳ ಕಾಲ ಸುಮಾರು 64 ಗಂಟೆಗಳ ಕಾಲ ಕಾರ್ಯಕಲಾಪ ನಡೆಸಲಾಯಿತು ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ತಿಳಿಸಿದರು.
ಈ ಅಧಿವೇಶನದಲ್ಲಿ ಧನವಿನಿಯೋಗ ವಿಧೇಯಕವೂ ಸೇರಿದಂತೆ ಒಟ್ಟು 16 ವಿಧೇಯಕಗಳನ್ನು ಮಂಡಿಸಿ, ಪರ್ಯಾಲೋಚಿಸಿ ಅಂಗೀಕರಿಸಲಾಗಿದೆ. 2024ನೇ ಸಾಲಿನ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣೆ) (ತಿದ್ದುಪಡಿ) ವಿಧೇಯಕ ಮತ್ತು 2024ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕಗಳನ್ನು ಹಿಂಪಡೆಯಲಾಗಿದೆ ಎಂದು ಅವರು ಕಾರ್ಯಕಲಾಪಗಳ ಮಾಹಿತಿಯನ್ನು ನೀಡಿದರು.
ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ 8 ವರದಿಗಳು ಮತ್ತು ಕರ್ನಾಟಕ ವಿಧಾನಮಂಡಲ ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳ 7 ವರದಿಗಳನ್ನು ಸದನದಲ್ಲಿ ಮಂಡಿಸಲಾಗಿದೆ. ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ನಡೆದ ಚರ್ಚೆಯಲ್ಲಿ 49 ಸದಸ್ಯರು ಭಾಗವಹಿಸಿದ್ದು ಸುಮಾರು 13 ಗಂಟೆ 11 ನಿಮಿಷಗಳ ಕಾಲ ಚರ್ಚೆ ನಡೆಸಲಾಗಿದೆ. ನಿಯಮ 60ರಡಿ ನೀಡಿದ್ದ 2 ನಿಲುವಳಿ ಸೂಚನೆಗಳನ್ನು ನಿಯಮ 69ಕ್ಕೆ ಪರಿವರ್ತಿಸಿರುವುದು ಸೇರಿದಂತೆ ಒಟ್ಟು ನಾಲ್ಕು ಸೂಚನೆಗಳನ್ನು ನಿಯಮ 69ರಡಿ ಚರ್ಚಿಸಲಾಗಿದೆ ಎಂದರು.
ಒಟ್ಟು 3004 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಸದನದಲ್ಲಿ ಉತ್ತರಿಸಬೇಕಾಗಿದ್ದ 150 ಪ್ರಶ್ನೆಗಳ ಪೈಕಿ 137 ಪ್ರಶ್ನೆಗಳಿಗೆ ಹಾಗೂ ಲಿಖಿತ ಮೂಲಕ ಉತ್ತರಿಸುವ 2,237 ಪ್ರಶ್ನೆಗಳ ಪೈಕಿ 1,794 ಪ್ರಶ್ನೆಗಳಿಗೆ ಉತ್ತರಗಳನ್ನು ಸ್ವೀಕರಿಸಲಾಗಿದೆ. ಗಮನ ಸೆಳೆಯುವ 444 ಸೂಚನೆಗಳ ಪೈಕಿ 294 ಸೂಚನೆಗಳಿಗೆ ಉತ್ತರವನ್ನು ಸ್ವೀಕರಿಸಲಾಗಿದೆ. ನಿಯಮ 351ರಡಿ 160 ಸೂಚನೆಗಳನ್ನು ಅಂಗೀಕರಿಸಿದ್ದು, 80 ಸೂಚನೆಗಳ ಉತ್ತರಗಳನ್ನು ಸ್ವೀಕರಿಸಲಾಗಿದೆ. ಶೂನ್ಯ ವೇಳೆಯಲ್ಲಿ ಒಟ್ಟು 05 ಸೂಚನೆಗಳನ್ನು ಚರ್ಚಿಸಲಾಗಿದೆ ಎಂದು ಅವರು ವಿವರಿಸಿದರು.
ಇತ್ತೀಚೆಗೆ ನಿಧನ ಹೊಂದಿದ ಗಣ್ಯರಿಗೆ ಸಂತಾಪ ಸೂಚನಾ ನಿರ್ಣಯ ಮಂಡಿಸಿ ಅಂಗೀಕರಿಸಲಾಗಿದೆ. ರಾಷ್ಟ್ರಪತಿಗಳು, ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಬಗ್ಗೆ ಕಾರ್ಯದರ್ಶಿಯವರ ವರದಿಯನ್ನು ಸಹ ಮಂಡಿಸಲಾಗಿದೆ ಎಂದರು.ರಾಜ್ಯದಲ್ಲಿ ಅಧಿಕ ಮಳೆಯಿಂದ ಉಂಟಾದ ನಷ್ಟ ಕುರಿತಂತೆ ಕಂದಾಯ ಸಚಿವರು ನೀಡಿದ ಹೇಳಿಕೆಯ ಮೇಲೆ ಚರ್ಚಿಸಲಾಗಿದ್ದು, ಕಂದಾಯ ಸಚಿವರು ಹಾಗೂ ಮುಖ್ಯಮಂತ್ರಿಯವರು ಸ್ಪಷ್ಟೀಕರಣ ನೀಡಿದ್ದಾರೆ. 2024-25ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತು ಹಾಗೂ ರಾಜ್ಯ ಹಣಕಾಸಿನ ಮಧ್ಯವಾರ್ಷಿಕ ಪರಿಶೀಲನಾ ವರದಿಯನ್ನು ಮಂಡಿಸಿ ಡಿ.17ರಂದು ಮತಕ್ಕೆ ಹಾಕಿ ಅಂಗೀಕರಿಸಲಾಯಿತು ಎಂದು ವಿವರಿಸಿದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸೆನೆಟ್ಗೆ ಮೂರು ಸದಸ್ಯರನ್ನು ನಾಮನಿರ್ದೇಶನ ಮಾಡಲು ಸದನವು ಸಭಾಧ್ಯಕ್ಷರಿಗೆ ಡಿ.18ರಂದು ಅಧಿಕಾರ ನೀಡಿದೆ. ಸದನದಲ್ಲಿ ಟಿ.ಬಿ.ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಅಂತಾರಾಷ್ಟ್ರೀಯ ವಿಶ್ವ ಚೆಸ್ ಚಾಂಪಿಯನ್ಶಿಪ್ ಪಟ್ಟವನ್ನು ಮುಡಿಗೇರಿಸಿಕೊಂಡ ಭಾರತದ ಗುಖೇಶ್ ದೊಮರಾಜು ಅವರಿಗೆ ಅಭಿನಂದನೆ ಸಲ್ಲಿಸಲಾಗಿದೆ.
ಸದನ ನಡೆಸಲು ಸಹಕರಿಸಿದ ಸಭಾನಾಯಕರಾದ ಮುಖ್ಯಮಂತ್ರಿಯವರಿಗೆ, ವಿರೋಧ ಪಕ್ಷದ ನಾಯಕರಿಗೆ, ಸಚಿವ ಸಂಪುಟದ ಸದಸ್ಯರಿಗೆ, ಸರ್ಕಾರಿ ಮುಖ್ಯ ಸಚೇತಕರಿಗೆ ಎಲ್ಲಾ ಸದಸ್ಯರಿಗೆ ಮಾಧ್ಯಮ ಪ್ರತಿನಿಧಿಗಳಿಗೆ, ಇಲಾಖಾ ಮುಖ್ಯಸ್ಥರು, ಅಧಿಕಾರಿ-ಸಿಬ್ಬಂದಿಗೆ, ಬೆಳಗಾವಿಯಲ್ಲಿ ವಸತಿ ಮತ್ತು ಸಾರಿಗೆ ವ್ಯವಸ್ಥೆ ಮಾಡಿದ ಶಾಸಕರು ಮತ್ತು ನಿರಂತರವಾಗಿ ಪ್ರಯತ್ನಿಸಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಎಲ್ಲರಿಗೂ ಹಾಗೂ ವಿಶೇಷವಾಗಿ ಬೆಳಗಾವಿ ಜಿಲ್ಲಾಡಳಿತಕ್ಕೆ ಹಾಗೂ ಕಾನೂನು ಸುವ್ಯವಸ್ಥೆಯ ಜವಾಬ್ದಾರಿಗಳನ್ನು ಸೂಕ್ತವಾಗಿ ನಿರ್ವಹಿಸಿದ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಿಬ್ಬಂದಿಗೆ ಹಾಗೂ ವಿಧಾನಸಭೆ ಸಚಿವಾಲಯದ ಅಧಿಕಾರಿ ಹಾಗೂ ಸಿಬ್ಬಂದಿಗೆ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಹೇಳಿದರು.