ಬೆಂಗಳೂರು, ಮಾ. 8- ಮುಂಬರುವ ಬೇಸಿಗೆಯಲ್ಲಿ ಕೊಳೆಗೇರಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗದಂತೆ ಕ್ರಮ ಕೈಗೊಳ್ಳುವಂತೆ ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನಗರದ ಪಂತರಪಾಳ್ಯ, ನಾಯಂಡನಹಳ್ಳಿ ಪ್ರದೇಶಗಳಿಗೆ ಭೇಟಿ ನೀಡಿ ಜಲಮಂಡಳಿ ವತಿಯಿಂದ ಕೈಗೊಳ್ಳಲಾಗಿದ್ದ ಬೇಸಿಗೆ ನಿರ್ವಹಣಾ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅವರು ಅಧಿಕಾರಿಗಳಿಗೆ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ ನೀಡಿದರು.
ಈ ವೇಳೆ ಸ್ಥಳೀಯರಿಗೆ ನೀರು ಪೂರೈಸಲು ಅಳವಡಿಸಿರುವ ನೀರಿನ ಟ್ಯಾಂಕ್‌ಗಳ ವ್ಯವಸ್ಥೆ ಮತ್ತು ನೀರು ಸರಬರಾಜಿನ ವ್ಯವಸ್ಥೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.ಪರಿಶೀಲನೆ ವೇಳೆ ಸ್ಥಳೀಯ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ಜನರ ಅಹವಾಲುಗಳನ್ನು ಆಲಿಸಿದರು. ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಮಂಡಳಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಭರವಸೆ ನೀಡಿದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ಬೇಸಿಗೆಯಲ್ಲಿ ನಗರದಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ವಿಶೇಷ ಗಮನ ಹರಿಸಲಾಗುತ್ತಿದೆ ಎಂದು ಅವರು ಹೇಳಿದರು.
ಪರಿಶೀಲನೆಯ ಬಳಿಕ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಕಚೇರಿಗೆ ಸೀಮಿತವಾಗದೆ ಫೀಲ್‌್ಡನಲ್ಲಿ ಇದ್ದು ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು. ವಿಶೇಷವಾಗಿ ಕೊಳಗೇರಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ತೊಂದರೆ ಆಗದಂತೆ ಮುಂಜಾಗ್ರತೆ ವಹಿಸಬೇಕು ಎಂದು ಸೂಚಿಸಿದರು.
