ಬೆಂಗಳೂರು, ಜು.31- ಯಶವಂತಪುರ ರೈಲ್ವೇ ಓವರ್‌ಬ್ರಿಡ್ಜ್ ಅಗಲೀಕರಣ ಕಾಮಗಾರಿಯನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸುವಂತೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತ ಡಾ. ರಾಜೇಂದ್ರ ಕೆ.ವಿ. ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಕಾಮಗಾರಿ ನಡೆಯುತ್ತಿರುವ ಪ್ರದೇಶವು ನಗರದ ಪ್ರಮುಖ ಭಾಗವಾಗಿರುವುದರಿಂದ ಸ್ವಚ್ಛತೆ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಿದರು.
ಕಾಮಗಾರಿ ಸ್ಥಳದಲ್ಲಿ ಕಸ ಸುರಿಯದಂತೆ ಕ್ರಮ ಕೈಗೊಳ್ಳಬೇಕು, ಅನಧಿಕೃತ ವಾಹನ ನಿಲುಗಡೆ ತಡೆಯಲು ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕು ಹಾಗೂ ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಪ್ರೋಚ್ ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ ಆಯುಕ್ತರು, ರೈಲ್ವೇ ಲೆವೆಲ್ ಕ್ರಾಸಿಂಗ್‌ನನ್ನೂ ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದರು.ಪರಿಶೀಲನೆ ವೇಳೆ ರೈಲ್ವೇ ಅಧಿಕಾರಿಗಳು, ಮುಖ್ಯ ಅಭಿಯಂತರರು, ಗುತ್ತಿಗೆದಾರರು ಹಾಗೂ ಪಾಲಿಕೆಯ ಹಿರಿಯ ಎಂಜಿನಿಯರಿಂಗ್ ಅಧಿಕಾರಿಗಳು ಉಪಸ್ಥಿತರಿದ್ದರು.
ಇದೇ ವೇಳೆ ಪಾಲಿಕೆ ಕಚೇರಿಯಲ್ಲಿ ಮಲ್ಲೇಶ್ವರ ಕ್ರೀಡಾ ಸಂಕೀರ್ಣದ ನಿರ್ವಹಣೆ ಕುರಿತು ಸಭೆಯೂ ನಡೆಯಿತು. ಆಯುಕ್ತ ಡಾ. ರಾಜೇಂದ್ರ ಕೆ.ವಿ. ಹಾಗೂ ಮಲ್ಲೇಶ್ವರ ಕ್ಷೇತ್ರದ ಶಾಸಕ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಸಭೆಯಲ್ಲಿ ಪಾಲ್ಗೊಂಡು, ಕ್ರೀಡಾ ಸಂಕೀರ್ಣವನ್ನು ಸಮರ್ಥವಾಗಿ ನಿರ್ವಹಿಸಿ ಕ್ರೀಡಾಸಕ್ತರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವಂತೆ ಸೂಚಿಸಿದರು.
ಕ್ರೀಡಾ ಸಂಕೀರ್ಣದ ನಿರ್ವಹಣೆಗೆ ಟೆಂಡರ್ ಪಡೆದಿರುವ ಮಿಶೆಝೋ ಸ್ಪೋರ್ಟ್‌್ಸ ಸಂಸ್ಥೆಯ ಪ್ರತಿನಿಧಿಗಳು ಕಾರ್ಯಯೋಜನೆಯನ್ನು ಸಭೆಯಲ್ಲಿ ಮಂಡಿಸಿದರು. ಸಭೆಯಲ್ಲಿ ಪಾಲಿಕೆಯ ಎಂಜಿನಿಯರಿಂಗ್ ಅಧಿಕಾರಿಗಳೂ ಭಾಗವಹಿಸಿದ್ದರು.
