ಬೆಂಗಳೂರು, ಮಾ.29- ಕಾರೊಂದು ವೇಗವಾಗಿ ಬಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಹೈಗ್ರೌಂಡ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ಕನ್ನಿಂಗ್‌ಹ್ಯಾಂ ರಸ್ತೆಯ ವಕ್ಫ್ ಬೋರ್ಡ್ ಮುಂಭಾಗ ಇಂದು ಮುಂಜಾನೆ 2.20ರ ಸುಮಾರಿನಲ್ಲಿ ಇಬ್ಬರು ಸ್ಕೂಟರ್‌ನಲ್ಲಿ ಹೋಗುತ್ತಿದ್ದರು. ಏಕಮುಖ ಸಂಚಾರದಲ್ಲಿ ಅತಿವೇಗವಾಗಿ ಬಂದ ಕಾರು ಅವರ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರು ಇಬ್ಬರು ಕೆಳಗೆ ಬಿದ್ದು ಗಂಭೀರ ಗಾಯಗೊಂಡರು.
ದಾರಿಹೋಕರು ತಕ್ಷಣ ಅವರಿಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಹೈಗ್ರೌಂಡ್ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
