ಬೆಂಗಳೂರು,ಸೆ.20- ಪ್ರವಾಸಕ್ಕೆ ಹೋಗುತ್ತಿದ್ದ ಟಿಟಿ ವಾಹನಕ್ಕೆ ಅಡ್ಡ ಬಂದ ವ್ಹೀಲಿಂಗ್ ಮಾಡುತ್ತಿದ್ದವರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಮೃತಪಟ್ಟಿರುವ ಘಟನೆ ಜ್ಞಾನಭಾರತಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ.
ಲಗ್ಗೆರೆ ನಿವಾಸಿ ಮನೋಜ್(25) ಮೃತಪಟ್ಟ ದುರ್ದೈವಿ. ಈತ ವೃತ್ತಿಯಲ್ಲಿ ಡೆಲಿವರಿ ಬಾಯ್. ಆರು ಮಂದಿ ಸ್ನೇಹಿತರು ಲಗ್ಗೆರೆಯಿಂದ ಮೈಸೂರಿಗೆ ಇಂದು ಬೆಳಗಿನ ಜಾವ ಚಾಲಕ ರವಿ ಎಂಬುವರೊಂದಿಗೆ ಟಿಟಿ ವಾಹನದಲ್ಲಿ ಪ್ರಯಾಣ ಬೆಳೆಸಿದ್ದರು. ಇವರೆಲ್ಲರೂ ಡೆಲಿವರಿ ಬಾಯ್‌ಗಳು.
ಬೆಳಗಿನ ಜಾವ 2 ಗಂಟೆ ಸುಮಾರಿನಲ್ಲಿ ಈ ವಾಹನ ರಿಂಗ್‌ರಸ್ತೆಯ ಸುಮನಹಳ್ಳಿ ಸಮೀಪ ಅನ್ನಪೂರ್ಣೇಶ್ವರಿ ನಗರದ ಮಹದೇಶ್ವರ ದೇವಸ್ಥಾನದ ಬಳಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಡಿವೈಡರ್ ದಾಟಿ ರಸ್ತೆಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಮನೋಜ್ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.
ವಾಹನದ ಚಾಲಕ ರವಿ ಎಂಬುವವರಿಗೆ ಗಂಭೀರ ಪೆಟ್ಟಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಣ್ಣಪುಟ್ಟ ಗಾಯಗೊಂಡಿರುವ ಇನ್ನುಳಿದ ನಾಲ್ವರು ಹೊರರೋಗಿಗಳಾಗಿ ಚಿಕಿತ್ಸೆ ಪಡೆದು ತೆರಳಿದ್ದಾರೆ.
ಒಂದು ಮೂಲದ ಪ್ರಕಾರ, ಅತೀ ವೇಗ ಹಾಗೂ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಆದರೆ ಮತ್ತೊಂದು ಮೂಲದ ಪ್ರಕಾರ, ಈ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದವರು ಏಕಾಏಕಿ ಟಿಟಿ ವಾಹನಕ್ಕೆ ಅಡ್ಡ ಬಂದಿದ್ದರಿಂದ ಅವರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಮುಂದಾದಾಗ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಜ್ಞಾನಭಾರತಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಘಟನಾ ಸ್ಥಳದ ಸುತ್ತಮುತ್ತಲಿನಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
