ಬೆಂಗಳೂರು, ಸೆ.9- ಮನೆ ಮುಂದೆ ನಿಲ್ಲಿಸುವ ವಾಹಗಳಿಗೂ ಶುಲ್ಕ ವಿಧಿಸುವ ಪ್ರಸ್ತಾವನೆ ಭಾರೀ ವಿವಾದಕ್ಕೆ ಕಾರಣವಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಸಾರ್ವಜನಿಕರಿಂದ ಆಕ್ಷೇಪಣೆಗಳ ಸುರಿಮಳೆಯೇ ಹರಿದುಬಂದಿದೆ.ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿಯಂತ್ರಿಸುವುದು ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಆದಾಯ ಸಂಗ್ರಹಿಸುವ ಉದ್ದೇಶದಿಂದ ಮನೆಗಳ ಮುಂಭಾಗದಲ್ಲಿ ವಾಹನ ಪಾರ್ಕಿಂಗ್‌ಗೆ ಶುಲ್ಕ ವಿಧಿಸುವ ಹೊಸ ಯೋಜನೆಯನ್ನು ಸರ್ಕಾರ ಪ್ರಸ್ತಾಪಿಸಿತ್ತು.
ಈ ಸಂಬಂಧ ಸಾರ್ವಜನಿಕರಿಂದ ಸಲಹೆ ಹಾಗೂ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಸೆಪ್ಟೆಂಬರ್ 10ರವರೆಗೆ ಕಾಲಾವಕಾಶ ನೀಡಲಾಗಿದೆ.ಆದರೆ, ಈ ಯೋಜನೆಗೆ ಸಿಲಿಕಾನ್ ಸಿಟಿಯ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಮನೆ ಮುಂದೆ ವಾಹನ ಪಾರ್ಕಿಂಗ್‌ಗೆ ಶುಲ್ಕ ವಿಧಿಸುವ ಕ್ರಮ ಅವೈಜ್ಞಾನಿಕವಾಗಿದ್ದು, ಇದರಿಂದ ಜನರ ಸಮಸ್ಯೆಗಳು ಮತ್ತಷ್ಟು ಹೆಚ್ಚಾಗಲಿವೆ ಎಂದು ಸಾರ್ವಜನಿಕರು ಸರ್ಕಾರದ ಗಮನಕ್ಕೆ ತಂದಿದ್ದಾರೆ.
ಬೆಂಗಳೂರು ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು, ಮನೆಗಳ ಮುಂಭಾಗದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವುದರಿಂದ ಸಂಚಾರ ಸಮಸ್ಯೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಯಾರೂ ವಾಹನ ನಿಲ್ಲಿಸಬಾರದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಸಚಿವರ ಈ ಹೇಳಿಕೆ ಬಳಿಕ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಅಭಿಪ್ರಾಯ ಹಾಗೂ ಆಕ್ಷೇಪಣೆಗಳನ್ನು ಸಂಗ್ರಹಿಸಲು ಸರ್ಕಾರ ಸೆಪ್ಟೆಂಬರ್ 10 ರವರೆಗೆ ಕಾಲಾವಕಾಶ ನಿಗದಿಪಡಿಸಲಾಗಿದೆ.
ಈಗಾಗಲೇ ಪಾರ್ಕಿಂಗ್ ಶುಲ್ಕದ ವಿಚಾರವಾಗಿ ಸಾರ್ವಜನಿಕರು ಇ-ಮೇಲ್ ಹಾಗೂ ಪತ್ರಗಳ ಮೂಲಕ ಸರ್ಕಾರಕ್ಕೆ ಸಾವಿರಾರು ಸಲಹೆ ಮತ್ತು ದೂರುಗಳನ್ನು ಸಲ್ಲಿಸಿದ್ದಾರೆ.ಯೋಜನೆಯನ್ನೇ ಕೈಬಿಡಿ ಮನೆ ಮುಂದೆ ಪಾರ್ಕಿಂಗ್ ಶುಲ್ಕ ವಿಧಿಸುವ ಯೋಜನೆಯನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂದು ಬಹುತೇಕ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಈ ಯೋಜನೆಯಿಂದ ಸಂಚಾರ ದಟ್ಟಣೆ ಯಾವುದೇ ರೀತಿಯಲ್ಲೂ ಕಡಿಮೆಯಾಗುವುದಿಲ್ಲ. ಬದಲಾಗಿ ಸಾಮಾನ್ಯ ಜನರಿಗೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ ಎಂದು ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ.ಪ್ರತಿ ವಾರ್ಡ್‌ನಲ್ಲಿ ಅಗತ್ಯಕ್ಕೆ ಅನುಗುಣ ವಾಗಿ ಸುಸಜ್ಜಿತ ಪಾರ್ಕಿಂಗ್ ಲಾಟ್‌ಗಳನ್ನು ನಿರ್ಮಿಸಬೇಕು. ವಾಣಿಜ್ಯ ಪ್ರದೇಶಗಳು ಹಾಗೂ ಜನದಟ್ಟಣೆ ಹೆಚ್ಚಿರುವ ಪ್ರದೇಶಗಳಲ್ಲಿ ವೈಜ್ಞಾನಿಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿದರೆ ಮಾತ್ರ ಸಂಚಾರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಸಾರ್ವಜನಿಕರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ನಗರಾಭಿವೃದ್ಧಿ ಇಲಾಖೆಗೆ ಈಗಾಗಲೇ ಸುಮಾರು 5 ಸಾವಿರಕ್ಕೂ ಹೆಚ್ಚು ಆಕ್ಷೇಪಣೆ ಪತ್ರಗಳು ಬಂದಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಾರ್ವಜನಿಕರಿಂದ ಬಂದಿರುವ ಸಲಹೆ ಹಾಗೂ ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಪಾರ್ಕಿಂಗ್ ಶುಲ್ಕ ಯೋಜನೆ ಕುರಿತಂತೆ ಸಾರ್ವಜನಿಕರು ತಮ್ಮ ಆಕ್ಷೇಪಣೆ ಸಲ್ಲಿಸಲು ನಾಳೆ, ಸೆಪ್ಟೆಂಬರ್ 10 ಕೊನೆಯ ದಿನವಾಗಿದ್ದು, ಕೊನೆಯ ಕ್ಷಣದಲ್ಲಿ ಮತ್ತಷ್ಟು ಆಕ್ಷೇಪಣೆಗಳು ಸಲ್ಲಿಕೆಯಾಗುವ ಸಾಧ್ಯತೆ ಇದೆ.ಮನೆ ಮುಂದೆ ಪಾರ್ಕಿಂಗ್‌ಗೆ ಶುಲ್ಕ ವಿಧಿಸುವ ಪ್ರಸ್ತಾವನೆ ಮುಂದುವರಿಯುತ್ತದೆಯೇ ಅಥವಾ ಸಾರ್ವಜನಿಕರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಸರ್ಕಾರ ಯೋಜನೆಯಲ್ಲಿ ಬದಲಾವಣೆ ಮಾಡುತ್ತದೆಯೇ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
