ಬೆಂಗಳೂರು,ಮಾ.10- ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆನೇಕಲ್ ಠಾಣೆ ಪೊಲೀಸರು ಒಬ್ಬಾತನನ್ನು ಬಂಧಿಸಿ ಉಳಿದವರಿಗಾಗಿ ಶೋಧ ಮುಂದುವರೆಸಿದ್ದಾರೆ.
ಆನೇಕಲ್ ತಾಲ್ಲೂಕಿನ ಹೊನ್ನಕಳಸಾಪುರ ನಿವಾಸಿ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ (38) ಮೊನ್ನೆ ರಾತ್ರಿ ಕಾರಿನಲ್ಲಿ ಹೋಗುತ್ತಿದ್ದಾಗ ಟಾಟಾ ಏಸ್ ವಾಹನದಿಂದ ಡಿಕ್ಕಿ ಹೊಡೆಸಿ ನಂತರ ವಾಹನವನ್ನು ಸ್ಥಳದಲ್ಲೇ ಬಿಟ್ಟು ಬೇರೆ ಕಾರಿನಲ್ಲಿ ಅಪಹರಿಸಿದ ದುಷ್ಕರ್ಮಿಗಳು ತಮಿಳುನಾಡಿನ ಡೆಂಕಣಿಕೋಟೆಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬರ್ಬರವಾಗಿ ಕೊಲೆ ಮಾಡಿ ಶವವನ್ನು ಬಿಸಾಡಿ ಪರಾರಿಯಾಗಿದ್ದಾರೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ಪತ್ತೆಗಾಗಿ 7 ತಂಡಗಳನ್ನು ಈಗಾಗಲೇ ರಚಿಸಲಾಗಿದ್ದು, ಈ ತಂಡಗಳು ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಶೋಧ ನಡೆಸುತ್ತಿವೆ.
ಗೋಪಾಲ್ ಕೊಲೆಯಾಗಿರುವ ವಿಷಯ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಕುಟುಂಬಸ್ಥರು, ಸಂಬಂಧಿಕರು ಠಾಣೆ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿ ಕೂಡಲೇ ಕೊಲೆ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ.
ಈ ನಡುವೆ ಉದ್ರಿಕ್ತಗೊಂಡ ಗೋಪಾಲ್ ಸಂಬಂಧಿಕರು ಹೊನ್ನ ಕಳಸಾಪುರದ ಬಾಬು ಎಂಬಾತನ ಮನೆಯ ಕಿಟಕಿಗಳನ್ನು ಪುಡಿಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
